ಸಾರಾಂಶ
ಕನ್ನಡಪ್ರಭ ವಾರ್ತೆ ಉಡುಪಿ
ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನದ ಆಶಯದಿಂದಾಗಿ ಸಮಾಜದ ಎಲ್ಲ ವರ್ಗಗಳ ಜನತೆಗೆ ಸಾಮಾಜಿಕ ನ್ಯಾಯ ದೊರಕಿದೆ. ಅಂಬೇಡ್ಕರ್ ತತ್ವಾದರ್ಶಗಳು, ದೂರದರ್ಶಿತ್ವದ ಚಿಂತನೆಗಳು ಪಕ್ಷದ ಕಾರ್ಯಕರ್ತರಿಗೆ ಸದಾ ಪ್ರೇರಣಾದಾಯಕ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.ಅವರು ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಅಂಬೇಡ್ಕರ್ ಜಯಂತಿ ಆಚರಣೆಯಲ್ಲಿ ಭಾಗವಹಿಸಿ ಮಾತನಾಡಿದರು.
ಬಿಜೆಪಿ ಅಂಬೇಡ್ಕರ್ ಅವರಿಗೆ ಸದಾ ಗೌರವವನ್ನು ನೀಡಿದೆ. ಆದರೆ ಅಂಬೇಡ್ಕರ್ ಅವರ ಹೆಸರನ್ನು ಕೇವಲ ಚುನಾವಣೆಗೆ ಮಾತ್ರ ಬಳಸುವ ಕಾಂಗ್ರೆಸ್ ಅಂಬೇಡ್ಕರ್ ಅವರನ್ನು ಎರಡೆರಡು ಬಾರಿ ಚುನಾವಣೆಯಲ್ಲಿ ಸೋಲಿಸುವ ಮೂಲಕ ಅವಮಾನಗೈದಿದೆ ಎಂದರು.ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅಂಬೇಡ್ಕರ್ ಅವರ ಜೀವನಕ್ಕೆ ಸಂಬಂಧಿಸಿದ ಸ್ಥಳಗಳನ್ನು ಪಂಚತೀರ್ಥಗಳೆಂದು ಅಭಿವೃದ್ಧಿಪಡಿಸಿದೆ. ಬಿಜೆಪಿ ಸಂವಿಧಾನದ ಮೌಲ್ಯಗಳನ್ನು ಸದಾ ಎತ್ತಿ ಹಿಡಿಯುತ್ತದೆ. ಪಕ್ಷದ ಕಾರ್ಯಕರ್ತರು ಅಂಬೇಡ್ಕರ್ ಅವರ ಆದರ್ಶಗಳನ್ನು ಮೈಗೂಡಿಸಿಕೊಂಡು ರಾಷ್ಟ್ರ ಸೇವೆಯಲ್ಲಿ ತೊಡಗಿಸಿಕೊಳ್ಳುವತ್ತ ಇನ್ನಷ್ಟು ಹೆಚ್ಚಿನ ಪ್ರೇರಣೆ ಪಡೆಯಬೇಕು ಎಂದು ಕೋಟ ಕರೆ ನೀಡಿದರು.
ಈ ಸಂದರ್ಭ ಎಸ್. ಸಿ. ಮೋರ್ಚಾ ಹಿರಿಯ ಕಾರ್ಯಕರ್ತ ಆನಂದ ಮಟಪಾಡಿ ಮತ್ತು ಅಂತಾರಾಷ್ಟ್ರೀಯ ಕ್ರೀಡಾಪಟು ಶ್ರೀಲತಾ ಬೈಂದೂರು ಅವರನ್ನು ಜಿಲ್ಲಾ ಎಸ್.ಸಿ. ಮೋರ್ಚಾ ವತಿಯಿಂದ ಸನ್ಮಾನಿಸಲಾಯಿತು.ಕಾರ್ಯಕ್ರಮದಲ್ಲಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯಕುಮಾರ್ ಶೆಟ್ಟಿ, ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನಕರ ಶೆಟ್ಟಿ ಹೆರ್ಗ, ಎಸ್.ಸಿ. ಮೋರ್ಚಾ ರಾಜ್ಯ ಉಪಾಧ್ಯಕ್ಷ ದಿನಕರ ಬಾಬು, ಜಿಲ್ಲಾ ಎಸ್.ಸಿ. ಮೋರ್ಚಾ ಅಧ್ಯಕ್ಷ ಚಂದ್ರ ಪಂಚವಟಿ, ಪ್ರಧಾನ ಕಾರ್ಯದರ್ಶಿಗಳಾದ ಎಸ್. ನಾರಾಯಣ, ಕೃಷ್ಣಮೂರ್ತಿ ಡಿ.ಬಿ., ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್, ಬಿಜೆಪಿ ಜಿಲ್ಲಾ ಕಾರ್ಯದರ್ಶಿಗಳಾದ ರಾಘವೇಂದ್ರ ಕುಂದರ್, ಅನಿತಾ ಶ್ರೀಧರ್, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ ಮತ್ತಿತರರು ಉಪಸ್ಥಿತರಿದ್ದರು.