ಧಾರವಾಡ:
ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದ ಎದುರು ಪ್ರತಿಭಟನೆಯ ಹೆಸರಿನಲ್ಲಿ ನಡೆದಿರುವ ಹಿಂಸಾತ್ಮಕ ಘಟನೆಗಳನ್ನು ಖಂಡಿಸಿ ಬಿಜೆಪಿ ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲೆಯಿಂದ ಗುರುವಾರ ಇಲ್ಲಿಯ ಸುಭಾಷ್ ರಸ್ತೆಯಲ್ಲಿರುವ ಜಿಲ್ಲಾ ಬಿಜೆಪಿ ಕಚೇರಿಯಿಂದ ಬೃಹತ್ ಪ್ರತಿಭಟನೆ ನಡೆಯಿತು.ಪ್ರತಿಭಟನೆಯಲ್ಲಿ ಪಕ್ಷದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ನೂರಾರು ಕಾರ್ಯಕರ್ತರು ಭಾಗವಹಿಸಿ ಕಾಂಗ್ರೆಸ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಮಾತನಾಡಿದ ಜಿಲ್ಲಾಧ್ಯಕ್ಷ ತಿಪ್ಪಣ್ಣ ಮಜ್ಜಗಿ, ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬರಿಗೂ ಪ್ರತಿಭಟನೆ ನಡೆಸುವ ಹಕ್ಕಿದೆ. ಆದರೆ, ವಿದ್ಯಾರ್ಥಿಗಳನ್ನು ಮುಂದಿಟ್ಟುಕೊಂಡು ಪ್ರತಿಭಟನೆಯ ಹೆಸರಿನಲ್ಲಿ ಹಿಂಸಾಚಾರ, ಗೂಂಡಾಗಿರಿ ಹಾಗೂ ಸಾರ್ವಜನಿಕ ಆಸ್ತಿಗೆ ಹಾನಿ ಉಂಟುಮಾಡುವುದು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧ. ಇಂತಹ ಕೃತ್ಯಗಳನ್ನು ಬಿಜೆಪಿ ತೀವ್ರವಾಗಿ ಖಂಡಿಸುತ್ತದೆ ಎಂದು ಹೇಳಿದರು.
ಮಾಜಿ ಮೇಯರ್ ಈರೇಶ ಅಂಚಟಗೇರಿ ಮಾತನಾಡಿ, ರಾಜಕೀಯ ಭಿನ್ನಾಭಿಪ್ರಾಯ ಹಿಂಸೆಯ ಮೂಲಕ ವ್ಯಕ್ತಪಡಿಸುವುದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿದೆ. ಕಾನೂನು ಕೈಗೆತ್ತಿಕೊಳ್ಳುವ ಯಾವುದೇ ಪ್ರಯತ್ನವನ್ನು ಸಹಿಸಲಾಗುವುದಿಲ್ಲ. ಶಾಂತಿಯುತ ಹಾಗೂ ಸಂವಿಧಾನಬದ್ಧ ರೀತಿಯ ಹೋರಾಟವೇ ಪ್ರಜಾಪ್ರಭುತ್ವದ ನಿಜವಾದ ಮೌಲ್ಯವಾಗಿದೆ ಎಂದರು.ಮುಖಂಡರಾದ ಜಯತೀರ್ಥ ಕಟ್ಟಿ, ಮಾಜಿ ಶಾಸಕಿ ಸೀಮಾ ಮಸೂತಿ ಹಾಗೂ ನಿಂಗಪ್ಪ ಸುತಗಟ್ಟಿ ಮಾತನಾಡಿ, ದೇಶದ ಸಾಂವಿಧಾನಿಕ ಸಂಸ್ಥೆಗಳ ಗೌರವ ಕಾಪಾಡುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ. ರಾಜಕೀಯ ಲಾಭಕ್ಕಾಗಿ ಹಿಂಸೆಯ ಮಾರ್ಗ ಅನುಸರಿಸುವುದು ಖಂಡನೀಯ. ಇಂತಹ ಘಟನೆಗಳು ಮರುಕಳಿಸದಂತೆ ಕಾನೂನು ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ವಸಂತ ನಾಡಜೋಶಿ, ಶಿವು ಮೆಣಸಿನಕಾಯಿ, ಬಸವರಾಜ ಗರಗ, ಮೋಹನ ರಾಮದುರ್ಗ, ಶಂಕರ ದೇಸಾಯಿ, ಶಂಕರ ಶೇಳಕೆ, ಈರಣ್ಣ ಜಡಿ, ಸಂಜಯ ಕಪಠಕರ, ಮಂಜುನಾಥ ಮಲ್ಲಿಗವಾಡ, ನಾರಾಯಣ ಜರತಾರಕರ, ಶಕ್ತಿ ಹಿರೇಮಠ, ಪ್ರಮೋದ ಕಾರಕೂನ, ಶರಣು ಅಂಗಡಿ, ಸಿದ್ದು ಕಲ್ಯಾಣ ಶಟ್ಟಿ ಮತ್ತಿತರರು ಇದ್ದರು.