ಶಿಕ್ಷಣ ವ್ಯವಸ್ಥೆ ಹದಗೆಡಲು ಕಾಂಗ್ರೆಸ್‌ ಕಾರಣ

| Published : May 30 2024, 12:46 AM IST

ಸಾರಾಂಶ

ನಗರದ ಸಿದ್ದಗಂಗಾ ಮಠಕ್ಕೆ ಆಗ್ನೇಯ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ವಿಧಾನ ಪರಿಷತ್ ಸದಸ್ಯ ವೈ.ಎ. ನಾರಾಯಣಸ್ವಾಮಿ ಹಾಗೂ ಬೆಂಗಳೂರು ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ದೇವೇಗೌಡ ಭೇಟಿ ನೀಡಿ ಹಿರಿಯ ಶ್ರೀಗಳಾದ ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆ ದರ್ಶನ ಪಡೆದು, ಮಠಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ಆಶೀರ್ವಾದ ಪಡೆದರು.

ಕನ್ನಡಪ್ರಭ ವಾರ್ತೆ ತುಮಕೂರುನಗರದ ಸಿದ್ದಗಂಗಾ ಮಠಕ್ಕೆ ಆಗ್ನೇಯ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ವಿಧಾನ ಪರಿಷತ್ ಸದಸ್ಯ ವೈ.ಎ. ನಾರಾಯಣಸ್ವಾಮಿ ಹಾಗೂ ಬೆಂಗಳೂರು ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ದೇವೇಗೌಡ ಭೇಟಿ ನೀಡಿ ಹಿರಿಯ ಶ್ರೀಗಳಾದ ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆ ದರ್ಶನ ಪಡೆದು, ಮಠಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ಆಶೀರ್ವಾದ ಪಡೆದರು. ಶ್ರೀಗಳ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವೈ.ಎ. ನಾರಾಯಣಸ್ವಾಮಿ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಶಿಕ್ಷಣ ವ್ಯವಸ್ಥೆ ಬಹಳ ಹದಗೆಟ್ಟಿದೆ. ಶಿಕ್ಷಕರು ಸಹ ಆತಂಕದಲ್ಲೇ ಕಾರ್ಯನಿರ್ವಹಿಸುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಜತೆಗೆ ಶಿಕ್ಷಣ ವೃತ್ತಿ ಪಾವಿತ್ರ್ಯತೆ ಕಳೆದುಕೊಳ್ಳುತ್ತಿದೆ ಎಂದು ಆರೋಪಿಸಿದರು.ಜೂ.3 ರಂದು ನಡೆಯಲಿರುವ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಮತ್ತೊಮ್ಮೆ ಶಿಕ್ಷಕರನ್ನು ನನ್ನನ್ನು ಬೆಂಬಲಿಸುವ ಮೂಲಕ ಗೆಲ್ಲಿಸುವ ವಿಶ್ವಾಸ ಇದೆ. ನಾನು ಮತ್ತೊಮ್ಮೆ ವಿಧಾನ ಪರಿಷತ್ ಸದಸ್ಯನಾಗಿ ಆಯ್ಕೆಯಾದ ಬಳಿಕ ಶಿಕ್ಷಕರು ನೆಮ್ಮದಿಯಿಂದ ಕಾರ್ಯನಿರ್ವಹಿಸುವಂತಹ ವಾತಾವರಣವನ್ನು ನಿರ್ಮಾಣ ಮಾಡಲು ಶ್ರಮಿಸುತ್ತೇನೆ ಎಂದರು.ಶಿಕ್ಷಕರು ಸೇರಿದಂತೆ ಸರ್ಕಾರಿ ನೌಕರರ 7ನೇ ವೇತನ ಆಯೋಗದ ವರದಿ ಜಾರಿ, ಎನ್‌ಪಿಎಸ್ ರದ್ದುಗೊಳಿಸಿ, ಒಪಿಎಸ್ ಜಾರಿ, ಶಿಕ್ಷಕರಿಗೆ ಆರೋಗ್ಯ ಕಾರ್ಡ್ ಒದಗಿಸುವ ಕಾರ್ಯ ಮಾಡುವ ಗುರಿಯನ್ನು ಹೊಂದಿದ್ದೇನೆ. ಕಾಂಗ್ರೆಸ್‌ನವರು ಏನೇ ಆಸೆ, ಆಮೀಷವೊಡ್ಡಿದರೂ, ಏನೇ ಕುತಂತ್ರ ಮಾಡಿದರೂ ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಗೆಲ್ಲಲ್ಲು ಸಾಧ್ಯವಿಲ್ಲ ಎಂದು ಹೇಳಿದರು.

ಈ ಕ್ಷೇತ್ರದ 5 ಜಿಲ್ಲೆಗಳ 34 ತಾಲೂಕುಗಳಲ್ಲಿ ನಮ್ಮ ಪರ ವಾತಾವರಣವಿದೆ. ನೂರಕ್ಕೆ ನೂರು ಪಾಲು ಗೆಲ್ಲುವ ವಿಶ್ವಾಸವಿದೆ. ಈ ಚುನಾವಣೆಯಲ್ಲಿ ನನ್ನನ್ನು ಮತ್ತೊಮ್ಮೆ ಆಯ್ಕೆ ಮಾಡುವಂತೆ ಶಿಕ್ಷಕರಲ್ಲಿ ಮನವಿ ಮಾಡಿದ್ದೇನೆ. ಚುನಾವಣೆಯಲ್ಲಿ ನನ್ನನ್ನು ಆಯ್ಕೆ ಮಾಡುವ ಮೂಲಕ ಶಿಕ್ಷಕರೇ ಗೆಲ್ಲಲಿದ್ದಾರೆ. ಈ ಮೂಲಕ ಒಳ್ಳೆಯ ಸಮಾಜ ಕಟ್ಟಲು ಶಿಕ್ಷಕರು ಅನುವು ಮಾಡಿಕೊಡಬೇಕು ಎಂದು ಕೋರಿದರು.

ನಾನು ಕಳೆದ 20 ವರ್ಷಗಳಿಂದಲೂ ಸಿದ್ದಗಂಗಾ ಮಠ ಭಕ್ತನಾಗಿದ್ದೇನೆ. ಹಿರಿಯ ಶ್ರೀಗಳ ಗದ್ದುಗೆ ದರ್ಶನ ಪಡೆದು, ಮಠಾಧ್ಯಕ್ಷರ ಆಶೀರ್ವಾದ ಪಡೆದಿದ್ದೇನೆ. ಸಿದ್ದಗಂಗಾ ಸಂಸ್ಥೆಗಳ ಕೆಲಸ ಕಾರ್ಯಗಳನ್ನು ಚಾಚೂ ತಪ್ಪದೇ ಮಾಡುತ್ತಾ ಸಾಗುತ್ತಿದ್ದೇನೆ. ನನಗೆ ಗುರುಗಳ ಆಶೀರ್ವಾದ ಸಿಕ್ಕಿದೆ ಎಂದರು.

ಶಾಸಕ ಜ್ಯೋತಿ ಗಣೇಶ್ ಮಾತನಾಡಿ, ಈಗಾಗಲೇ ಶಿಕ್ಷಣ ಕ್ಷೇತ್ರದ ಸಮಸ್ಯೆಗಳಿಗೆ ಸ್ಪಂದಿಸಿ ಕೆಲಸ ಮಾಡುತ್ತಿರುವ ವೈ.ಎ. ನಾರಾಯಣಸ್ವಾಮಿ ಅವರನ್ನು ಜೂ.3 ರಂದು ನಡೆಯಲಿರುವ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಸಹ ಶಿಕ್ಷಣ ಕ್ಷೇತ್ರದ ಸಮಸ್ಯೆಗಳ ನಿವಾರಣೆಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದಾರೆ. ಹಾಗೆಯೇ ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲೂ ಶಿಕ್ಷಕರ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸುವ ಕೆಲಸ ಆಗಿದೆ ಎಂದು ಹೇಳಿದರು.

ಸ್ವತಃ ಇಂಜಿನಿಯರಿಂಗ್ ಕಾಲೇಜಿನ ಪ್ರೊಫೆಸರ್ ಆಗಿ ಕಾರ್ಯನಿರ್ವಹಿಸಿದ್ದ ವೈ.ಎ. ನಾರಾಯಣಸ್ವಾಮಿಗೆ ಶಿಕ್ಷಕರ ನೈಜ ಸಮಸ್ಯೆಗಳ ಅರಿವಿದೆ. ಹಾಗಾಗಿ ಅವರು ಸದಾ ಶಿಕ್ಷಕರ ಸ್ನೇಹಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಮತ್ತೊಮ್ಮೆ ಅವರಿಗೆ ಶಿಕ್ಷಕರ ಸೇವೆ ಮಾಡಲು ಅವಕಾಶ ಮಾಡಿಕೊಡಬೇಕು ಎಂದರು.

ಸಿದ್ದಲಿಂಗಪ್ಪ, ಕೆ.ಎಸ್. ಉಮಾಮಹೇಶ್ ಮತ್ತಿತರರು ಉಪಸ್ಥಿತರಿದ್ದರು.