ಸಂವಿಧಾನದ ಮೂಲ ರಚನೆಯನ್ನೇ ಬದಲಾಯಿಸಿದ್ದ ಕಾಂಗ್ರೆಸ್‌: ಮಾಜಿ ಸಂಸದ ಪ್ರತಾಪ್‌ಸಿಂಹ

| Published : Jun 26 2024, 12:38 AM IST

ಸಂವಿಧಾನದ ಮೂಲ ರಚನೆಯನ್ನೇ ಬದಲಾಯಿಸಿದ್ದ ಕಾಂಗ್ರೆಸ್‌: ಮಾಜಿ ಸಂಸದ ಪ್ರತಾಪ್‌ಸಿಂಹ
Share this Article
  • FB
  • TW
  • Linkdin
  • Email

ಸಾರಾಂಶ

ಮಂಗಳೂರಿನಲ್ಲಿ ‘ತುರ್ತು ಪರಿಸ್ಥಿತಿ- ಸಂವಿಧಾನಕ್ಕೆ ಮಾಡಿದ ಅಪಚಾರ’ ಎಂಬ ವಿಷಯದ ಕುರಿತ ಸಂವಾದ ಕಾರ್ಯಕ್ರಮ ನಡೆಯಿತು.

ಕನ್ನಡಪ್ರಭ ವಾರ್ತೆ ಮಂಗಳೂರು

ಚುನಾವಣಾ ಅಕ್ರಮ ನಡೆಸಿದ್ದ ಅಂದಿನ ಪ್ರಧಾನಿ ಇಂದಿರಾ ಗಾಂಧಿ ಸಂಸತ್ ಸದಸ್ಯತ್ವ ಹಾಗೂ ಚುನಾವಣೆ ಸ್ಪರ್ಧೆಯ ಅನರ್ಹತೆಯಿಂದ ಪಾರಾಗಲು ಸಂವಿಧಾನವನ್ನು ತನಗೆ ಬೇಕಾದಂತೆ ಬಳಸಿಕೊಂಡು ದೇಶದಲ್ಲಿ ಏಕಾಏಕಿ ರಾತ್ರೋರಾತ್ರಿ ತುರ್ತು ಪರಿಸ್ಥಿತಿ ಹೇರಿದ್ದರು. ಡಾ. ಬಿ.ಆರ್. ಅಂಬೇಡ್ಕರ್ ಅವರು ಬರೆದ ಸಂವಿಧಾನದ ಮೂಲ ರಚನೆಯನ್ನು ಬದಲಾವಣೆ ಮಾಡಿದ್ದೇ ಕಾಂಗ್ರೆಸ್ ಎಂದು ಮೈಸೂರಿನ ಮಾಜಿ ಸಂಸದ ಪ್ರತಾಪ್‌ಸಿಂಹ ಹೇಳಿದ್ದಾರೆ.

ಸಾಮಾಜಿಕ ನ್ಯಾಯಕ್ಕಾಗಿ ನಾಗರಿಕರು ಸಂಘಟನೆ ವತಿಯಿಂದ ನಗರದ ಟಿ.ವಿ.ರಮಣ ಪೈ ಸಭಾಂಗಣದಲ್ಲಿ ಮಂಗಳವಾರ ‘ತುರ್ತು ಪರಿಸ್ಥಿತಿ- ಸಂವಿಧಾನಕ್ಕೆ ಮಾಡಿದ ಅಪಚಾರ’ ಎಂಬ ವಿಷಯದ ಕುರಿತ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ತುರ್ತುಪರಿಸ್ಥಿತಿ ಹೇರಿಕೆ ಹಾಗೂ ತಿದ್ದುಪಡಿ ಮೂಲಕ ಸಂವಿಧಾನವನ್ನು ಬುಡಮೇಲು ಮಾಡಿರುವುದು ಇಂದಿರಾ ಗಾಂಧಿ. ಕಾಂಗ್ರೆಸ್‌ನಂತೆ ಸಂವಿಧಾನವನ್ನು ಬುಡಮೇಲು ಮಾಡಲು ಯಾರಿಂದಲೂ ಸಾಧ್ಯವಿಲ್ಲ ಎಂದು ಅವರು ಹೇಳಿದರು.

ಹಿಂದುಗಳು ಬಹುಸಂಖ್ಯಾತರಾಗಿ ಇರುವವರೆಗೆ ಮಾತ್ರ ಭಾರತದಲ್ಲಿ ಪ್ರಜಾಪ್ರಭುತ್ವ ಇರುತ್ತದೆ. ಬೇರೆ ಯಾವುದೇ ಇಸ್ಲಾಮಿಕ್, ಕ್ರಿಶ್ಚಿಯನ್ ರಾಷ್ಟ್ರಗಳಲ್ಲಿ ಪ್ರಜಾಪ್ರಭುತ್ವ, ಸಮಾನ ಅವಕಾಶಗಳು ಇಲ್ಲ. ತುರ್ತು ಪರಿಸ್ಥಿತಿ ವಿರುದ್ದ ೩೨೫೪ ಮಂದಿ ಆರ್‌ಎಸ್‌ಎಸ್ ಕಾರ್ಯಕರ್ತರು, ೭೭೨ ಮಂದಿ ಜನಸಂಘದ ಕಾರ್ಯಕರ್ತರು ಜೈಲಿಗೆ ಹೋಗಿದ್ದರು ಎಂದು ಅವರು ಹೇಳಿದರು.

ತುರ್ತು ಪರಿಸ್ಥಿತಿ ವಿರುದ್ಧ ಹೋರಾಟ ನಡೆಸಿದವರಿಗೆ ಮುಂದಿನ ದಿನಗಳಲ್ಲಿ ಪಿಂಚಣಿ ನೀಡುವ ಬಿಜೆಪಿಯ ಭರವಸೆಗೆ ಬದ್ಧರಾಗಿದ್ದೇವೆ ಎಂದರು.ಸಕಲೇಶಪುರ ಶಾಸಕ ಸಿಮೆಂಟ್ ಮಂಜು ಮಾತನಾಡಿ, ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿದ ದಿನ ದೇಶಕ್ಕೆ ಕರಾಳ ದಿನವಾಗಿದೆ. ಪ್ರಜಾಪ್ರಭುತ್ವವನ್ನು ಕಗ್ಗೊಲೆ ಮಾಡಿದ ದಿನವದು. ಅಕ್ರಮವಾಗಿ ಚುನಾವಣೆ ಗೆದ್ದ ಇಂದಿರಾ ಗಾಂಧಿ ನ್ಯಾಯಾಲಯದ ವಿರುದ್ಧ ಹೋರಾಡಲು ಸರ್ಕಾರಿ ಯಂತ್ರವನ್ನು ಬಳಸಿಕೊಂಡಿದ್ದರು ಎಂದರು.

ದ.ಕ. ಜಿಲ್ಲಾ ಕೊಟ್ಟಾರಿ ಸಮಾಜ ಸುಧಾರಕ ಸಂಘದ ಅಧ್ಯಕ್ಷ ಮಹಾಬಲ ಕೊಟ್ಟಾರಿ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮ ಸಂಚಾಲಕ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಸ್ವಾಗತಿಸಿದರು. ರಾಕೇಶ್ ರೈ ಕಡೆಂಜಿ ನಿರೂಪಿಸಿದರು.ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಮತ್ತಿತರರು ಭಾಗವಹಿಸಿದ್ದರು. ತುರ್ತು ಪರಿಸ್ಥಿತಿಯ ವಿರುದ್ಧ ಹೋರಾಟ ಮಾಡಿದವರನ್ನು ಗೌರವಿಸಲಾಯಿತು.