ಸಾರಾಂಶ
ಕನ್ನಡಪ್ರಭ ವಾರ್ತೆ ಮಂಡ್ಯ
ರೈತರ ಕಲ್ಯಾಣಕ್ಕಾಗಿ ಕಾಂಗ್ರೆಸ್ ಕಿಸಾನ್ ನ್ಯಾಯವನ್ನು ಘೋಷಣೆ ಮಾಡಿ ಹಿತ ಕಾಪಾಡಲು ಬದ್ಧವಾಗಿದೆ ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಹೇಳಿದರು.ಮೇಲುಕೋಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಂಡ್ಯ ತಾಲೂಕು ದುದ್ದ ಹೋಬಳಿ ವಿವಿಧ ಗ್ರಾಪಂಗಳಲ್ಲಿ ಸರ್ವೋದಯ ಕರ್ನಾಟಕ ಪಕ್ಷದ ಜೊತೆಗೂಡಿ ಹಮ್ಮಿಕೊಂಡಿದ್ದ ಚುನಾವಣಾ ಪ್ರಚಾರದ ವೇಳೆ ಅವರು ಮಾತನಾಡಿದರು.
ರೈತರ ಕಲ್ಯಾಣಕ್ಕಾಗಿ ಕಾಂಗ್ರೆಸ್ ಹಲವು ಯೋಜನೆಗಳನ್ನು ತಂದಿದೆ. ಚುನಾವಣೆಯಲ್ಲಿ ನನ್ನನ್ನು ಗೆಲ್ಲಿಸುವ ಮೂಲಕ ಕಾಂಗ್ರೆಸ್ ಗೆ ಶಕ್ತಿ ತುಂಬಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರ ಕೈ ಬಲಪಡಿಸಬೇಕು ಎಂದು ಮನವಿ ಮಾಡಿದರು.ಕಾಂಗ್ರೆಸ್ ಅಧಿಕಾರಕ್ಕೆ ಬಂದ ಕೂಡಲೇ ಸ್ವಾಮಿನಾಥನ್ ಆಯೋಗದ ಶಿಫಾರಸಿನಂತೆ ಕನಿಷ್ಠ ಬೆಂಬಲ ಬೆಲೆಗೆ (ಎಂಎಸ್‌ಪಿ) ಕಾನೂನುಬದ್ಧ ಭರವಸೆ ನೀಡಲಾಗುತ್ತದೆ. ಎಂಎಸ್ ಪಿಗೆ ಕಾನೂನು ಖಾತರಿ ನೀಡುವುದರಿಂದ ರೈತರಿಗೆ ನ್ಯಾಯಯುತ ಬೆಲೆ ಸಿಗಲಿದೆ. ಇದರಿಂದ ರೈತರ ಜೀವನ ಪರಿಸ್ಥಿತಿ ಸುಧಾರಿಸಲಿದೆ. ಇದರ ಜೊತೆಗೆ ರೈತರ ಸಾಲಮನ್ನಾ ಮಾಡಲು ಕಾಂಗ್ರೆಸ್ ಮುಂದಾಗಿದೆ. ಇದಕ್ಕೆ ಜನಾಶೀರ್ವಾದ ಬೇಕಿದೆ ಎಂದರು.
ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಎಂಎಸ್ ಪಿ, ಕೃಷಿ ಸಾಲಮನ್ನಾ, ಬೆಳೆ ನಷ್ಟವಾದರೆ 30 ದಿನಗಳಲ್ಲಿ ರೈತರ ಬ್ಯಾಂಕ್ ಖಾತೆಗೆ ನೇರವಾಗಿ ಹಣ ಪಾವತಿ ಮಾಡುವ ವಿಮಾ ಯೋಜನೆ, ಹೊಸ ಆಮದು-ರಫ್ತು ನೀತಿ ಹಾಗೂ ಕೃಷಿ ಯಂತ್ರೋಪಕರಣಗಳು, ರಸಗೊಬ್ಬರ, ಬಿತ್ತನೆಬೀಜಗಳ ಮೇಲಿನ ಜಿಎಸ್ ಟಿಯನ್ನು ತೆಗೆದು ಹಾಕಲಾಗುತ್ತದೆ ಎಂದು ಹೇಳಿದರು.ಈ ವೇಳೆ ಶಾಸಕ ದರ್ಶನ್ ಪುಟ್ಟಣ್ಣಯ್ಯ, ವಿಧಾನಪರಿಷತ್ ಸದಸ್ಯರಾದ ದಿನೇಶ್ ಗೂಳಿಗೌಡ, ಮಾಜಿ ಶಾಸಕ ಎಚ್ .ಬಿ.ರಾಮು, ಎಐಸಿಸಿ ಕಾರ್ಯದರ್ಶಿ ಹಾಗೂ ಕೇರಳದ ಕಾಂಗ್ರೆಸ್ ಶಾಸಕ ರೋಜಿ ಎಂ. ಜಾನ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ.ಡಿ.ಗಂಗಾಧರ್, ಕೆಪಿಸಿಸಿ ಸದಸ್ಯರಾದ ನಾರಾಯಣ್ ಸೇರಿ ಸರ್ವೋದಯ ಕರ್ನಾಟಕ ಪಕ್ಷ ಹಾಗೂ ಕಾಂಗ್ರೆಸ್ ನ ಹಲವು ಮುಖಂಡರು ಚುನಾವಣಾ ಪ್ರಚಾರದಲ್ಲಿ ತೊಡಗಿದ್ದರು.