ಸಾರಾಂಶ
ಕನ್ನಡ ಪ್ರಭ ವಾರ್ತೆ ಮದ್ದೂರು
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜುಲೈ 28ರಂದು ಮದ್ದೂರಿನಲ್ಲಿ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ ಹಾಗೂ ಮದ್ದೂರು ಕ್ಷೇತ್ರದಲ್ಲಿ ನಡೆದಿರುವ 1200 ಕೋಟಿ ರು. ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಪೂರ್ಣಗೊಂಡ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಲಿದ್ದಾರೆ ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು.ಸೋಮನಹಳ್ಳಿಯ ತಿಮ್ಮದಾಸ್ ಹೋಟೆಲ್ ಸಮೀಪ ಸಾಧನಾ ಸಮಾವೇಶ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಶಾಸಕರು ಜಿಲ್ಲಾ ಮತ್ತು ತಾಲೂಕು ಆಡಳಿತದ ಅಧಿಕಾರಿಗಳೊಂದಿಗೆ ಆಗಮಿಸಿ ಸ್ಥಳ ಪರಿಶೀಲನೆ ನಡೆಸಿದರು.
ಈ ವೇಳೆ ಮಾತನಾಡಿದ ಶಾಸಕರು, ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ 1200 ರು. ಕೋಟಿಗೂ ಅಧಿಕ ಅನುದಾನ ನೀಡಿರುವುದರಿಂದ ಕ್ಷೇತ್ರದ ಜನರ ಪರವಾಗಿ ಅಭಿನಂದನೆ ಸಲ್ಲಿಸಲಾಗುವುದು ಎಂದರು.ಸಾಧನಾ ಸಮಾವೇಶವನ್ನು ಅದ್ಧೂರಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಶೀಘ್ರ ಕಾರ್ಯಕ್ರಮದ ಸಂಬಂಧ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಸಮಾವೇಶದ ರೂಪುರೇಷ ರೂಪಿಸಲಾಗುವುದು. ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಂಪುಟ ಸಚಿವರು, ಜಿಲ್ಲೆಯ ಶಾಸಕರು, ನಿಗಮ, ಮಂಡಳಿ ಅಧ್ಯಕ್ಷರು ಸೇರಿದಂತೆ ಪಕ್ಷದ ನಾಯಕರು ಭಾಗವಹಿಸಲಿದ್ದಾರೆ ಎಂದರು.
ಇದೇ ವೇಳೆ ಜಿಲ್ಲಾಧಿಕಾರಿ ಡಾ.ಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಡಿವೈಎಸ್ಪಿ ಕೃಷ್ಣಪ್ಪ, ಉಪ ವಿಭಾಗಾಧಿಕಾರಿ ಶಿವಾನಂದಮೂರ್ತಿ, ತಹಸೀಲ್ದಾರ್ ಡಾ.ಸ್ಮಿತಾರಾಮು, ಪುರಸಭಾಧ್ಯಕ್ಷೆ ಕೋಕಿಲ ಅರುಣ್, ಮುಖ್ಯಾಧಿಕಾರಿ ಮೀನಾಕ್ಷಿ. ಡಿಸಿಸಿ ಬ್ಯಾಂಕ್ ನಿರ್ದೇಶಕ ಪಿ.ಸಂದರ್ಶ, ಮನ್ಮುಲ್ ನಿರ್ದೇಶಕ ಹರೀಶ್ ಬಾಬು, ತಿಮ್ಮದಾಸ್ ಗ್ರೂಪ್ ಮಾಲೀಕ ಸಿ.ಟಿ.ಶಂಕರ್, ಕಾಂಗ್ರೆಸ್ ಮುಖಂಡ ಕೆ.ಎಂ.ರವಿ ಸೇರಿದಂತೆ ಮತ್ತಿತರರು ಇದ್ದರು.ಸಮಾವೇಶ ಕುರಿತು ಜುಲೈ 11ರಂದು ಪೂರ್ವಭಾವಿ ಸಭೆಮದ್ದೂರು:
ಜುಲೈ 28 ರಂದು ಹಮ್ಮಿಕೊಂಡಿರುವ ಸಾಧನಾ ಸಮಾವೇಶ, ಅಭಿವೃದ್ಧ ಕಾರ್ಯಕ್ರಮಗಳ ಶಂಕುಸ್ಥಾಪನೆ ಸಮಾರಂಭದ ಹಿನ್ನೆಲೆಯಲ್ಲಿ ಪಟ್ಟಣದ ಶಿವಪುರ ಶ್ರೀವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಜುಲೈ 11ರಂದು ಬೆಳಗ್ಗೆ 11 ಗಂಟೆಗೆ ಪೂರ್ವಭಾವಿ ಸಭೆ ಆಯೋಜಿಸಲಾಗಿದೆ.ಸಭೆಗೆ ಮದ್ದೂರು ಮತ್ತು ಭಾರತೀನಗರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಎಲ್ಲಾ ಗ್ರಾಮ, ತಾಲೂಕು, ಜಿಲ್ಲಾ ಪಂಚಾಯ್ತಿ ಹಾಲಿ, ಮಾಜಿ ಮತ್ತು ಪರಾಜಿತ ಸದಸ್ಯರು, ಪಕ್ಷದ ಎಲ್ಲಾ ಘಟಕಗಳ ಪದಾಧಿಕಾರಿಗಳು, ಮಹಿಳಾ ಮತ್ತು ಯುವ ಘಟಕದ ಸದಸ್ಯರು, ನಿಷ್ಠಾವಂತ ಕಾರ್ಯಕರ್ತರು ಮತ್ತು ಅಭಿಮಾನಿ ಬಳಗ ಭಾಗವಹಿಸಿ ಸಮಾರಂಭವನ್ನು ಯಶಸ್ವಿಗೊಳಿಸುವಂತೆ ಮುಖಂಡರು ಕೋರಿದ್ದಾರೆ.