12 ರಂದು ಗ್ಯಾರಂಟಿ ಯೋಜನೆಗಳ ಸಮಾವೇಶ

| Published : Mar 10 2024, 01:31 AM IST

ಸಾರಾಂಶ

ಮುಖ್ಯಮಂತ್ರಿಗಳ ನೇತೃತ್ವದಲ್ಲಿ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶವನ್ನು ಮಾ.೧೨ರಂದು ನಗರದಲ್ಲಿ ನಡೆಯಲಿರುವ ಹಿನ್ನೆಲೆಯಲ್ಲಿ ಪಶುಸಂಗೋಪನೆ, ರೇಷ್ಮೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಅವರು ಶನಿವಾರ ನಗರದಲ್ಲಿ ಸಿದ್ದತೆಗಳನ್ನು ಪರಿಶೀಲಿಸಿದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶವನ್ನು ಮಾ.೧೨ರಂದು ನಗರದಲ್ಲಿ ನಡೆಯಲಿರುವ ಹಿನ್ನೆಲೆಯಲ್ಲಿ ಪಶುಸಂಗೋಪನೆ, ರೇಷ್ಮೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಅವರು ಶನಿವಾರ ನಗರದಲ್ಲಿ ಸಿದ್ದತೆಗಳನ್ನು ಪರಿಶೀಲಿಸಿದರು.ಸಮಾವೇಶ ನಡೆಯಲಿರುವ ಡಾ.ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣಕ್ಕೆ ಶಾಸಕರು ಹಾಗೂ ಎಂಎಸ್ಐಎಲ್ ಅಧ್ಯಕ್ಷ ಸಿ.ಪುಟ್ಟರಂಗಶೆಟ್ಟಿ, ಜಿಲ್ಲಾಧಿಕಾರಿ ಹಾಗೂ ಇತರೆ ಅಧಿಕಾರಿಗಳೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವರು ಭೇಟಿ ನೀಡಿ ಸಿದ್ದತೆಗಳನ್ನು ವೀಕ್ಷಿಸಿದರು. ಕ್ರೀಡಾಂಗಣದಲ್ಲಿ ಹೆಚ್ಚು ಜನರು ಕುಳಿತುಕೊಳ್ಳಲು ಆಸನಗಳ ವ್ಯವಸ್ಥೆ, ವೇದಿಕೆ, ಕುಡಿಯುವ ನೀರು ಇನ್ನಿತರ ಅಗತ್ಯ ವ್ಯವಸ್ಥೆಗಳನ್ನು ಸಮರ್ಪಕವಾಗಿ ಕಲ್ಪಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗ್ಯಾರಂಟಿ ಯೋಜನೆಯ ಫಲಾನುಭವಿಗಳ ಸಮಾವೇಶ ಸಂಬಂಧ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸಮಾವೇಶಕ್ಕಾಗಿ ಕೈಗೊಂಡಿರುವ ಸಿದ್ದತೆಗಳ ಬಗ್ಗೆ ಮಾಹಿತಿ ಪಡೆದು ಅಗತ್ಯ ಸಲಹೆ, ಸೂಚನೆಗಳನ್ನು ನೀಡಿದರು. ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ಮಾತನಾಡಿ ಸಮಾವೇಶಕ್ಕೆ ಎಲ್ಲಾ ಹೋಬಳಿ, ಗ್ರಾಪಂಗಳಿಂದ ಫಲಾನುಭವಿಗಳನ್ನು ಕರೆತಂದು ಕಾರ್ಯಕ್ರಮ ಮುಗಿದ ನಂತರ ಕಳುಹಿಸಿಕೊಡಬೇಕು. ತಿಂಡಿ, ಊಟದ ವ್ಯವಸ್ಥೆ ಮಾಡಬೇಕು. ಯಾವುದೇ ಲೋಪ ಆಗಬಾರದು. ಇದಕ್ಕಾಗಿ ಹೋಬಳಿ, ತಾಲೂಕು ಮಟ್ಟದಲ್ಲಿಯೂ ಅಧಿಕಾರಿಗಳನ್ನು ನಿಯೋಜಿಸಿ ಸೂಕ್ತ ವ್ಯವಸ್ಥೆ ಮಾಡಬೇಕು. ಸಮಾವೇಶಕ್ಕೆ ಬಸ್‌ಗಳು ಹಾಗೂ ಇನ್ನಿತರ ಸಿದ್ದತೆಗಳನ್ನು ಕೈಗೊಳ್ಳಬೇಕು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಸಮಾವೇಶದಲ್ಲಿ ಹೆಚ್ಚಿನ ಜನರು ಪಾಲ್ಗೊಳ್ಳುವುದರಿಂದ ವೇದಿಕೆಯ ಚಟುವಟಿಕೆಗಳು ಎಲ್ಲರಿಗೂ ಕಾಣುವಂತೆ ಮಾಡಲು ಬೃಹತ್ ಎಲ್‌ಇಡಿ ಪರದೆಗಳನ್ನು ಸಹ ಹಾಕಬೇಕು. ವೇದಿಕೆಯು ಆಕರ್ಷಕವಾಗಿ ಇರಬೇಕು. ಸಮಾವೇಶ ಅಚ್ಚುಕಟ್ಟಾಗಿ ಆಯೋಜನೆ ಮಾಡಬೇಕೆಂದು ಅವರು ತಿಳಿಸಿದರು. ಡಿಸಿ ಶಿಲ್ಪಾನಾಗ್ ಮಾತನಾಡಿ, ಸಮಾವೇಶವನ್ನು ಯಶಸ್ವಿಗೊಳಿಸಲು ವೇದಿಕೆ, ಶಿಷ್ಟಚಾರ, ಆಹಾರ, ಸ್ವಚ್ಛತೆ, ಭದ್ರತೆ, ಆರೋಗ್ಯ, ಪ್ರಚಾರ, ಬಸ್‌ಗಳ ಸಮಿತಿಗಳನ್ನು ರಚಿಸಿ ಅಧಿಕಾರಿಗಳಿಗೆ ಜವಾಬ್ದಾರಿಗಳನ್ನು ವಹಿಸಲಾಗಿದೆ. ಶಿವರಾತ್ರಿ ಹಬ್ಬದ ದಿನವಾದ ಶುಕ್ರವಾರವೂ ಅಧಿಕಾರಿಗಳು ಸಿದ್ದತೆ ಕಾರ್ಯ ಕೈಗೊಂಡಿದ್ದರು ಎಂದು ತಿಳಿಸಿದರು.

ಜಿಪಂ ಉಪ ಕಾರ್ಯದರ್ಶಿ ಪಿ.ಲಕ್ಷ್ಮೀ, ಕೆಎಸ್ಆರ್ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಅಶೋಕಕುಮಾರ್, ಆಹಾರ ಇಲಾಖೆಯ ಜಂಟಿ ನಿರ್ದೇಶಕಿ ಸವಿತಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕ ಮಂಜುನಾಥ್, ಜಿಲ್ಲಾ ಉದ್ಯೋಗಾಧಿಕಾರಿ ಮಹಮ್ಮದ್ ಅಕ್ಬರ್ ಅವರು ಗ್ಯಾರೆಂಟಿ ಯೋಜನೆಗಳ ಪ್ರಗತಿ ಬಗ್ಗೆ ಸಚಿವರಿಗೆ ಮಾಹಿತಿ ನೀಡಿದರು. ಸಭೆಯಲ್ಲಿ ಶಾಸಕರು, ಎಂಎಸ್ಐಎಲ್ ಅಧ್ಯಕ್ಷ ಸಿ.ಪುಟ್ಟರಂಗಶೆಟ್ಟಿ, ಶಾಸಕರಾದ ಎ.ಆರ್. ಕೃಷ್ಣಮೂರ್ತಿ, ಕಾಡಾ ಅಧ್ಯಕ್ಷ ಪಿ. ಮರಿಸ್ವಾಮಿ, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆನಂದ್ ಪ್ರಕಾಶ್ ಮೀನಾ, ಎಸ್ಪಿ ಪದ್ಮಿನಿಸಾಹು, ಎಡಿಸಿ ಗೀತಾ ಹುಡೇದ, ಉಪವಿಭಾಗಾಧಿಕಾರಿ ಎಂ. ಶಿವಮೂರ್ತಿ, ನಗರಸಭೆ ಪೌರಾಯುಕ್ತ ಎಸ್.ವಿ. ರಾಮದಾಸ್, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.