ಸಾರಾಂಶ
ಕನ್ನಡಪ್ರಭ ವಾರ್ತೆ ಸೋಮವಾರಪೇಟೆ
ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಎಂ.ಲಕ್ಷಣ್ ಒಂದು ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಕೆ.ಪಿ.ಸಿ.ಸಿ. ಸದಸ್ಯ ಹಾಗೂ ಸೋಮವಾರಪೇಟೆ ಬ್ಲಾಕ್ ಪ್ರಚಾರ ಸಮಿತಿ ಅಧ್ಯಕ್ಷ ಕೆ.ಎ. ಯಾಕೂಬ್ ಹೇಳಿದ್ದಾರೆ.ಶುಕ್ರವಾರ ಇಲ್ಲಿನ ಪತ್ರಿಕಾಭವನದಲ್ಲಿ ಆಯೋಜಿಸಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೋಮವಾರಪೇಟೆಯ ೧೦೮ ಬೂತ್‌ಗಳಲ್ಲಿ ಈಗಾಗಲೇ ಪ್ರಚಾರ ಕಾರ್ಯ ಬಿರುಸಿನಿಂದ ಸಾಗಿದ್ದು, ಹೋದ ಕಡೆಯಲ್ಲೆಲ್ಲಾ ಕಾಂಗ್ರೆಸ್ ಅಭ್ಯರ್ಥಿಯ ಪರ ಜನರ ಒಲವು ವ್ಯಕ್ತವಾಗುತ್ತಿದೆ ಎಂದರು.
ಐದು ಗ್ಯಾರಂಟಿ ಯೋಜನೆಗಳ ಮೂಲಕ ಜನಪರವಾಗಿ ಕಾರ್ಯ ನಿರ್ವಹಿಸುತ್ತಿರುವ ಕಾಂಗ್ರೆಸ್ ಸರ್ಕಾರದ ಬಗ್ಗೆ ಜನರು ಅಪಾರ ಅಭಿಮಾನ ಹೊಂದಿದ್ದಾರೆ. ಜಿಲ್ಲೆಯ ಇಬ್ಬರು ಶಾಸಕರು ಅಭಿವೃದ್ಧಿ ಕಾರ್ಯಗಳ ಮೂಲಕ ಜನಮನ್ನಣೆ ಗಳಿಸಿದ್ದಾರೆ. ಲೋಕಸಭೆಗೂ ಕಾಂಗ್ರೆಸ್ ಅಭ್ಯರ್ಥಿಯನ್ನು ಬಹುಮತದಿಂದ ಗೆಲ್ಲಿಸಿದರೆ ಇನ್ನಷ್ಟೂ ಅಭಿವೃದ್ದಿ ಕಾರ್ಯಗಳು ನಡೆಯಲಿದೆ ಎಂದರು.ಕೊಡಗು ಜಿಲ್ಲೆಗೆ ಸಂಬಂಧಿಸಿದಂತೆ ಇತ್ತೀಚೆಗೆ ಕಾಂಗ್ರೆಸ್ ಪಕ್ಷ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ, ಪ್ರವಾಸೋದ್ಯಮದ ಅಭಿವೃದ್ಧಿ, ವೀರಸೇನಾನಿ ಫೀಲ್ದ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಅವರಿಗೆ ಭಾರತ ರತ್ನ ಪ್ರಶಸ್ತಿಗೆ ಶಿಫಾರಸು ಮಾಡುವುದು, ವನ್ಯ ಜೀವಿಗಳ ಹಾವಳಿ ತಡೆಗೆ ಶಾಶ್ವತ ಯೋಜನೆ ರೂಪಿಸುವುದು ಸೇರಿದಂತೆ ಹಲವು ಭರವಸೆಗಳನ್ನು ನೀಡಲಾಗಿದೆ. ಐದು ಗ್ಯಾರಂಟಿ ಯೋಜನೆಗಳನ್ನು ಈಡೇರಿಸಿದಂತೆ ಲೋಕಸಭಾ ಚುನಾವಣೆ ಸಂದರ್ಭ ನೀಡಿರುವ ಪ್ರಣಾಳಿಕೆಯಲ್ಲಿರುವ ಭರವಸೆಗಳನ್ನು ಈಡೇರಿಸಲಾಗುವುದು ಎಂದರು.
ಕೊಡಗು ಜಿಲ್ಲೆಯ ಸಮಗ್ರ ಸಮಸ್ಯೆಗಳ ಬಗ್ಗೆ ಪಕ್ಷದ ಅಭ್ಯರ್ಥಿ ಲಕ್ಷ್ಮಣ್ ಅವರಿಗೆ ಅರಿವಿದೆ. ಅವರು ಕೇವಲ ಮಾತನಾಡುವ ರಾಜಕಾರಣಿಯಲ್ಲ. ನುಡಿದಂತೆ ನಡೆದುಕೊಳ್ಳುತ್ತಾರೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಪ್ರತಿಯೊಬ್ಬ ಪ್ರಬುದ್ದ ಮತದಾರರು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಬೇಕೆಂದು ಮನವಿ ಮಾಡಿದರು.ಗೋಷ್ಠಿಯಲ್ಲಿ ಪಕ್ಷದ ಮಹಿಳಾ ಘಟಕದ ಬ್ಲಾಕ್ ಅಧ್ಯಕ್ಷೆ ಶೀಲಾ ಡಿಸೋಜ, ಪಟ್ಟಣ ಪಂಚಾಯಿತಿ ಸದಸ್ಯರಾದ ಬಿ.ಸಿ. ವೆಂಕಟೇಶ್, ನಗರ ಕಾಂಗ್ರೆಸ್ ಪ್ರಮುಖರಾದ ಮಂಜುನಾಥ್, ಭುವನೇಶ್ ಇದ್ದರು.