ಕೊಟ್ಟ ಮಾತು ತಪ್ಪಿದ ಕಾಂಗ್ರೆಸ್‌ ಸರ್ಕಾರ: ಕೋಡಿಹಳ್ಳಿ ಚಂದ್ರಶೇಖರ

| Published : Jan 08 2025, 12:18 AM IST

ಸಾರಾಂಶ

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸಾರಿಗೆ ನೌಕರರಿಗೆ 7ನೇ ವೇತನ ಆಯೋಗದ ವರದಿಯಂತೆ ವೇತನ ನೀಡುವುದಾಗಿ ವಿಧಾನಸಭೆ ಚುನಾವಣೆಯ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಿಲ್ಲ.

ಹುಬ್ಬಳ್ಳಿ:

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸಾರಿಗೆ ನೌಕರರಿಗೆ 7ನೇ ವೇತನ ಆಯೋಗದ ವರದಿಯಂತೆ ವೇತನ ನೀಡುವುದಾಗಿ ವಿಧಾನಸಭೆ ಚುನಾವಣೆಯ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಿಲ್ಲ ಎಂದು ರಾಜ್ಯ ರಸ್ತೆ ಸಾರಿಗೆ ನೌಕರರ ಸೇನೆ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಆರೋಪಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 7ನೇ ವೇತನ ಆಯೋಗದಂತೆ ಎಲ್ಲ ಸೌಲಭ್ಯ ನೀಡಬೇಕು. ಸಾರಿಗೆ ನೌಕರರನ್ನೂ ರಾಜ್ಯ ಸರ್ಕಾರಿ ನೌಕರರೆಂದು ಘೋಷಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮನವಿ ಸಲ್ಲಿಸಲಾಗಿದೆ. ಮುಂದಿನ ಬಜೆಟ್‌ನಲ್ಲಿ ಈ ಬೇಡಿಕೆ ಈಡೇರಿಸುವ ಭರವಸೆಯಿದೆ. ಬೇಡಿಕೆ ಈಡೇರಿಸದೆ ಬರೀ ವೇತನ ‍ಪರಿಷ್ಕರಣೆಗೆ ಮುಂದಾದಲ್ಲಿ ನಾವು ಒಪ್ಪುವುದಿಲ್ಲ. ರಾಜ್ಯದಾದ್ಯಂತ ಸಾರಿಗೆ ನೌಕರರು ಉಗ್ರವಾದ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಎಚ್ಚರಿಕೆ ನೀಡಿದರು.

ಟಿಕೆಟ್ ಕಲೆಕ್ಟರ್ ಒಬ್ಬರು ನವಲಗುಂದ ಡಿಪೋದ ಬಸ್ ನಿರ್ವಾಹಕರೊಬ್ಬರನ್ನು ಗುರಿಯಾಗಿಸಿ ಕಿರುಕುಳ ನೀಡಿದ್ದರಿಂದ ನಿರ್ವಾಹಕ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಬಸ್, ಚಾಲಕ ಮತ್ತು ನಿರ್ವಾಹಕರಿಗೆ ವಿನಾಕಾರಣ ಕಿರುಕುಳ ನೀಡುವ ಅಧಿಕಾರಿಗಳನ್ನು ಅಮಾನತು ಮಾಡುವಂತೆ ಒತ್ತಾಯಿಸಿದರು.

ಧರಣಿಗೆ ನಿರ್ಧಾರ:

ಕೇಂದ್ರ ಸರ್ಕಾರವು ಕನಿಷ್ಠ ಬೆಂಬಲ ಬೆಲೆಗೆ ಕಾನೂನು ಖಾತರಿ ನೀಡಬೇಕು, ರೈತರ ವಿವಿಧ ಬೇಡಿಕೆ ಈಡೇರಿಸಬೇಕೆಂದು ಆಗ್ರಹಿಸಿ ರಾಜ್ಯದ ಎಲ್ಲ ಜಿಲ್ಲಾಧಿಕಾರಿ ಕಚೇರಿ ಎದುರು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಧರಣಿ ನಡೆಸಲಾಗುವುದು ಎಂದರು.

ಕನಿಷ್ಠ ಬೆಂಬಲ ಬೆಲೆಗೆ ಕಾನೂನು ಖಾತ್ರಿಗೊಳಿಸಲು ಒತ್ತಾಯಿಸಿ ದೆಹಲಿಯಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪಂಜಾಬ್ ರೈತ ಜಗಜಿತ್ ಸಿಂಗ್ ದಲ್ಲೆವಾಲ್‌ ಆರೋಗ್ಯ ಸ್ಥಿತಿ ಹದಗೆಟ್ಟಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಜೀವಕ್ಕೆ ಏನಾದರೂ ತೊಂದರೆಯಾದಲ್ಲಿ ಕೇಂದ್ರ ಸರ್ಕಾರವು ದೇಶಾದ್ಯಂತ ರೈತರ ಪ್ರತಿರೋಧ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.