ಮಡಿಕೇರಿ: ಕಾಂಗ್ರೆಸ್ ಸತ್ಯಶೋಧನಾ ಸಮಿತಿ ಸಭೆ

| Published : Aug 27 2024, 01:44 AM IST

ಸಾರಾಂಶ

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಸೋಲಿನ ಬಗ್ಗೆ ಪರಾಮರ್ಶೆ ನಡೆಸಲಾಯಿತು. ಕಾಂಗ್ರೆಸ್‌ ಪಕ್ಷದ ಮುಖಂಡರು ಮತ್ತು ಮುಂಚೂಣಿ ಘಟಕಗಳ ಅಧ್ಯಕ್ಷರೊಂದಿಗೆ ಸಭೆ ನಡೆಸಲಾಯಿತು.

ಕನ್ನಡಪ್ರಭ ವಾರ್ತೆ ಮಡಿಕೇರಿ

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ಪರಾಮರ್ಶೆ ಕುರಿತಂತೆ ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ನಿರ್ದೇಶನದ ಮೇರೆಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಸತ್ಯಶೋಧನಾ ಸಮಿತಿಯು ನಗರದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಮತ್ತು ಮುಂಚೂಣಿ ಘಟಕಗಳ ಅಧ್ಯಕ್ಷರೊಂದಿಗೆ ಸಭೆ ನಡೆಸಿತು.

ನಗರದ ಖಾಸಗಿ ಸಭಾಂಗಣದಲ್ಲಿ ಕೆಪಿಸಿಸಿ ಸತ್ಯಶೋಧನಾ ಸಮಿತಿಯ ಸದಸ್ಯರು ಹಾಗೂ ಮಾಜಿ ಉಪಸಭಾಪತಿ ವಿ.ಆರ್.ಸುದರ್ಶನ್, ಕೆಪಿಸಿಸಿ ಉಪಾಧ್ಯಕ್ಷ ಹಾಗೂ ಸಮಿತಿ ಸದಸ್ಯರಾದ ವೆಂಕಟ್ ರಾಮಯ್ಯ, ಸೂರಜ್ ಹೆಗ್ಡೆ ಅವರು ಸಭೆ ನಡೆಸಿ, ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಸೋಲಿನ ಕುರಿತಂತೆ ಪಕ್ಷದ ಮುಖಂಡರು ಹಾಗೂ ಆರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಮತ್ತು ಮುಂಚೂಣಿ ಘಟಕಗಳ ಅಧ್ಯಕ್ಷರು, ಜಿಲ್ಲಾ ಕಾಂಗ್ರೆಸ್ ಸಮಿತಿ ಪದಾಧಿಕಾರಿಗಳ ಅಭಿಪ್ರಾಯ ಸಂಗ್ರಹಿಸಿದರು.

ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ, ಮಡಿಕೇರಿ ಶಾಸಕ ಡಾ.ಮಂತರ್‌ಗೌಡ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ, ವಿಧಾನ ಪರಿಷತ್ ಮಾಜಿ ಸದಸ್ಯೆ ವೀಣಾ ಅಚ್ಚಯ್ಯ, ಕೆಪಿಸಿಸಿ ಮುಖಂಡರಾದ ಎಂ.ಲಕ್ಷ್ಮಣ್, ಎಚ್.ಎಸ್. ಚಂದ್ರಮೌಳಿ, ಟಿ.ಪಿ.ರಮೇಶ್, ಕೆ.ಪಿ.ಚಂದ್ರಕಲಾ ಉಪಸ್ಥಿತರಿದ್ದರು.

ಸಭೆಯ ಬಳಿಕ ಸತ್ಯಶೋಧನಾ ಸಮಿತಿ ಸದಸ್ಯರಾದ ವಿ.ಆರ್.ಸುದರ್ಶನ್ ಸುದ್ದಿಗಾರರೊಂದಿಗೆ ಮಾತನಾಡಿ, ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಸೋಲಿನ ಕುರಿತಂತೆ ಮುಖಂಡರ ಅಭಿಪ್ರಾಯ ಸಂಗ್ರಹಿಸಿ, ವರದಿಯನ್ನು ಕೆಪಿಸಿಸಿ ಮುಖಾಂತರ ಎಐಸಿಸಿಗೆ ಕಳುಹಿಸಲಾಗುವುದು ಎಂದರು.

ಕೊಡಗು ಮತ್ತು ಚಿಕ್ಕಮಗಳೂರಿಗೆ ಪ್ರತ್ಯೇಕ ಲೋಕಸಭಾ ಕ್ಷೇತ್ರವನ್ನಾಗಿಸುವ ಬೇಡಿಕೆ ಪಕ್ಷದ್ದಾಗಿದ್ದು, 2025ರಲ್ಲಿ ಲೋಕಸಭಾ ಕ್ಷೇತ್ರಗಳ ಪುನರ್ ವಿಂಗಡಣೆಯಾಗಲಿದೆ. ಕೇಂದ್ರ ಸರ್ಕಾರ ಬೇಕೆಂದೇ ಸೆನ್ಸಸ್ ತಡೆಹಿಡಿದಿದ್ದು, ಇದು ಬಹಳ ಕಾಲ ಸಾಧ್ಯವಿಲ್ಲ ಎಂದು ಆರೋಪಿಸಿದರಲ್ಲದೇ, ಕೊಡಗಿಗೆ ಪ್ರತ್ಯೇಕ ಲೋಕಸಭಾ ಕ್ಷೇತ್ರದ ಕುರಿತಂತೆ ಕಾಂಗ್ರೆಸ್ ಪಕ್ಷ ಶಿಫಾರಸು ಮಾಡಲಿದೆ. ಅಲ್ಲದೇ ಕೊಡಗಿಗೆ ಮೂರು ವಿಧಾನಸಭಾ ಕ್ಷೇತ್ರದ ಬಗ್ಗೆಯೂ ಪಕ್ಷದ ಬೇಡಿಕೆಯಾಗಿದೆ ಎಂದರು.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲವೆಂದು ಪ್ರಶ್ನೆಯೊಂದಕ್ಕೆ ಸುದರ್ಶನ್ ಉತ್ತರಿಸಿದರು.

ಶಾಸಕ ಎ.ಎಸ್.ಪೊನ್ನಣ್ಣ ಮಾತನಾಡಿ, ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹೈಕಮಾಂಡ್ ನೂರಕ್ಕೆ ನೂರರಷ್ಟು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆಂಬಲಕ್ಕಿದೆ. ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಾವುದೇ ರೀತಿಯ ತಪ್ಪೆಸಗಿಲ್ಲ ಇದೆಲ್ಲ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಕಪಟ ನಾಟಕವೆಂದು ಪಕ್ಷದ ಹೈಕಮಾಂಡ್‌ಗೆ ಮನವರಿಕೆಯಾಗಿದೆ ಎಂದರು.