ಸಾರಾಂಶ
ಕನ್ನಡಪ್ರಭ ವಾರ್ತೆ ನಾಗಮಂಗಲ
ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ವಿಧಾನಸಭಾ ಕ್ಷೇತ್ರ ಗ್ರಾಪಂ 18ಕ್ಕೂ ಹೆಚ್ಚು ಗ್ರಾಮಗಳಲ್ಲಿ ಅಬ್ಬರದ ಮತ ಪ್ರಚಾರ ನಡೆಸಿದರು.ಹಳ್ಳಿಗಳಲ್ಲಿ ರೋಡ್ ಶೋ ನಡೆಸಿದ ಸ್ಟಾರ್ ಚಂದ್ರು ಅವರು, ಜಿಲ್ಲೆಯ ಮತ್ತು ರಾಜ್ಯದ ಹಿತ ಕಾಯಲು ಮತದಾರರು ನನ್ನನ್ನು ಬೆಂಬಲಿಸಬೇಕು. ನನ್ನ ಗೆಲುವು ರೈತರ ಗೆಲುವು, ಜಿಲ್ಲೆಯ ಜನತೆಯ ಗೆಲುವು ಎಂದರು.
ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ದೊರಕಿಸಲು ಮತದಾರರು ಕಾಂಗ್ರೆಸ್ ಅನ್ನು ಬೆಂಬಲಿಸಬೇಕು. ಸದೃಢ ಭಾರತ ನಿರ್ಮಾಣದ ಜೊತೆಗೆ ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಸರ್ಕಾರಿ ಸೌಲಭ್ಯ ಕಲ್ಪಿಸುವ ಕೆಲಸವನ್ನು ಕಾಂಗ್ರೆಸ್ ಮಾಡಿದೆ. ರಾಜ್ಯದ ಜನತೆಗೆ ಕಾಂಗ್ರೆಸ್ ಕೊಟ್ಟಿರುವ ಕೊಡುಗೆಗಳನ್ನು ನೆನೆದು ಜನಸೇವೆ ಮಾಡಲು ನನಗೊಂದು ಅವಕಾಶ ನೀಡಬೇಕೆಂದು ಮನವಿ ಮಾಡಿದರು.ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ ಆಗಲಿದೆ. ದುಡಿಯುವ ಕೈಗೆ ಉದ್ಯೋಗ ಸಿಗಲಿದೆ. ಜಿಲ್ಲೆಯ ಅಭಿವೃದ್ಧಿಗೆ ಮತ್ತಷ್ಟು ವೇಗ ಸಿಗಲಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿ 7 ಶಾಸಕರನ್ನು ಹಾರಿಸಿ ಕಳುಹಿಸಿದ್ದೀರಿ. ಲೋಕಸಭಾ ಚುನಾವಣೆಯಲ್ಲಿ ಮತ ನೀಡುವ ಮೂಲಕ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಕೈ ಬಲಪಡಿಸಬೇಕು ಎಂದು ಮನವಿ ಮಾಡಿದರು.
ಈ ವೇಳೆ ಕೃಷಿ ಸಚಿವ ಚಲುವರಾಯಸ್ವಾಮಿ, ವಿಧಾನ ಪರಿಷತ್ ಮಾಜಿ ಸದಸ್ಯ ಅಪ್ಪಾಜಿಗೌಡ ಸೇರಿದಂತೆ ಹಲವರು ಇದ್ದರು.ಜೆಡಿಎಸ್ ತೊರೆದು ಶಾಸಕ ಪಿ.ಎಂ.ನರೇಂದ್ರಸ್ವಾಮಿ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಮಳವಳ್ಳಿ:ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಜೆಡಿಎಸ್ ತೊರೆದು ಶಾಸಕ ಪಿ.ಎಂ.ನರೇಂದ್ರಸ್ವಾಮಿ ಸಮ್ಮುಖದಲ್ಲಿ ಹಲವು ಮುಖಂಡರು ಕಾಂಗ್ರೆಸ್ ಸೇರ್ಪಡೆಗೊಂಡರು.ಜೋಗಿಪುರ ಗ್ರಾಮದ ಕೆಂಪರಾಜು, ಸಿದ್ದರಾಜು ಸೇರಿದಂತೆ ಹಲವರು ಪಕ್ಷಕ್ಕೆ ಬರಮಾಡಿಕೊಂಡ ನಂತರ ಶಾಸಕ ಪಿ.ಎಂ. ನರೇಂದ್ರಸ್ವಾಮಿ ಮಾತನಾಡಿ, ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ(ಸ್ಟಾರ್ ಚಂದ್ರು) ಗೆಲುವು ನಿಶ್ಚಿತ. ಜಿಲ್ಲೆಯ ಎಲ್ಲೆಡೆ ಉತ್ತಮ ಬೆಂಬಲ ವ್ಯಕ್ತವಾಗುತ್ತಿದೆ ಎಂದರು.ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಚುನಾವಣೆಯಲ್ಲಿ ಭರವಸೆ ನೀಡಿದಂತೆ ಐದು ಗ್ಯಾರಂಟಿ ಯೋಜನೆ ಜಾರಿ ಮಾಡುವ ಮೂಲಕ ಜನರ ಸಂಕಷ್ಟಕ್ಕೆ ನೆರವಾಗಿದ್ದೇವೆ. ಲೋಕಸಭೆ ಚುನಾವಣೆಯಲ್ಲೂ ಸಹ ಹಲವು ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದ್ದು, ನುಡಿದಂತೆ ನಡೆಯಲಿದ್ದೇವೆ. ಕೇಂದ್ರದಲ್ಲಿ ನಮ್ಮ ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕಳೆದ 11 ತಿಂಗಳಲ್ಲಿ ತಾಲೂಕಿನ ಅಭಿವೃದ್ಧಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ನೂರಾರು ಕೋಟಿ ಅನುದಾನ ಬಿಡುಗಡೆ ಮಾಡಿಸಿ ಈಗಾಗಲೇ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಜಿಲ್ಲೆಯಲ್ಲಿ ಕಾಂಗ್ರೆಸ್ ಪರವಾದ ವಾತಾವರಣವಿದೆ. ಮೈತ್ರಿ ಅಭ್ಯರ್ಥಿ ವೆಂಕಟರಮಣೇಗೌಡ(ಸ್ಟಾರ್ ಚಂದ್ರು) ಗೆಲುವು ಸಾಧಿಸಲಿದ್ದಾರೆ ಎಂದರು.ಈ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ದೊಡ್ಡಯ್ಯ, ಸಿ.ಪಿ.ರಾಜು, ನಿಕಟಪೂರ್ವ ಅಧ್ಯಕ್ಷ ಕೆ.ಜೆ.ದೇವರಾಜು, ಟಿಎಪಿಸಿಎಂಎಸ್ ನಿರ್ದೇಶಕ ಕೆ.ಎಸ್.ದ್ಯಾಪೇಗೌಡ ಹಾಗೂ ಮುಖಂಡ ಬಂಕ್ ಮಹದೇವು ಇದ್ದರು.