ಕಾಂಗ್ರೆಸ್‌ ನಿಂದ ಮುಸ್ಲಿಂ ತುಷ್ಠೀಕರಣ

| Published : May 06 2025, 12:16 AM IST

ಸಾರಾಂಶ

ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಅನ್ಯಾಯ, ಹದಗೆಟ್ಟ ಕಾನೂನು ಸುವ್ಯವಸ್ಥೆ, ಮುಸ್ಲಿಂ ತುಷ್ಠೀಕರಣ ಹಾಗೂ ಭ್ರಷ್ಟಾಚಾರದ ವಿರುದ್ಧ ದಿ. 6ರ ಮಂಗಳವಾರ ಜನಾಕ್ರೋಶ ಹೋರಾಟ ಮಾಡಲಾಗುವುದು ಎಂದು‌ ತುಮಕೂರು ಗ್ರಾಮಾಂತರ‌ ಶಾಸಕ ಬಿ.‌ಸುರೇಶಗೌಡ ತಿಳಿಸಿದರು.

ಕನ್ನಡಪ್ರಭ ವಾರ್ತೆ, ತುಮಕೂರು

ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಅನ್ಯಾಯ, ಹದಗೆಟ್ಟ ಕಾನೂನು ಸುವ್ಯವಸ್ಥೆ, ಮುಸ್ಲಿಂ ತುಷ್ಠೀಕರಣ ಹಾಗೂ ಭ್ರಷ್ಟಾಚಾರದ ವಿರುದ್ಧ ದಿ. 6ರ ಮಂಗಳವಾರ ಜನಾಕ್ರೋಶ ಹೋರಾಟ ಮಾಡಲಾಗುವುದು ಎಂದು‌ ತುಮಕೂರು ಗ್ರಾಮಾಂತರ‌ ಶಾಸಕ ಬಿ.‌ಸುರೇಶಗೌಡ ತಿಳಿಸಿದರು.

ಅವರು‌ ತುಮಕೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ಸರ್ಕಾರ ಲೂಟಿ ಮಾಡಿ, ಈ ಸಮುದಾಯಗಳಿಗೆ ಅನ್ಯಾಯ ಮಾಡಿದೆ. ರಾಜ್ಯದಲ್ಲಿ ಯವುದೇ ಅಭಿವೃದ್ಧಿ ಕೆಲಸಗಳಾಗುತ್ತಿಲ್ಲ. ದಿನಬಳಕೆ ಪದಾರ್ಥಗಳ ಬೆಲೆ ಹೆಚ್ಚು ಮಾಡಿ ಜನಸಾಮಾನ್ಯರನ್ನು ಕಷ್ಟದ ಪರಿಸ್ಥಿತಿಗೆ ತಳ್ಳಿದೆ ಎಂದರು.

ನಗರದಲ್ಲಿ ನಡೆಯುವ ಜನಾಕ್ರೋಶ ಯಾತ್ರೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಸಭಾ ವಿಪಕ್ಷ ನಾಯಕ ಆರ್.ಅಶೋಕ್, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮತ್ತಿತರ ಮುಖಂಡರು ಭಾಗವಹಿಸುವರು. ಮಂಗಳವಾರ ಬೆಳಿಗ್ಗೆ 11 ಗಂಟೆಗೆ ನಗರಪಾಲಿಕೆ ಆವರಣದಲ್ಲಿ ಡಾ.ಅಂಬೇಡ್ಕರ್ ಪುತ್ಥಳಿಗೆ ಮುಖಂಡರು ಪುಷ್ಪಾರ್ಚನೆ ಮಾಡಿ ಜನಾಕ್ರೋಶ ಯಾತ್ರೆ ಪ್ರಾರಂಭಿಸುವರು. ಎಂ.ಜಿ.ರಸ್ತೆ ಮೂಲಕ ಜಿಲ್ಲಾಧಿಕಾರಿ ಕಚೇರಿವರೆಗೆ ಯಾತ್ರೆ ನಡೆಸಲಾಗುವುದು ಎಂದರು.

ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್.ಎಸ್.ರವಿಶಂಕರ್ ಹೆಬ್ಬಾಕ ಮಾತನಾಡಿ, ಪೆಹಲ್ಗಾಮ್‌ನಲ್ಲಿ ಭಯೋತ್ಪಾದಕರ ದಾಳಿ ನಡೆದು 26 ಜನ ಅಮಾಯಕ ಪ್ರವಾಸಿಗರು ಹತ್ಯೆಗಿಡಾದ ನಂತರ ಪ್ರಧಾನಿ ನರೇಂದ್ರ ಮೋದಿಯವರು ಪಾಕಿಸ್ತಾನಕ್ಕೆ ತಕ್ಕ ಪ್ರತ್ಯುತ್ತರ ನೀಡಲು ಐದು ರಾಜತಾಂತ್ರಿಕ ಕ್ರಮ ಕೈಗೊಂಡಿದ್ದಾರೆ. ಭಾರತದಲ್ಲಿರುವ ಪಾಕಿಸ್ತಾನಿ ಪ್ರಜೆಗಳು 48 ಗಂಟೆ ಒಳಗೆ ಭಾರತ ಬಿಟ್ಟು ತೆರಳಬೇಕು ಎಂದು ಎಲ್ಲಾ ರಾಜ್ಯಗಳಿಗೂ ಕೇಂದ್ರ ಸರ್ಕಾರ ನಿರ್ದೇಶನ ನೀಡಿದ್ದು, ಬಿಜೆಪಿಯೇತರ ಆಡಳಿತವಿರುವ ರಾಜ್ಯಗಳಲ್ಲಿ ಪಾಕಿಸ್ತಾನಿಗಳನ್ನು ಗುರುತಿಸಿ ವಾಪಸ್ ಕಳಿಸುವಲ್ಲಿ ಉದಾಸೀನತೆ ತೋರಲಾಗುತ್ತಿದೆ ಎಂದು ಹೇಳಿದರು.

ಜಿಲ್ಲಾಡಳಿತವು ಜಿಲ್ಲೆಯಲ್ಲಿ ಇರುವ ಪಾಕಿಸ್ತಾನಿ ಪ್ರಜೆಗಳನ್ನು ವಾಪಸ್ ಕಳಿಸಬೇಕೆಂದು ಒತ್ತಾಯಿಸಿ ಮಂಗಳವಾರ ನಗರದಲ್ಲಿ ಜಿಲ್ಲಾ ಬಿಜೆಪಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಈ ಬಗ್ಗೆ ಸಾರ್ವಜನಿಕರಿಂದ ಸಹಿ ಸಂಗ್ರಹಿಸಿ, ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಲಾಗುವುದು, ಆ ಮೂಲಕ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರುವಂತೆ ಕೋರಲಾಗುವುದು ಎಂದು ತಿಳಿಸಿದರು.

ವಿಧಾನ ಪರಿಷತ್ ಮಾಜಿ ಸದಸ್ಯ ಡಾ.ಎಂ.ಆರ್.ಹುಲಿನಾಯ್ಕರ್, ಜಿಲ್ಲಾ ಬಿಜೆಪಿ ಹಿರಿಯ ಉಪಾಧ್ಯಕ್ಷ ವೈ.ಹೆಚ್.ಹುಚ್ಚಯ್ಯ, ಪ್ರಧಾನ ಕಾರ್ಯದರ್ಶಿಗಳಾದ ಗಂಗರಾಜು, ಸಂದೀಪ್‌ಗೌಡ, ಮುಖಂಡ ದಿಲೀಪ್‌ಕುಮಾರ್, ಎಸ್.ಸಿ. ಮೋರ್ಚಾ ಜಿಲ್ಲಾಧ್ಯಕ್ಷ ಎಚ್.ಎ.ಆಂಜನಪ್ಪ, ಒಬಿಸಿ ಮೋರ್ಚಾ ಜಿಲ್ಲಾಧ್ಯಕ್ಷ ಕೆ.ವೇದಮೂರ್ತಿ, ಜಿಲ್ಲಾ ವಕ್ತಾರ ಟಿ.ಆರ್.ಸದಾಶಿವಯ್ಯ, ಮಾಧ್ಯಮ ಪ್ರಮುಖ್ ಜೆ.ಜಗದೀಶ್ ಹಾಜರಿದ್ದರು.