ಕಾಂಗ್ರೆಸ್ ಸರ್ಕಾರವು ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಹಳೆಯ ಪಿಂಚಣಿ ಯೋಜನೆ (ಒಪಿಎಸ್) ಜಾರಿ ಹಾಗೂ ಅತಿಥಿ ಉಪನ್ಯಾಸಕರ ಸೇವೆ ಖಾಯಂಗೊಳಿಸುವ ಭರವಸೆಗಳನ್ನು ಈಡೇರಿಸದೆ, ಶಿಕ್ಷಣ ಕ್ಷೇತ್ರವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದೆ ಎಂದು ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಆರೋಪಿಸಿದರು.
ಬೀದರ್: ಕಾಂಗ್ರೆಸ್ ಸರ್ಕಾರವು ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಹಳೆಯ ಪಿಂಚಣಿ ಯೋಜನೆ (ಒಪಿಎಸ್) ಜಾರಿ ಹಾಗೂ ಅತಿಥಿ ಉಪನ್ಯಾಸಕರ ಸೇವೆ ಖಾಯಂಗೊಳಿಸುವ ಭರವಸೆಗಳನ್ನು ಈಡೇರಿಸದೆ, ಶಿಕ್ಷಣ ಕ್ಷೇತ್ರವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದೆ ಎಂದು ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಆರೋಪಿಸಿದರು. ಅವರು ನಗರದ ಪತ್ರಿಕಾ ಭವನದಲ್ಲಿ ಆಯೋಜಿಸಿದ್ದ ಬಿಜೆಪಿ-ಜೆಡಿಎಸ್ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯಲ್ಲಿ ಎನ್ಡಿಎ ಅಭ್ಯರ್ಥಿ ಶಶೀಲ್ ಜಿ. ನಮೋಶಿ ಭಾರಿ ಬಹುಮತದಿಂದ ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಕಲ್ಯಾಣ ಕರ್ನಾಟಕ ಭಾಗದಲ್ಲಿ 20ರಿಂದ 25 ಸಾವಿರ ಶಿಕ್ಷಕರ ಹುದ್ದೆಗಳು ಖಾಲಿ ಇವೆ. ರಾಜ್ಯದ 8,500ಕ್ಕೂ ಹೆಚ್ಚು ಶಾಲೆಗಳಲ್ಲಿ ಏಕೈಕ ಶಿಕ್ಷಕರಿದ್ದಾರೆ. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅನುದಾನವನ್ನೇ ಶಾಲಾ ಮೂಲಸೌಕರ್ಯ ಹಾಗೂ ಅತಿಥಿ ಶಿಕ್ಷಕರ ವೇತನಕ್ಕೆ ಬಳಸಲಾಗುತ್ತಿದ್ದು, ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ ಪ್ರತ್ಯೇಕ ಅನುದಾನ ನೀಡುತ್ತಿಲ್ಲ ಎಂದು ಬೆಲ್ದಾಳೆ ದೂರಿದರು. ಮಾಜಿ ಕೇಂದ್ರ ಸಚಿವ ಭಗವಂತ ಖೂಬಾ ಮಾತನಾಡಿ, ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರ ಹೇಳಿಕೆಗಳು ರಾಜ್ಯದ ಸಂಸ್ಕೃತಿಗೆ ಧಕ್ಕೆ ತರುತ್ತಿವೆ ಎಂದು ಟೀಕಿಸಿದರು. ಮಾಜಿ ವಿಧಾನ ಪರಿಷತ್ ಸಭಾಪತಿ ರಘುನಾಥರಾವ್ ಮಲ್ಕಾಪುರೆ ಮಾತನಾಡಿ, ಕಾಂಗ್ರೆಸ್ ನಾಯಕರು ಅಧಿಕಾರಕ್ಕಾಗಿ ಕುರ್ಚಿ ಕಾದಾಟದಲ್ಲೇ ಸಮಯ ವ್ಯರ್ಥ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.