ಕಾಂಗ್ರೆಸ್ ಗ್ಯಾರಂಟಿಗಳು ಜನರ ನಾಡಿ ಮಿಡಿತಕ್ಕೆ ಹತ್ತಿರ

| Published : Apr 14 2024, 01:53 AM IST

ಸಾರಾಂಶ

ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಜನ ಸಾಮಾನ್ಯರ ನಾಡಿ ಮಿಡಿತಕ್ಕೆ ಹತ್ತಿರವಾಗಿವೆ ಎಂದು ಲೋಕಸಭಾ ಶಿವಮೊಗ್ಗ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಹೇಳಿದರು.

ಶಿವಮೊಗ್ಗ: ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಜನ ಸಾಮಾನ್ಯರ ನಾಡಿ ಮಿಡಿತಕ್ಕೆ ಹತ್ತಿರವಾಗಿವೆ ಎಂದು ಲೋಕಸಭಾ ಶಿವಮೊಗ್ಗ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಹೇಳಿದರು.

ಹೊಳೆಹೊನ್ನೂರು ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಮೇಲಿನ ಹನಸವಾಡಿ ಹಾಗೂ ಬೇಡರಹೊಸಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಸೂಗೂರು ಗ್ರಾಮದಲ್ಲಿ ಶನಿವಾರ ಆಯೋಜಿಸಿದ್ದ ಗ್ರಾಮ ಪಂಚಾಯತಿ ಮಟ್ಟದ ಕಾರ್ಯಕರ್ತರ ಪ್ರಚಾರ ಸಭೆಯಲ್ಲಿ ಮಾತನಾಡಿ, ರಾಜ್ಯ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದು ಗ್ಯಾರಂಟಿ ಯೋಜನೆಗಳ ಮೂಲಕ ಜನರ ಹಿತ ಕಾಪಾಡುತ್ತಿದೆ. ಇಲ್ಲಿ ಗ್ಯಾರಂಟಿ ಯೋಜನೆಗಳ ಬಗ್ಗೆ ಕೆಲವರಿಂದ ಅಪಪ್ರಚಾರ ನಡೆಸಲಾಗುತ್ತಿದೆ. ಆದರೆ, ಎಲ್ಲ ಯೋಜನೆಗಳೂ ಯಶಸ್ವಿಯಾಗಿ ನಡೆಯುತ್ತಿವೆ. ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಇಲ್ಲಿ ಆರಾಧನ, ಆಶ್ರಯದಂತಹ ಯೋಜನೆಗಳನ್ನು ಜಾರಿಗೆ ತಂದು ಜನಸಾಮಾನ್ಯರಿಗೆ ನೆರಳಾಗಿದ್ದರು. ಅದೇ ಹಾದಿಯಲ್ಲಿ ನಾನು ಸಾಗುತ್ತೇನೆ ಎಂದರು.

ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ ಮಾತನಾಡಿ, ಜಿಲ್ಲೆಯಲ್ಲಿ ಬಡವರು, ಕೂಲಿ ಕಾರ್ಮಿಕರ ಬದುಕಿಗೆ ಗ್ಯಾರಂಟಿ ಯೋಜನೆಗಳು ಆಶಾಕಿರಣವಾಗಿವೆ. ಬಿಜೆಪಿ ಆಡಳಿತದಲ್ಲಿ ಬಡವರ ಪರ ಯಾವುದೇ ಜನಪರ ಯೋಜನೆಗಳನ್ನು ಜಾರಿಗೆ ತರಲಿಲ್ಲ. ಇಲ್ಲಿನ ಸೋಗಾನೆ ವಿಮಾನ ನಿಲ್ದಾಣ ಕೇವಲ ಶ್ರೀಮಂತರಿಗೆ ಮಾತ್ರ ಎಂದರು.

ಕಾಂಗ್ರೆಸ್ ಮುಖಂಡ ಶ್ರೀನಿವಾಸ ಕರಿಯಣ್ಣ ಮಾತನಾಡಿ, ರಾಜ್ಯದಲ್ಲಿ ಬಡವರ ಕಣ್ಣೀರು ಒರೆಸಲು ಸರ್ಕಾರ ಶ್ರಮಿಸುತ್ತಿದೆ. ಇದನ್ನು ಸಹಿಸದ ಬಿಜೆಪಿ ನಾಯಕರು ಅಪಪ್ರಚಾರದಿಂದ ಚುನಾವಣೆಗೆ ಸಿದ್ಧತೆ ನಡೆಸುತ್ತಿದ್ದಾರೆ ಎಂದರು.

ಕಾಂಗ್ರೆಸ್ ಪ್ರಚಾರ ಸಮಿತಿ ಜಿಲ್ಲಾ ಅಧ್ಯಕ್ಷ ಎನ್.ರಮೇಶ್ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಾಡಿಗೆ ಶಕ್ತಿಯಾಗಿ ನಿಂತಿದ್ದಾರೆ. ಜಿಲ್ಲೆಯಲ್ಲಿ ಅದೇ ಹಾದಿಯಲ್ಲಿ ಸಾಗಲು ಗೀತಾ ಅವರಿಗೆ ಮತ ನೀಡಿ ಶಕ್ತಿ ತುಂಬಬೇಕಿದೆ ಎಂದರು.

ಲೋಕಸಭಾ ಚುನಾವಣೆ ಜಿಲ್ಲಾ ಉಸ್ತುವಾರಿ ಅನಿಲ್ ಕುಮಾರ್ ತಡಕಲ್, ಬೋವಿ ನಿಗಮದ ಅಧ್ಯಕ್ಷ ಎಸ್.ರವಿಕುಮಾರ್, ಹೊಳೆಹೊನ್ನೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹನುಮಂತ, ಎಸ್.ತೀರ್ಥಪ್ಪ, ವೈ.ಎಚ್.ನಾಗರಾಜ, ಶಾಂತವೀರ ನಾಯ್ಕ್, ತಿಮ್ಮಣ್ಣ, ದಿನೇಶ್ ಪಾಟೀಲ್, ಗಿರೀಶ್, ಧರ್ಮಣ್ಣ, ಶಿವಾನಂದ, ವಿರೇಶ್, ಹನುಮಂತ ನಾಯ್ಕ್, ಲೋಕೇಶ್, ಮಂಜು ಮೇಸ್ತ್ರಿ, ಸಂದೀಪ ಇದ್ದರು.