ಸಾರಾಂಶ
ಬೆಂಗಳೂರಿನ ಅರಮನೆ ಮೈದಾನದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನವನ್ನು ಫೆಬ್ರವರಿ ೨೭ ರಂದು ಆಯೋಜಿಸಲಾಗಿದೆ ಎಂದು ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಈ.ಕೃಷ್ಣೇಗೌಡ ತಿಳಿಸಿದರು. ಹಾಸನ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.
ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಈ. ಕೃಷ್ಣೇಗೌಡ ಮಾಹಿತಿಕನ್ನಡಪ್ರಭ ವಾರ್ತೆ ಹಾಸನ
ಬೆಂಗಳೂರಿನ ಅರಮನೆ ಮೈದಾನದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನವನ್ನು ಫೆ.೨೭ ರಂದು ಆಯೋಜಿಸಲಾಗಿದೆ ಎಂದು ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಈ.ಕೃಷ್ಣೇಗೌಡ ತಿಳಿಸಿದರು.ಮಾಧ್ಯಮಗೋಷ್ಠಿಯಲ್ಲಿ ಸೋಮವಾರ ಮಾತಾಡಿ, ಅಂದು ನಡೆಯುವ ಸಮ್ಮೇಳನದಲ್ಲಿ ಮಹತ್ವದ ವಿಷಯಗಳ ಬಗ್ಗೆ ಚರ್ಚೆ ನಡೆಯಲಿದ್ದು ಎಲ್ಲಾ ಸರ್ಕಾರಿ ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
ಹಳೆ ಪಿಂಚಣಿ ಯೋಜನೆ ಮರು ಜಾರಿ, ೭ನೇ ವೇತನ ಆಯೋಗದ ವರದಿಯ ಅನುಷ್ಠಾನ, ಆರೋಗ್ಯ ಸಂಜೀವಿನಿ ಯೋಜನೆ ಲೋಕಾರ್ಪಣೆ ಸೇರಿದಂತೆ ಇನ್ನಿತರ ಬೇಡಿಕೆಗಳನ್ನು ಈಡೇರಿಸಲು ಸರ್ಕಾರಕ್ಕೆ ಮನವಿ ಮಾಡಲಾಗುವುದು ಎಂದರು.ಇದೇ ವೇಳೆ ಹಾಸನ ಜಿಲ್ಲಾ ಸಂಘದ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದೆ, ಸಭೆಯಲ್ಲಿ ಸಂಘದ ಪದಾಧಿಕಾರಿಗಳ ನಡುವೆ ವೈಮನಸ್ಸು ಹಾಗೂ ಸಂಘದಲ್ಲಿ ಅವ್ಯವಹಾರ ನಡೆಯುತ್ತಿದೆ ಎಂದು ಕೆಲ ಮಾಧ್ಯಮಗಳಲ್ಲಿ ಬಂದಿರುವ ಸುದ್ದಿ ಸುಳ್ಳು ಎಂದು ಸ್ಪಷ್ಟಪಡಿಸಿದರು.
‘ಈವರೆಗೂ ಸಂಘದ ಬೈಲಾ ಅನುಗುಣವಾಗಿ ಕೆಲಸ ಮಾಡಿದ್ದೇನೆ, ಸಂಘದ ಬೈಲಾ ವಿರುದ್ಧವಾಗಿ ಯಾವುದೇ ಕೆಲಸ ಮಾಡಿಲ್ಲ, ಜತೆಗೆ ಈ ವರೆಗೆ ಅನೇಕ ಕಾರ್ಯಕ್ರಮವನ್ನು ಆಯೋಜನೆ ಮಾಡಿಯೂ ಪ್ರಸ್ತುತ ೭ ಲಕ್ಷಕ್ಕೂ ಅಧಿಕ ಜನರನ್ನು ಸಂಘದ ಖಾತೆಯಲ್ಲಿ ಉಳಿಸಲಾಗಿದೆ. ನಾನು ಅಧ್ಯಕ್ಷನಾಗಿ ಆಯ್ಕೆಗೊಂಡ ನಂತರ, ಸರ್ಕಾರಿ ನೌಕರರ ಸಂಘದ ಭವನದಲ್ಲಿ ೨ನೇ ಹಂತದಲ್ಲಿ ನಡೆಯುತ್ತಿದ್ದ ಕ್ಲಬ್ ಅನ್ನು ಸರ್ಕಾರಿ ನೌಕರರು ಹಾಗೂ ಅವರ ಕುಟುಂಬಸ್ಥರ ಹಿತದೃಷ್ಟಿಯಿಂದ ಸದಸ್ಯರ ಒಮ್ಮತ ಅಭಿಪ್ರಾಯ ಪಡೆದು ರದ್ದುಪಡಿಸಲಾಗಿದೆ. ನನ್ನ ಅವಧಿಯಲ್ಲಿ ಸರ್ಕಾರಿ ನೌಕರರ/ಅಧಿಕಾರಿ ವರ್ಗದ ಸುಮಾರು ೫೦೦೦ ಮಕ್ಕಳಿಗೆ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗಿರುತ್ತದೆ. ನನ್ನ ಅವಧಿಯಲ್ಲಿ ೪ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವನ್ನು ಅದ್ಧೂರಿಯಾಗಿ ಆಯೋಜಿಸಿದ್ದು, ಈ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ೩೦೦೦ಕ್ಕೂ ಅಧಿಕ ಸರ್ಕಾರಿ ನೌಕರರು/ಅಧಿಕಾರಿಗಳು ಭಾಗವಹಿಸಿರುತ್ತಾರೆ’ ಎಂದು ಹೇಳಿದರು.ಜಿಲ್ಲಾ ಮಟ್ಟದಿಂದ ರಾಷ್ಟ್ರ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾದ ಪ್ರತಿಯೊಬ್ಬ ಸರ್ಕಾರಿ ನೌಕರರಿಗೆ/ಅಧಿಕಾರಿಗಳಿಗೆ ನೌಕರರ ಸಂಘದಿಂದ ಆರ್ಥಿಕ ಪ್ರೋತ್ಸಾಹಧನವನ್ನು ಪಾವತಿ ಮಾಡಿ ಪ್ರೋತ್ಸಾಹ ನೀಡಲಾಗಿದೆ ಎಂದು ಮಾಹಿತಿ ನೀಡಿದರು.
ಸಂಘದ ರಾಜ್ಯ ಉಪಾಧ್ಯಕ್ಷ ದಿನೇಶ್, ತಾಲೂಕು ಅಧ್ಯಕ್ಷ ಕೃಷ್ಣಮೂರ್ತಿ, ಶಿವಶಂಕರ್, ಕುಮಾರಸ್ವಾಮಿ, ಲಕ್ಷ್ಮೀಕಾಂತ್, ಮಂಜಪ್ಪ, ಇತರರು ಉಪಸ್ಥಿತರಿದ್ದರು.ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಕೃಷ್ಣೇಗೌಡ.