ಕನ್ನಡಪ್ರಭ ವಾರ್ತೆ ಚಿತ್ರದುರ್ಗ

ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯಶಾಲಿಯಾಗಿರುವುದಕ್ಕೆ ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂಭಾಗ ಸೋಮವಾರ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂತಸ ವಿನಿಮಯ ಮಾಡಿಕೊಳ್ಲಲಾಯಿತು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‌ಪೀರ್ ಮಾತನಾಡಿ, ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪಂಚ ಗ್ಯಾರಂಟಿ ಯೋಜನೆಗಳು, ಕಾರ್ಯಕರ್ತರ ನಿಷ್ಟೆ ಹಾಗೂ ಮತದಾರರು ಕಾಂಗ್ರೆಸ್ ಪಕ್ಷದ ಮೇಲೆ ನಂಬಿಕೆ ವಿಶ್ವಾಸವಿಟ್ಟು ಮತ ಚಲಾಯಿಸಿದ್ದರ ಪರಿಣಾಮ ಎರಡು ಕಡೆ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಲು ಕಾರಣವಾಯಿತು ಎಂದು ಹರ್ಷ ವ್ಯಕ್ತಪಡಿಸಿದರು.

ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮುನಿರಾ ಎ.ಮಕಾಂದಾರ್ ಮಾತನಾಡಿ, ಚುನಾವಣೆ ಸಂದರ್ಭದಲ್ಲಿ ಪಕ್ಷದ ನಾಯಕರೊಂದಿಗೆ ದಾವಣಗೆರೆಯಲ್ಲಿ ಮನೆ ಮನೆಗೆ ತೆರಳಿ ಕಾಂಗ್ರೆಸ್ ಅಭ್ಯರ್ಥಿ ಪರ ಮತ ಯಾಚಿಸಿದ್ದೇವೆ. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಮತದಾರರು.

ಡಾ.ಶಾಮನೂರು ಶಿವಶಂಕರಪ್ಪನವರ ಕುಟುಂಬದ ಮೇಲೆ ಅಪಾರ ಅಭಿಮಾನಿವಿಟ್ಟು ಅವರ ಮೊಮ್ಮಗನನ್ನು ಗೆಲ್ಲಿಸಿದ್ದಾರೆ. ಅದೇ ರೀತಿ ಬಾಗಲಕೋಟೆಯಲ್ಲಿಯೂ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಪಕ್ಷಕ್ಕೆ ಶಕ್ತಿ ತುಂಬಿದಂತಾಗಿದೆ ಎಂದು ಹೇಳಿದರು.


ಜಿಲ್ಲಾ ಕಾಂಗ್ರೆಸ್ ಗ್ಯಾರಂಟಿ ಅನುಷ್ಠಾನಗಳ ಸಮಿತಿ ಅಧ್ಯಕ್ಷ ಆರ್.ಶಿವಣ್ಣ, ಉಪಾಧ್ಯಕ್ಷ ಡಿ.ಎನ್.ಮೈಲಾರಪ್ಪ, ಪ್ರಧಾನ ಕಾರ್ಯದರ್ಶಿ ಕೆ.ಪಿ.ಸಂಪತ್‌ಕುಮಾರ್, ಕರ್ನಾಟಕ ರಾಜ್ಯ ಟಿಪ್ಪುಸುಲ್ತಾನ್ ಅಭಿಮಾನಿಗಳ ಮಹಾವೇದಿಕೆ ರಾಜ್ಯಾಧ್ಯಕ್ಷ ಟಿಪ್ಪುಖಾಸಿಂ ಆಲಿ, ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಎನ್.ಡಿ.ಕುಮಾರ್, ಕಾರ್ಮಿಕ ವಿಭಾಗದ ಜಿಲ್ಲಾಧ್ಯಕ್ಷ ಸೈಯದ್ ಮೊಹಿದ್ದೀನ್(ಚೋಟು) ಪದವೀಧರ ವಿಭಾಗದ ಅಧ್ಯಕ್ಷ ಮುದಸಿರ್ ನವಾಜ್, ಇಂಟೆಕ್ ವಿಭಾಗದ ಮಾಜಿ ಅಧ್ಯಕ್ಷ ಸೈಯದ್ ಸೈಫುಲ್ಲಾ, ಕರುನಾಡ ರಕ್ಷಣಾ ವೇದಿಕೆ ಸಂಸ್ಥಾಪಕ ಅಧ್ಯಕ್ಷ ಸೈಯದ್ ಇಸ್ಮಾಯಿಲ್, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರೇಣುಕಾಶಿವು ಇದ್ದರು.