ಸಾರಾಂಶ
17 ರಂದು ಏಷ್ಯಾನ್ ಪ್ಯಾರಾ ಒಲಂಪಿಕ್ ವಿಜೇತರಿಗೆ ಅಭಿನಂದನೆ
ಏಷ್ಯಾನ್ ಪ್ಯಾರಾ ಒಲಂಪಿಕ್ ಕ್ರೀಡಾಕೂಟದಲ್ಲಿ ಚಿನ್ನ- ಬೆಳ್ಳಿ ಪದಕ ಪಡೆದ ವಿದ್ಯಾರ್ಥಿಗಳಿಗೆ ಗೌರವ
ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುಚೀನಾದಲ್ಲಿ ನಡೆದ ಏಷ್ಯಾನ್ ಪ್ಯಾರಾ ಒಲಂಪಿಕ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಹಾಗೂ ಬೆಳ್ಳಿ ಪದಕ ಪಡೆದ ನಗರದ ಅಂಧ ಮಕ್ಕಳ ಶಾಲೆಯ ವಿದ್ಯಾರ್ಥಿಗಳಿಗೆ ನ. 17 ರಂದು ಚಿಕ್ಕಮಗಳೂರಿನ ಕುವೆಂಪು ಕಲಾಮಂದಿರದಲ್ಲಿ ಅಭಿನಂದನಾ ಸಮಾರಂಭ ಏರ್ಪಡಿಸಲಾಗಿದೆ ಎಂದು ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಪ ನಿರ್ದೇಶಕಿ ಡಾ. ಮಂಜುಳಾ ಹುಲ್ಲಹಳ್ಳಿ ಹೇಳಿದರು. ಮಕ್ಕಳ ತಜ್ಞ ಡಾ. ಜೆ.ಪಿ. ಕೃಷ್ಣೇಗೌಡರ ನಿವಾಸದಲ್ಲಿ ಏಷ್ಯಾನ್ ಪ್ಯಾರಾ ಒಲಂಪಿಕ್ ಕ್ರೀಡಾಕೂಟದಲ್ಲಿ ಚಿನ್ನದ ಮತ್ತು ಬೆಳ್ಳಿ ಪದಕ ಪಡೆದ ವಿದ್ಯಾರ್ಥಿಗಳನ್ನು ಗೌರವಿಸಿ ಮಾತನಾಡಿದ ಅವರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಗೌರವಿಸಲಾಗುವುದು ಎಂದರು. ಏಷ್ಯಾನ್ ಪ್ಯಾರಾ ಒಲಂಪಿಕ್‌ನಲ್ಲಿ ಅಂಧ ಮಕ್ಕಳ ಶಾಲೆ ವಿದ್ಯಾರ್ಥಿಗಳಾದ ರಕ್ಷಿತಾರಾಜು ಹಾಗೂ ರಾಧ ಚಿನ್ನದ ಪದಕ ಪಡೆದಿದ್ದು, ಆಶಾಕಿರಣ ಅಂಧ ಮಕ್ಕಳ ಶಾಲೆಗೆ ಕೀರ್ತಿ ತಂದಿದ್ದಾರೆ ಎಂದು ಹೇಳಿದರು. ಇದೇ ಶಾಲೆಯ ಶರತ್ ಎಂಬ ವಿದ್ಯಾರ್ಥಿ ಬೆಳ್ಳಿ ಪದಕ ಪಡೆದಿದ್ದು, ಕೇಶವಮೂರ್ತಿ, ಹನುಮಂತ್ ಸಹ ಸ್ಪರ್ಧೆ ಮಾಡಿ ದಾಖಲೆ ನಿರ್ಮಿಸಿದ್ದಾರೆ. ಈ ಎಲ್ಲಾ ವಿದ್ಯಾರ್ಥಿಗಳಿಗೆ ಅಂದು ಅಭಿನಂದಿಸಲಾಗುವುದು ಈ ಕಾರ್ಯಕ್ರಮಕ್ಕೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ವಿದ್ಯಾರ್ಥಿಗಳನ್ನು ಅಭಿನಂದಿಸಿ ಪ್ರೋತ್ಸಾಹಿಸಬೇಕೆಂದು ಮನವಿ ಮಾಡಿದರು. ಅಂಧ ಮಕ್ಕಳ ಶಾಲೆ ಅಧ್ಯಕ್ಷ ಡಾ.ಜೆ.ಪಿ. ಕೃಷ್ಣೇಗೌಡ ಮಾತನಾಡಿ, ಅಂಧರ ಬಾಳಿಗೆ ಆಶಾಕಿರಣವಾಗಿರುವ ಈ ನಮ್ಮ ಶಾಲೆ ಕೀರ್ತಿ ತಂದಿರುವುದು ಹೆಮ್ಮೆಯ ವಿಷಯ. ಚೀನಾದಲ್ಲಿ ನಡೆದ ಪ್ಯಾರಾ ಒಲಂಪಿಕ್ ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳು ಉತ್ತಮ ಪ್ರದರ್ಶನ ನೀಡಿದ್ದಾರೆ ಎಂದು ಶ್ಲಾಘಿಸಿದರು. 12 ಕೆಸಿಕೆಎಂ 1ಏಷ್ಯಾನ್ ಪ್ಯಾರಾ ಒಲಂಪಿಕ್‌ನಲ್ಲಿ ಚಿನ್ನದ ಪದಕ ಪಡೆದ ಅಂಧ ಮಕ್ಕಳ ಶಾಲೆ ವಿದ್ಯಾರ್ಥಿಗಳಾದ ರಕ್ಷಿತಾರಾಜು ಹಾಗೂ ರಾಧ ಅವರಿಗೆ ಡಾ. ಜೆ.ಪಿ.ಕೃಷ್ಣೇಗೌಡ ನಿವಾಸದಲ್ಲಿ ಅಭಿನಂದನೆ ಸಲ್ಲಿಸಲಾಯಿತು. ಡಾ.ಮಂಜುಳಾ ಹುಲ್ಲಹಳ್ಳಿ ಇದ್ದರು.