ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ ಬಲಿಷ್ಠಗೊಳಿಸಲು ನಿರ್ಧಾರ

| Published : Dec 11 2023, 01:15 AM IST

ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ ಬಲಿಷ್ಠಗೊಳಿಸಲು ನಿರ್ಧಾರ
Share this Article
  • FB
  • TW
  • Linkdin
  • Email

ಸಾರಾಂಶ

ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕವನ್ನು ಕೊಡಗು ಜಿಲ್ಲೆಯಲ್ಲಿ ಮತ್ತಷ್ಟು ಬಲಿಷ್ಠಗೊಳಿಸಲು ತೀರ್ಮಾನ ತೆಗೆದುಕೊಳ್ಳಲಾಗಿದೆ.

ಕನ್ನಡಪ್ರಭ ವಾರ್ತೆ ಪೊನ್ನಂಪೇಟೆ

ಕಾಂಗ್ರೆಸ್ ಪಕ್ಷದ ಬೆನ್ನೆಲುಬಾಗಿರುವ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕವನ್ನು ಕೊಡಗು ಜಿಲ್ಲೆಯಲ್ಲಿ ಮತ್ತಷ್ಟು ಬಲಿಷ್ಠಗೊಳಿಸಲು ತೀರ್ಮಾನ ತೆಗೆದುಕೊಳ್ಳಲಾಗಿದೆ. ಕೊಡಗು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಪಿ.ಎ. ಹನೀಫ್ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲೆಯ ವಿವಿಧ 6 ಬ್ಲಾಕ್‌ಗಳ ನೂತನ ಅಧ್ಯಕ್ಷರ ಸಮಾಲೋಚನಾ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಬೇರೆ ಬೇರೆ ಕಾರಣಗಳಿಗಾಗಿ ಪಕ್ಷದ ಸಂಘಟನಾ ಕಾರ್ಯಗಳಿಂದ ದೂರವಿರುವ ಅಲ್ಪಸಂಖ್ಯಾತ ಮುಖಂಡರನ್ನು ಮತ್ತೆ ಒಂದೆಡೆ ಸೇರಿಸಿ ಅವರನ್ನು ಪಕ್ಷದ ಕಾರ್ಯ ಚಟುವಟಿಕೆಗಳಿಗೆ ತೊಡಗಿಸಿಕೊಳ್ಳುವಂತೆ ಮಾಡಬೇಕು. ಇದರಿಂದ ಪಕ್ಷದ ಬೆಳವಣಿಗೆಗೆ ಸಹಕಾರಿಯಾಗುತ್ತದೆ. ಅಲ್ಲದೆ, ರಾಜ್ಯ ಸರ್ಕಾರ ಜಾರಿಗೆ ತಂದಿರುವ ವಿವಿಧ ಜನೋಪಯೋಗಿ ಯೋಜನೆಗಳ ಕುರಿತು ಮತದಾರರಿಗೆ ಜಾಗೃತಿ ಮೂಡಿಸಬೇಕು ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ ವಿವಿಧ ಬ್ಲಾಕ್ ಸಮಿತಿ ಅಧ್ಯಕ್ಷರು, ಈ ಮೂಲಕ ಮುಂಬರುವ ಲೋಕಸಭೆ ಸೇರಿದಂತೆ ಜಿ. ಪಂ. ಮತ್ತು ತಾ. ಪಂ. ಚುನಾವಣೆಗೆ ಅಲ್ಪಸಂಖ್ಯಾತರ ಘಟಕವನ್ನು ಮತ್ತಷ್ಟು ಸಜ್ಜುಗೊಳಿಸಲು ಸಲಹೆ ನೀಡಿದರು.

ಇದೀಗ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದರೂ ಕೊಡಗು ಜಿಲ್ಲೆಯ ಅಲ್ಪಸಂಖ್ಯಾತರಿಗೆ ವಿವಿಧ ಯೋಜನೆಗಳ ಸೌಲಭ್ಯ ನಿರೀಕ್ಷಿತ ಮಟ್ಟದಲ್ಲಿ ದೊರೆಯುತ್ತಿಲ್ಲ. ವಿಶೇಷವಾಗಿ ಕೊಡಗು ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಕಳೆದ ಹಲವು ದಶಕಗಳಿಂದ ಸಂಪೂರ್ಣವಾಗಿ ಬೆಂಬಲಿಸುತ್ತಾ ಬಂದಿರುವ ಅಲ್ಪಸಂಖ್ಯಾತ ಕಾರ್ಯಕರ್ತರಿಗೆ ಮತ್ತು ಪ್ರಮುಖರಿಗೆ ಸೂಕ್ತ ರಾಜಕೀಯ ಸ್ಥಾನಮಾನಗಳು ಇದುವರೆಗೂ ದೊರೆತಿಲ್ಲ. ಈ ಕುರಿತು ರಾಜ್ಯ ವರಿಷ್ಠರ ಮುಂದೆ ಸೂಕ್ತ ಸ್ಥಾನಮಾನಗಳಿಗಾಗಿ ಹಕ್ಕೊತ್ತಾಯ ಮಂಡಿಸುವಂತೆಯೂ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.

ಎಲ್ಲ ಮುಖಂಡರನ್ನು ಮತ್ತು ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೂಡಲೇ ಎಲ್ಲಾ ಬ್ಲಾಕ್ ಸಮಿತಿಯನ್ನು ಪೂರ್ಣ ಪ್ರಮಾಣದಲ್ಲಿ ರಚಿಸಬೇಕು. ಬ್ಲಾಕ್ ಸಮಿತಿ ರಚನೆ ಕಾರ್ಯ ಪೂರ್ಣಗೊಂಡ ಬಳಿಕ ಆಯಾ ವ್ಯಾಪ್ತಿಯ ವಲಯ ಸಮಿತಿಗಳಿಗೆ ಪದಾಧಿಕಾರಿಗಳನ್ನು ನೇಮಿಸುವ ಪ್ರಕ್ರಿಯೆಯನ್ನು ಶೀಘ್ರದಲ್ಲೇ ಪೂರ್ಣಗೊಳಿಸಬೇಕು. ಕಾಂಗ್ರೆಸ್ ಅಲ್ಪಸಂಖ್ಯಾತರ ವಿಭಾಗವನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಸಂಘಟಿಸಲು ಎಲ್ಲಾ ಬ್ಲಾಕ್ ಮಟ್ಟದಲ್ಲಿ ಅಗತ್ಯ ರೂಪುರೇಷೆಗಳನ್ನು ಸಿದ್ಧಪಡಿಸಬೇಕು ಎಂದು ಪಿ.ಎ. ಹನೀಫ್ ಸಭೆಯಲ್ಲಿ ಸೂಚಿಸಿದರು. ಸಭೆಯಲ್ಲಿ ಘಟಕದ ಪ್ರಧಾನ ಕಾರ್ಯದರ್ಶಿ ಕೆ.ಎಂ. ಸಯ್ಯದ್ ಭಾವ, ಮಡಿಕೇರಿ ಬ್ಲಾಕ್ ಅಧ್ಯಕ್ಷ ಕೆ.ಜಿ. ಪೀಟರ್, ವಿರಾಜಪೇಟೆ ಬ್ಲಾಕ್ ಅಧ್ಯಕ್ಷ ಕೋಳುಮಂಡ ರಫೀಕ್, ಪೊನ್ನಂಪೇಟೆ ಬ್ಲಾಕ್ ಅಧ್ಯಕ್ಷ ಎಂ.ಎ. ಶಮೀರ್, ಕುಶಾಲನಗರ ಬ್ಲಾಕ್ ಅಧ್ಯಕ್ಷ ಕೆ.ಇ. ಅಬ್ದುಲ್ ರಜಾಕ್, ನಾಪೋಕ್ಲು ಬ್ಲಾಕ್ ಅಧ್ಯಕ್ಷ ಎ.ಎಂ. ಉಮ್ಮರ್, ಸೋಮವಾರಪೇಟೆ ಬ್ಲಾಕ್ ಅಧ್ಯಕ್ಷ ಅಕ್ಮಲ್ ಪಾಷ ಉಪಸ್ಥಿತರಿದ್ದರು.