ಫೆಬ್ರವರಿ ೧೧ಕ್ಕೆ ಶಾಸಕ ಶಿವಲಿಂಗೇಗೌಡರಿಗೆ ಅಭಿನಂದನಾ ಕಾರ್ಯಕ್ರಮ

| Published : Feb 10 2024, 01:47 AM IST

ಸಾರಾಂಶ

ಅರಸೀಕೆರೆ ಕಾಂಗ್ರೆಸ್ ಶಾಸಕ ಕೆ.ಎಂ. ಶಿವಲಿಂಗೇಗೌಡ ಅವರು ರಾಜ್ಯ ಗೃಹ ನಿರ್ಮಾಣ ಮಂಡಳಿಯ ಅಧ್ಯಕ್ಷರಾಗಿ ನೇಮಕವಾದ ಹಿನ್ನೆಲೆಯಲ್ಲಿ ಫೆಬ್ರವರಿ ೧೧ ರಂದು ನಗರದ ಬಿ.ಎಂ. ರಸ್ತೆ, ಜಿಲ್ಲಾಧಿಕಾರಿ ಕಚೇರಿ, ಮನೆ ಹಿಂಭಾಗದ ರಸ್ತೆಯಲ್ಲಿ ಅಭಿನಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಈ.ಎಚ್.ಲಕ್ಷ್ಮಣ್ ಹಾಸನದಲ್ಲಿ ತಿಳಿಸಿದರು.

ಸುದ್ದಿಗೋಷ್ಠಿ । ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಈ.ಎಚ್.ಲಕ್ಷ್ಮಣ್ ಮಾಹಿತಿಕನ್ನಡಪ್ರಭ ವಾರ್ತೆ ಹಾಸನ

ಅರಸೀಕೆರೆ ಕಾಂಗ್ರೆಸ್ ಶಾಸಕ ಕೆ.ಎಂ. ಶಿವಲಿಂಗೇಗೌಡ ಅವರು ರಾಜ್ಯ ಗೃಹ ನಿರ್ಮಾಣ ಮಂಡಳಿಯ ಅಧ್ಯಕ್ಷರಾಗಿ ನೇಮಕವಾದ ಹಿನ್ನೆಲೆಯಲ್ಲಿ ಫೆಬ್ರವರಿ ೧೧ ರಂದು ನಗರದ ಬಿ.ಎಂ. ರಸ್ತೆ, ಜಿಲ್ಲಾಧಿಕಾರಿ ಕಚೇರಿ, ಮನೆ ಹಿಂಭಾಗದ ರಸ್ತೆಯಲ್ಲಿ ಅಭಿನಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಈ.ಎಚ್.ಲಕ್ಷ್ಮಣ್ ತಿಳಿಸಿದರು.

ಮಾಧ್ಯಮಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿ, ಹಾಸನ ಜಿಲ್ಲೆಯ ಕಾಂಗ್ರೆಸ್‌ನ ಏಕೈಕ ಹಿರಿಯ ಶಾಸಕ ಕೆಎಂ ಶಿವಲಿಂಗೇಗೌಡರು ಮಂಡಳಿಗೆ ಅಧ್ಯಕ್ಷರಾಗಿ ಆಯ್ಕೆಗೊಂಡಿದ್ದು, ಅವರಿಗೆ ಗೌರವ ನೀಡುವುದಕ್ಕಾಗಿ ಜಿಲ್ಲಾ ಕಾಂಗ್ರೆಸ್ ಹಾಗೂ ಅಭಿಮಾನಿಗಳ ವತಿಯಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್. ರಾಜಣ್ಣ ಸೇರಿದಂತೆ ಅನೇಕರು ಭಾಗವಹಿಸಲಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಎದುರಿನ ರಸ್ತೆಯಲ್ಲಿ ಕಾರ್ಯಕ್ರಮಕ್ಕೆ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಕಾಂಗ್ರೆಸ್ ಕಾರ್ಯಕರ್ತರು ಸೇರಿ ೫ ಸಾವಿರ ಜನ ಸೇರುವ ನಿರೀಕ್ಷೆ ಇದೆ ಎಂದು ತಿಳಿಸಿದರು.

ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು, ಭಾಗವಹಿಸಿ ಸಮಾರಂಭ ಯಶಸ್ವಿಗೊಳಿಸಬೇಕು. ಜಿಲ್ಲಾ ಕಾಂಗ್ರೆಸ್‌ನಲ್ಲಿ ಯಾವುದೇ ಬಣ ರಾಜಕೀಯ ಇಲ್ಲ, ಎಲ್ಲರನ್ನೂ ಒಟ್ಟಿಗೆ ತೆಗೆದುಕೊಂಡು ಹೋಗುವ ನಿಟ್ಟಿನಲ್ಲಿ ಕೆಲಸ ಮಾಡಲಾಗುವುದು. ಮುಂದೆ ನಡೆಯಲಿರುವ ಲೋಕಸಭಾ ಚುನಾವಣೆಗೆ ಹಾಸನ ಜಿಲ್ಲೆಯಿಂದ ಈಗಾಗಲೇ ಎಚ್.ಕೆ.ಜವರೇಗೌಡ, ಎಂ.ಎ.ಗೋಪಾಲಸ್ವಾಮಿ, ವಿಜಯ್ ಕುಮಾರ್, ವಿನಯ್ ಗಾಂಧಿ, ಶ್ರೇಯಸ್ ಪಟೇಲ್ ಸೇರಿದಂತೆ ಅನೇಕ ಆಕಾಂಕ್ಷಿಗಳ ಪಟ್ಟಿಯನ್ನು ಈಗಾಗಲೇ ರಾಜ್ಯ ಹೈ ಕಮಾಂಡ್‌ಗೆ ಸಲ್ಲಿಸಲಾಗಿದೆ ಎಂದರು.

ಶ್ರೀಕಂಠಯ್ಯ ಅವರ ಪುತ್ರ ವಿಜಯ್‌ಕುಮಾರ್ ಮಾತನಾಡಿ, ‘ನಮ್ಮ ತಂದೆ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಕಟ್ಟಾಳು, ಅವರು ಶಾಸಕರಾಗಿ, ಸಚಿವರಾಗಿ ಜಿಲ್ಲೆಯಲ್ಲದೆ ರಾಜ್ಯದಲ್ಲಿ ಕೂಡ ಹೆಸರುವಾಸಿಯಾಗಿದ್ದರು. ಈ ಹಿನ್ನೆಲೆಯಲ್ಲಿ ಕಳೆದ ಬಾರಿ ವಿಧಾನಸಭಾ ಕ್ಷೇತ್ರದಿಂದ ಶ್ರವಣಬೆಳಗೊಳ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದೆ. ಆದರೆ ಅಂತಿಮವಾಗಿ ಪಕ್ಷ ಗೋಪಾಲಸ್ವಾಮಿ ಅವರಿಗೆ ಟಿಕೆಟ್ ನೀಡಿದಾಗ ನಾವೆಲ್ಲರೂ ಒಮ್ಮತದಿಂದ ಅವರಿಗೆ ಸಹಕಾರ ನೀಡಿದ್ದೇವೆ. ಅದೇ ರೀತಿ ಈಗ ಲೋಕಸಭೆಗೆ ಟಿಕೆಟ್ ಕೇಳಿದ್ದು, ಪಕ್ಷದ ವರಿಷ್ಠರು ನೀಡುವ ಭರವಸೆ ಇದೆ’ ಎಂದರು.

‘ಮುಂದೆ ನಡೆಯಲಿರುವ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದಲ್ಲಿ ಹಾಸನ ಕ್ಷೇತ್ರದಿಂದ ನನಗೆ ಟಿಕೆಟ್ ಸಿಗುವ ವಿಶ್ವಾಸವಿದ್ದು ಜಿಲ್ಲೆಯ ಎಲ್ಲಾ ಮುಖಂಡರು ಕಾರ್ಯಕರ್ತರು ಹಾಗೂ ಮತದಾರರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಚುನಾವಣೆ ಮಾಡುವುದಾಗಿ ಕಾಂಗ್ರೆಸ್ ಮುಖಂಡ ವಿಜಯ್‌ಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು.

ಗೋಪಾಲಸ್ವಾಮಿ, ಎಚ್.ಕೆ. ಮಹೇಶ್ ಮಾತನಾಡಿ, ವಿಜಯ್‌ಕುಮಾರ್ ಅವರಿಗೆ ಟಿಕೆಟ್ ಕೊಟ್ಟರೆ ತುಂಬಾ ಸಂತೋಷಪಡುತ್ತೇವೆ. ಆದರೆ ಹೈಕಮಾಂಡ್ ಯಾರಿಗೆ ಟಿಕೆಟ್ ಕೊಟ್ಟರೂ ಒಗ್ಗಟ್ಟಿಂದ ಕೆಲಸ ಮಾಡುವ ಮೂಲಕ ಅಭ್ಯರ್ಥಿಯನ್ನು ಗೆಲ್ಲಿಸುತ್ತೇವೆ ಎಂದು ಹೇಳಿದರು.

ಕಾಂಗ್ರೆಸ್ ಮುಖಂಡರಾದ ಬಿ.ಕೆ. ರಂಗಸ್ವಾಮಿ, ಕಡಾಕಡಿ ಫೀರ್ ಸಾಬ್, ವಿಜಯಕುಮಾರ್, ಶ್ರೀಧರ್ ಗೌಡ ಇತರರು ಉಪಸ್ಥಿತರಿದ್ದರು.ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಈ.ಎಚ್.ಲಕ್ಷ್ಮಣ್.