ರಾಘವೇಂದ್ರ ಪರ ಶಾಮನೂರು ಹೇಳಿಕೆಗೆ ಕಾಂಗ್ರೆಸ್ಸಿಗರು ಗರಂ

| Published : Jan 28 2024, 01:20 AM IST

ಸಾರಾಂಶ

ಶಿವಮೊಗ್ಗದಲ್ಲಿ ರಾಘವೇಂದ್ರ ಗೆಲ್ತಾರೆ ಎಂದಿದ್ದ ಶಾಮನೂರು ಶಿವಶಂಕರಪ್ಪ ವಿರುದ್ಧ ಸ್ವಪಕ್ಷೀಯರಾದ ಕಾಂಗ್ರೆಸ್ಸಿಗರು ಮುನಿಸಿಕೊಂಡಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಂಗಳೂರುಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಅವರು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಗೆಲ್ಲಲಿದ್ದಾರೆ ಎಂಬ ಕಾಂಗ್ರೆಸ್‌ ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿಕೆಗೆ ಕಾಂಗ್ರೆಸ್‌ ಮುಖಂಡರು ಆಕ್ಷೇಪ ವ್ಯಕ್ತಪಡಿಸುತ್ತಿದ್ದು, ಯಾರು ಏನೇ ಹೇಳಿದರೂ ಶಿವಮೊಗ್ಗದಲ್ಲಿ ಈ ಬಾರಿ ಕಾಂಗ್ರೆಸ್‌ ಗೆಲ್ಲಲಿದೆ ಎಂದು ಟಾಂಗ್‌ ನೀಡಿದ್ದಾರೆ.ಶಿವಮೊಗ್ಗದಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮವೊಂದರಲ್ಲಿ ಕಾಂಗ್ರೆಸ್‌ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರು, ಸಂಸದ ಬಿಜೆಪಿಯ ಬಿ.ವೈ. ರಾಘವೇಂದ್ರ ಅವರನ್ನು ಹೊಗಳಿದ್ದರು. ಅಲ್ಲದೆ, ಅವರು ಮಾಡಿದ ಕೆಲಸದಿಂದಾಗಿ ಮುಂದಿನ ಚುನಾವಣೆಯಲ್ಲೂ ಅವರೇ ಗೆಲ್ಲಲಿದ್ದಾರೆ ಎಂದೂ ಭವಿಷ್ಯ ನುಡಿದಿದ್ದರು.ಈ ಹೇಳಿಕೆಗೆ ಕಾಂಗ್ರೆಸ್‌ನಲ್ಲಿ ಭಾರೀ ವಿರೋಧ ವ್ಯಕ್ತವಾಗುತ್ತಿದ್ದು, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಸುದ್ದಿಗಾರರೊಂದಿಗೆ ಮಾತನಾಡಿ, ಶಾಮನೂರು ಶಿವಶಂಕರಪ್ಪ ಹೇಳಿಕೆ ವಿಚಾರ ನನಗೆ ಗೊತ್ತಿಲ್ಲ. ಆದರೆ, ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಹೆಚ್ಚಿನ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ. ಅದರಲ್ಲೂ ಶಿವಮೊಗ್ಗದಲ್ಲಿ ಈ ಬಾರಿ ಕಾಂಗ್ರೆಸ್‌ ಅಭ್ಯರ್ಥಿಯೇ ಗೆಲುವು ಸಾಧಿಸಲಿದ್ದಾರೆ ಎಂದು ಹೇಳಿದರು.ಸಚಿವ ಪ್ರಿಯಾಂಕ್‌ ಖರ್ಗೆ ಪ್ರತಿಕ್ರಿಯಿಸಿ, ಶಾಮನೂರು ಶಿವಶಂಕರಪ್ಪ ಅವರು ಪಕ್ಷದ ವೇದಿಕೆಯಲ್ಲಿ ಆ ರೀತಿಯ ಹೇಳಿಕೆ ನೀಡಿಲ್ಲ. ಅವರ ಹೇಳಿಕೆ ಬಗ್ಗೆ ಸರಿಯಾದ ಮಾಹಿತಿಯಿಲ್ಲ. ಆದರೂ, ಎಲ್ಲರೂ ಪಕ್ಷದ ಚೌಕಟ್ಟಿನಲ್ಲಿಯೇ ಇರಬೇಕು ಎಂದು ತಿಳಿಸಿದ್ದಾರೆ.