ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಗಾಂಧಿ ಕುಟುಂಬವನ್ನು ಸಿಲುಕಿಸಲು ಪ್ರಧಾನಿ ನರೇಂದ್ರ ಮೋದಿ ಪಿತೂರಿ ನಡೆಸಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಗುರುವಾರ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿ, ಬಿಜೆಪಿ ಕಚೇರಿಗಳಿಗೆ ಮುತ್ತಿಗೆ ಹಾಕಲು ಯತ್ನಿಸಿದರು.
ಕನ್ನಡಪ್ರಭ ವಾರ್ತೆ ಹುಬ್ಬಳ್ಳಿ
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಗಾಂಧಿ ಕುಟುಂಬವನ್ನು ಸಿಲುಕಿಸಲು ಪ್ರಧಾನಿ ನರೇಂದ್ರ ಮೋದಿ ಪಿತೂರಿ ನಡೆಸಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಗುರುವಾರ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿ, ಬಿಜೆಪಿ ಕಚೇರಿಗಳಿಗೆ ಮುತ್ತಿಗೆ ಹಾಕಲು ಯತ್ನಿಸಿದರು.ಹುಬ್ಬಳ್ಳಿಯ ಅರವಿಂದ ನಗರದಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು, ಪ್ರಧಾನಿ ಮೋದಿ ಹಾಗೂ ಬಿಜೆಪಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕಾರವಾರ ರಸ್ತೆಯ ಕಾಂಗ್ರೆಸ್ ಕಚೇರಿಯಿಂದ ಬಿಜೆಪಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಪೊಲೀಸರು 50ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು, ಬಳಿಕ ಬಿಡುಗಡೆ ಮಾಡಿದರು.
ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಘಟಕದ ವತಿಯಿಂದ ಶಿರಸಿಯಲ್ಲಿ ಪ್ರತಿಭಟನೆ ನಡೆಸಲಾಯಿತು. ಕೊಪ್ಪಳದಲ್ಲಿ ನಗರದ ಹೆದ್ದಾರಿ ರಸ್ತೆಯಿಂದ ಬಿಜೆಪಿ ಕಚೇರಿವರೆಗೆ ಪಾದಯಾತ್ರೆಯಲ್ಲಿ ತೆರಳಿದ ಪ್ರತಿಭಟನಾಕಾರರು, ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದಾಗ ಪೊಲೀಸರು ಅವರನ್ನು ತಡೆದರು. ಇದೇ ವೇಳೆ, ಬೆಳಗಾವಿ, ಚಿಕ್ಕಮಗಳೂರು, ಕೋಲಾರ, ಶಿವಮೊಗ್ಗ, ಚಾಮರಾಜನಗರ, ವಿಜಯಪುರ, ಚಿತ್ರದುರ್ಗ, ಮಂಡ್ಯ, ಬೀದರ್‌ಗಳಲ್ಲೂ ಪ್ರತಿಭಟನೆ ನಡೆಯಿತು. ಕರ್ತವ್ಯದಲ್ಲಿದ್ದ ಎಎಸ್‌ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು:ಶಿವಮೊಗ್ಗದಲ್ಲಿ ಕಾಂಗ್ರೆಸ್ ಪ್ರತಿಭಟನೆ ವೇಳೆ ಕರ್ತವ್ಯ ನಿರತ ಮಹಿಳಾ ಎಎಸ್‌ಐಯ ಮಾಂಗಲ್ಯ ಸರವನ್ನೇ ಕಳ್ಳರು ಕದ್ದಿದ್ದಾರೆ. ಶಿವಮೊಗ್ಗದಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಹಮ್ಮಿಕೊಂಡಿದ್ದ ಪ್ರತಿಭಟನೆ ಹಿನ್ನೆಲೆಯಲ್ಲಿ ಶಿವಮೊಗ್ಗ ಬಿಜೆಪಿ ಕಚೇರಿಗೆ ಬಂದೋಬಸ್ತ್‌ಗೆಂದು ಎಎಸ್‌ಐ ಅಮೃತಾಬಾಯಿ ಬಂದಿದ್ದರು. ಪ್ರತಿಭಟನೆ ವೇಳೆ ಕಳ್ಳರು ಕೈಚಳಕ ತೋರಿದ್ದು, ಅವರ ಕತ್ತಲ್ಲಿದ್ದ 60 ಗ್ರಾಂ ಮಾಂಗಲ್ಯದ ಸರವನ್ನು ಕಳವು ಮಾಡಿದ್ದಾರೆ. ಪೊಲೀಸ್ ಅಧಿಕಾರಿ ಎಂಬ ಭಯವೂ ಇಲ್ಲದೆ ಕಳ್ಳರು ಕೃತ್ಯ ನಡೆಸಿದ್ದು, ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.ಕಾಂಗ್ರೆಸ್ ಸರ್ಕಾರದ ವಿರುದ್ಧವೇ ಘೋಷಣೆ:ಕಲಬುರಗಿಯಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ನಗರದ ಜಿಲ್ಲಾ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಿದಾಗ ಹಲವರನ್ನು ಪೊಲೀಸರು ಬಂಧಿಸಿ, ನಂತರ ಬಿಡುಗಡೆ ಮಾಡಿದರು. ಇದಕ್ಕೂ ಮೊದಲು, ಪ್ರತಿಭಟನೆ ವೇಳೆ, ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗುವ ಭರದಲ್ಲಿ ಏನಿದು ರಾಜ್ಯ?, ಗೂಂಡಾ ರಾಜ್ಯ ಎಂದು ಕೂಗಿ, ತಮ್ಮ ಸರ್ಕಾರದ ವಿರುದ್ಧವೇ ಘೋಷಣೆ ಮೊಳಗಿಸಿದರು. ಬಳಿಕ ತಪ್ಪಿನ ಅರಿವಾಗಿ ಕೇಂದ್ರದ ವಿರುದ್ಧ ಘೋಷಣೆ ಕೂಗಿದರು.