ಎಸ್‌ಐಆರ್‌ ಮೂಲಕ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕೇಂದ್ರ ಚುನಾವಣಾ ಆಯುಕ್ತ ಜ್ಞಾನೇಶ್‌ಕುಮಾರ್‌ ಬುಡಮೇಲು ಮಾಡುತ್ತಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್‌ ಕಾರ್ಯಕರ್ತರು ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆಸಿದರು.

ಹುಬ್ಬಳ್ಳಿ:

ಎಸ್‌ಐಆರ್‌ ಮೂಲಕ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕೇಂದ್ರ ಚುನಾವಣಾ ಆಯುಕ್ತ ಜ್ಞಾನೇಶ್‌ಕುಮಾರ್‌ ಬುಡಮೇಲು ಮಾಡುತ್ತಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್‌ ಕಾರ್ಯಕರ್ತರು ಸೋಮವಾರ ನಗರದಲ್ಲಿ ಬೃಹತ್‌ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ನಗರದ ಡಾ. ಬಿ.ಆರ್‌. ಅಂಬೇಡ್ಕರ್‌ ವೃತ್ತದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆಯನ್ನು ಸರ್‌ ಸಿದ್ದಪ್ಪ ಕಂಬಳಿ ವೃತ್ತದ ಬಳಿ ತಡೆದ ಪೊಲೀಸರು, ಹಲವು ಕಾರ್ಯಕರ್ತರನ್ನು ವಶಕ್ಕೆ ಪಡೆದರು. ಈ ವೇಳೆ ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ತೀವ್ರ ವಾಗ್ವಾದ ನಡೆಯಿತು.

ಇದಕ್ಕೂ ಪೂರ್ವದಲ್ಲಿ ಡಾ. ಬಿ.ಆರ್‌. ಅಂಬೇಡ್ಕರ್‌ ವೃತ್ತದಲ್ಲಿ ಸಂವಿಧಾನದ 326ನೇ ವಿಧಿ ಓದುವ ಮೂಲಕ ಪ್ರತಿಭಟನೆಗೆ ಚಾಲನೆ ನೀಡಲಾಯಿತು. ಬಳಿಕ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಮಹಾನಗರ ಪಾಲಿಕೆ ಕಚೇರಿಯತ್ತ ಮೆರವಣಿಗೆ ಹೊರಟರು. ಮೆರವಣಿಗೆ ಮಹಾನಗರ ಪಾಲಿಕೆ ಕಚೇರಿ ಬಳಿಯ ಸರ್‌ ಸಿದ್ದಪ್ಪ ಕಂಬಳಿ ವೃತ್ತಕ್ಕೆ ತಲುಪುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹಾಗೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಪ್ರತಿಕೃತಿ ದಹನಕ್ಕೆ ಮುಂದಾದರು. ಈ ವೇಳೆ ಪೊಲೀಸರು ಮಧ್ಯಪ್ರವೇಶಿಸಿ ಕಾರ್ಯಕರ್ತರನ್ನು ತಡೆದರು. ಆಗ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆಯಿತು. ಪರಿಸ್ಥಿತಿ ತಿಳಿಗೊಳಿಸಲು ಹಲವು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು.

ಈ ವೇಳೆ ಪ್ರತಿಭಟನಾಕಾರರು ಮಾತನಾಡಿ, ಹಿಂದುಳಿದ ವರ್ಗಗಳು, ಆರ್ಥಿಕವಾಗಿ ಹಿಂದುಳಿದವರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಅಲ್ಪಸಂಖ್ಯಾತರ ಮತಗಳನ್ನು ಅಕ್ರಮವಾಗಿ ಕಬಳಿಸುವ ಪ್ರಯತ್ನ ನಡೆಯುತ್ತಿದೆ. ಮತದಾನದ ಹಕ್ಕಿನ ರಕ್ಷಣೆಗಾಗಿ ಮುಖ್ಯ ಚುನಾವಣಾ ಆಯುಕ್ತರು ತಕ್ಷಣ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಮಾಜಿ ಸಂಸದ ಐ.ಜಿ. ಸನದಿ, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಸದಾನಂದ ಡಂಗನವರ, ಹು-ಧಾ ನಗರ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ರಜತ್‌ ಉಳ್ಳಾಗಡ್ಡಿಮಠ, ಕೆಪಿಸಿಸಿ ಸದಸ್ಯ ಸತೀಶ ಮೆಹರವಾಡೆ, ದೊಡ್ಡರಾಮಪ್ಪ ದೊಡ್ಡಮನಿ, ಮೊಹಮ್ಮದ್‌ ಷರೀಫ್‌ ಗರಗದ, ಶಹಜಮಾನ್‌ ಮುಜಾಹಿದ್‌, ಎಂ.ಎಸ್‌. ಪಾಟೀಲ, ಅನ್ವರ್‌ ಮುಧೋಳ, ಪಾಲಿಕೆ ಸದಸ್ಯರಾದ ಸುವರ್ಣ ಕಲ್ಲಕುಂಟ್ಲ, ಸಾಧಿಕ್‌ ಯಕ್ಕುಂಡಿ, ಇಕ್ಬಾಲ್‌ ನವಲೂರ, ಸೆಂಥಿಲ್‌ ಕುಮಾರ್‌, ಚೇತನ್‌ ಹಿರೇಕೆರೂರ ಸೇರಿ ಹಲವರಿದ್ದರು.