ಮಾಸಾಂತ್ಯಕ್ಕೆ 7ನೇ ವೇತನಾಯೋಗ ವರದಿ ಅನುಷ್ಠಾನದ ವಿಶ್ವಾಸ: ಷಡಾಕ್ಷರಿ

| Published : Jun 21 2024, 01:10 AM IST

ಸಾರಾಂಶ

ಈಗ ಏಳನೇ ವೇತನ ಆಯೋಗ ತನ್ನ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿ ನಾಲ್ಕು ತಿಂಗಳೇ ಗತಿಸಿದೆ. ಇನ್ನೂ ವರದಿ ಜಾರಿಯಾಗಿಲ್ಲ ಎಂದು ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್‌.ಷಡಾಕ್ಷರಿ ಬೇಸರ ವ್ಯಕ್ತಪಡಿಸಿದರು.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

7ನೇ ವೇತನ ಆಯೋಗ ಜಾರಿಗೆ ಈಗಾಗಲೇ ವರದಿಯನ್ನು ಸಿದ್ಧಪಡಿಸಿ ರಾಜ್ಯ ಸರ್ಕಾರಕ್ಕೆ ನೀಡಲಾಗಿದೆ. ಆಯೋಗದ ವರದಿ ಅನುಷ್ಠಾನ ಕುರಿತು ಬರುವ ಸಚಿವ ಸಂಪುಟದ ಸಭೆಯಲ್ಲಿ ತೀರ್ಮಾನ ಕೈಗೊಳ್ಳುವ ವಿಶ್ವಾಸವಿದೆ ಎಂದು ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್‌.ಷಡಾಕ್ಷರಿ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆ ವತಿಯಿಂದ ಜೂ.23ರಂದು ಬೆಳಗ್ಗೆ 10.30ಕ್ಕೆ ಕುವೆಂಪು ರಂಗಮಂದಿರದಲ್ಲಿ ನೂತನವಾಗಿ ಆಯ್ಕೆಯಾಗಿರುವ ಜಿಲ್ಲೆಯ ಜನಪ್ರತಿನಿಧಿಗಳಿಗೆ ಅಭಿನಂದನೆ, ಸಂಘದ ನವಿಕೃತ ಭವನದ ಉದ್ಘಾಟನೆ, ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಹಾಗೂ ಜಿಲ್ಲೆಯ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹಾಗೂ ನವೀಕೃತ ಸರ್ಕಾರಿ ನೌಕರರ ಭವನ ವನ್ನು ಸಂಸದ ಬಿ.ವೈ.ರಾಘವೇಂದ್ರ ಉದ್ಘಾಟಿಸಲಿದ್ದಾರೆ. ಶಾಸಕರಾದ ಎಸ್.ಎನ್.ಚನ್ನಬಸಪ್ಪ ಹಾಗೂ ಡಿ.ಎಸ್.ಅರುಣ್ ಪ್ರತಿಭಾ ಪುರಸ್ಕಾರ ವಿತರಿಸಲಿದ್ದಾರೆ ಎಂದರು.

ನೂತನ ಸಂಸದ ಬಿ.ವೈ.ರಾಘವೇಂದ್ರ, ವಿಧಾನ ಪರಿಷತ್‌ ಸದಸ್ಯರಾದ ಎಸ್.ಎಲ್.ಭೋಜೇಗೌಡ, ಡಾ. ಧನಂಜಯ ಸರ್ಜಿ, ಬಲ್ಕಿಶ್ ಬಾನು, ಎಂ.ಐ.ಡಿ.ಬಿ. ಅಧ್ಯಕ್ಷ ಆರ್.ಎಂ.ಮಂಜುನಾಥಗೌಡ, ಸೂಡಾ ಅಧ್ಯಕ್ಷ ಎಚ್.ಎಸ್.ಸುಂದರೇಶ್, ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ರವಿಕುಮಾರ್, ಸಾಂಬಾರು ಅಭಿವೃದ್ಧಿ ಮಂಡಳಿ ಅಧ್ಯಕ್ಷೆ ಜಿ.ಪಲ್ಲವಿ ಅವರಿಗೆ ಅಭಿನಂದಿಸಲಾಗುವುದು ಎಂದರು.

ಮುಖ್ಯ ಅತಿಥಿಯಾಗಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿ.ಪಂ.ಸಿಇಓ ಸ್ನೇಹಲ್ ಸುಧಾಕರ್ ಲೋಖಂಡೆ, ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ. ಮಿಥುನ್‍ಕುಮಾರ್, ಹಾಗೂ ರಾಜ್ಯ ಸಂಘದ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದರು.

ಸರ್ವಜ್ಞ ವೃತ್ತದಲ್ಲಿ 26 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಸಮುದಾಯ ಭವನವನ್ನು ಇನ್ನೆರಡು ತಿಂಗಳಲ್ಲಿ ಉದ್ಘಾಟಿಸಲಾಗುವುದು. ಈ ತಿಂಗಳ ಅಂತ್ಯ ಅಥವಾ ಮುಂದಿನ ತಿಂಗಳ ಮೊದಲ ವಾರದಲ್ಲಿ ಶಿವಮೊಗ್ಗದಲ್ಲಿ ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾ ಕೂಟವನ್ನು ಹಮ್ಮಿಕೊಂಡಿದ್ದು, 102 ಕ್ರೀಡೆ ಗಳಿದ್ದು, ಸುಮಾರು 11 ಸಾವಿರ ಸ್ಪರ್ಧಿಗಳು ಭಾಗವಹಿಸಲಿದ್ದಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಸಂಘದ ರಾಜ್ಯ ಉಪಾಧ್ಯಕ್ಷ ಆರ್.ಮೋಹನ್‍ಕುಮಾರ್, ಜಿಲ್ಲಾ ಕಾರ್ಯದರ್ಶಿ ಡಿ.ಟಿ.ಕೃಷ್ಣಮೂರ್ತಿ, ಪದಾಧಿಕಾರಿಗಳಾದ ಆರ್.ಪಾಪಣ್ಣ, ಉದಯಸಿಂಗ್, ಸಿ.ಎ.ಹಿರೇಮಠ್ ಇನ್ನಿತರರು ಉಪಸ್ಥಿತರಿದ್ದರು.

ಏಳನೇ ವೇತನ ಆಯೋಗ ಜಾರಿ ತೀರ್ಮಾನ ಸಾಧ್ಯತೆಸರ್ಕಾರ ಏಳನೇ ವೇತನ ಆಯೋಗ ಜಾರಿಯಲ್ಲಿ ಈವರೆಗೆ ವಿಳಂಬ ನೀತಿ ಅನುಸರಿಸಿದೆ. ಈ ಹಿಂದೆ ವೇತನ ಆಯೋಗ ಸರ್ಕಾರಕ್ಕೆ ವರದಿ ಸಲ್ಲಿಸಿದ ಒಂದು ತಿಂಗಳೊಳಗಾಗಿ ಆಯೋಗದ ಶಿಫಾರಸುಗಳನ್ನು ಅನುಷ್ಠಾನಕ್ಕೆ ತರುವ ಸಂಪ್ರದಾಯವಿತ್ತು. ಆದರೆ, ಈಗ ಏಳನೇ ವೇತನ ಆಯೋಗ ತನ್ನ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿ ನಾಲ್ಕು ತಿಂಗಳೇ ಗತಿಸಿದೆ. ಇನ್ನೂ ವರದಿ ಜಾರಿಯಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಇದೇ ಜೂನ್ ಅಂತ್ಯದ ಒಳಗಾಗಿ ಸರ್ಕಾರ ಆಯೋಗದ ವರದಿಯನ್ನು ಜಾರಿಗೊಳಿಸುವ ವಿಶ್ವಾಸವಿದೆ. ಒಂದು ವೇಳೆ ಜಾರಿಯಾಗದಿದ್ದರೆ ಮುಂದೇನು ಮಾಡಬೇಕು ಎಂಬುದರ ಬಗ್ಗೆ ಸಂಘದ ಕಾರ್ಯಕಾರಿ ಮಂಡಳಿಯಲ್ಲಿ ಕಾರ್ಯತಂತ್ರ ನಡೆಯುತ್ತಿದೆ ಎಂದು ಪ್ರಶ್ನೆಯೊಂದಕ್ಕೆ ಷಡಾಕ್ಷರಿ ಉತ್ತರಿಸಿದರು.