ಸಾರಾಂಶ
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಬಹಳ ದಿನ ಉಳಿಯುವುದಿಲ್ಲ. ಶೀಘ್ರವೇ ಪತನವಾಗಲಿದೆ ಎಂದು ಮಾಜಿ ಸಚಿವ ಮುರಗೇಶ ನಿರಾಣಿ ಹೇಳಿದರು.
ಕನ್ನಡಪ್ರಭ ವಾರ್ತೆ ಬೆಳಗಾವಿ
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಬಹಳ ದಿನ ಉಳಿಯುವುದಿಲ್ಲ. ಶೀಘ್ರವೇ ಪತನವಾಗಲಿದೆ ಎಂದು ಮಾಜಿ ಸಚಿವ ಮುರಗೇಶ ನಿರಾಣಿ ಹೇಳಿದರು.ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮಗೆ ಅನುದಾನ ಬಂದಿಲ್ಲ ಎಂದು ಕಾಂಗ್ರೆಸ್ ಶಾಸಕರೇ ಬೇಜಾರು ವ್ಯಕ್ತಪಡಿಸುತ್ತಿದ್ದಾರೆ. ಐದು ಗ್ಯಾರಂಟಿಗಳನ್ನು ನಾವು ಸ್ವಾಗತ ಮಾಡಿದ್ದೆವು. ಆದರೆ ಈಗ ಕಂಡಿಷನ್ ಹಾಕುತ್ತಿದ್ದಾರೆ. ಗ್ಯಾರಂಟಿ ಯೋಜನೆ ಜಾರಿಯಾದಾಗಿನಿಂದ ಅನುದಾನ ಬಿಡುಗಡೆಯಾಗುತ್ತಿಲ್ಲ. ಹೀಗಾಗಿ ಸರ್ಕಾರದ ವಿರುದ್ಧ ಶಾಸಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ ಎಂದರು.
ಅತ್ಯಂತ ಕಡಿಮೆ ಅವಧಿಯಲ್ಲಿಯೇ ಈ ಸರ್ಕಾರ ಏನಾಗುತ್ತದೆ ಎಂದು ಕಾಯ್ದು ನೋಡಿ ಎಂದ ಅವರು, ಅನುದಾನದ ವಿಚಾರದಲ್ಲಿ ಶಾಸಕರೇ ಅಸಮಾಧಾನಿತರಾಗಿ ಸರ್ಕಾರ ಕೆಡವಲು ತುದಿಗಾಲ ಮೇಲೆ ನಿಂತಿದ್ದಾರೆ. ಬಿಜೆಪಿ ನಾಯಕರೇನು ಈ ಸರ್ಕಾರ ಪತನಗೊಳಿಸಲು ಪ್ರಯತ್ನಿಸುತ್ತಿಲ್ಲ. ಅನುದಾನ ವಿಚಾರವಾಗಿ ಕಾಂಗ್ರೆಸ್ ಶಾಸಕರೇ ಅಸಮಾಧಾನಗೊಂಡಿದ್ದಾರೆ. ಹೀಗಾಗಿ ದೊಡ್ಡ ಪ್ರಮಾಣದಲ್ಲಿ ಕಾಂಗ್ರೆಸ್ ಶಾಸಕರಿಂದಲೇ ಈ ಸರ್ಕಾರ ಪತನವಾಗಲಿದೆ ಎಂದು ಹೇಳಿದರು.ಮಾಜಿ ಸಿಎಂ ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿಕೆಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಅವರು, ಕೆಲವೊಬ್ಬರು ಅಸಾಧಾರಣ ವ್ಯಕ್ತಿಗಳಿರುತ್ತಾರೆ. ಅವರ ಬಗ್ಗೆ ನಾನು ಮಾತನಾಡುವುದಿಲ್ಲ ಎಂದರು.
ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಆಕಾಂಕ್ಷಿ ನಾನಲ್ಲ. ಪಕ್ಷದ ಶಿಸ್ತಿನ ಕಾರ್ಯಕರ್ತ. ಪಕ್ಷ ನನಗೆ ಯಾವುದೇ ಜವಾಬ್ದಾರಿ ನೀಡಿದರೂ ಅದನ್ನು ಸಮರ್ಥವಾಗಿ ನಿಭಾಯಿಸುತ್ತೇನೆ. ಬಿಜೆಪಿಯಲ್ಲಿ ಯಾರಿಗೆ ಯಾವಾಗ ಸರ್ಪೈಸ್ ಆಗುತ್ತದೆಯೋ ಗೊತ್ತಿಲ್ಲ. ಆದರೆ, ಪಕ್ಷ ವಹಿಸಿದ ಯಾವುದೇ ಜವಾಬ್ದಾರಿ ನಿಭಾಯಿಸಲು ನಾನು ಸಿದ್ಧ ಎಂದು ಹೇಳಿದರು.