ಆಪರೇಷನ್ ಗಜ ಹೆಸರಿನಲ್ಲಿ ಬೇಲೂರಿನಿಂದ ಮೂಡಿಗೆರೆ ಮಾರ್ಗವಾಗಿ ಭದ್ರಾ ಅಭಯಾರಣ್ಯಕ್ಕೆ ಕಾಡಾನೆಗಳನ್ನು ಸ್ಥಳಾಂತರಿಸುವ ಕಾರ್ಯಾಚರಣೆ ನಿಲ್ಲಿಸುವಂತೆ ಒತ್ತಾಯಿಸಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಮಂಗಳವಾರ ಬೃಹತ್ ಪ್ರತಿಭಟನೆ ನಡೆಸಿ ಮೂಡಿಗೆರೆ ಪಟ್ಟಣದ ಅರಣ್ಯ ಇಲಾಖೆ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.

ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು

ಆಪರೇಷನ್ ಗಜ ಹೆಸರಿನಲ್ಲಿ ಬೇಲೂರಿನಿಂದ ಮೂಡಿಗೆರೆ ಮಾರ್ಗವಾಗಿ ಭದ್ರಾ ಅಭಯಾರಣ್ಯಕ್ಕೆ ಕಾಡಾನೆಗಳನ್ನು ಸ್ಥಳಾಂತರಿಸುವ ಕಾರ್ಯಾಚರಣೆ ನಿಲ್ಲಿಸುವಂತೆ ಒತ್ತಾಯಿಸಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಮಂಗಳವಾರ ಬೃಹತ್ ಪ್ರತಿಭಟನೆ ನಡೆಸಿ ಮೂಡಿಗೆರೆ ಪಟ್ಟಣದ ಅರಣ್ಯ ಇಲಾಖೆ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.

ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಶಿವಲಿಂಗೇಗೌಡರ ಆದೇಶದಂತೆ 56 ಕಾಡಾನೆಗಳನ್ನು ಮಲೆನಾಡು ಭಾಗದ ಮೂಲಕ ಭದ್ರಾ ಅಭಯಾರಣ್ಯಕ್ಕೆ ಸ್ಥಳಾಂತರಿಸಲು ಕಾರ್ಯಾಚರಣೆ ಆರಂಭಿಸಲಾಗಿದೆ. ಕಳೆದ ಎರಡು ದಿನಗಳಿಂದ ನಡೆಯುತ್ತಿರುವ ಈ ಕಾರ್ಯಾಚರಣೆಯಿಂದ ಮಲೆನಾಡಿನ ಜನರು ಹಾಗೂ ರೈತಾಪಿ ವರ್ಗದಲ್ಲಿ ಆತಂಕ ಉಂಟಾಗಿದೆ. ಈಗಾಗಲೇ ಆನೆಗಳು ಮಲೆನಾಡಿನ ಮಧ್ಯಭಾಗಕ್ಕೆ ಬಂದಿರುವುದರಿಂದ ಜನರ ಆತಂಕ ಮತ್ತಷ್ಟು ಹೆಚ್ಚಾಗಿದೆ.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಬ್ಬಾರಾಯಗೌಡ ಅವರ ನೇತೃತ್ವದಲ್ಲಿ ಮೂಡಿಗೆರೆ ಕ್ಷೇತ್ರದ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಪಕ್ಷದ ಕಚೇರಿಯಿಂದ ಮೆರವಣಿಗೆ ನಡೆಸಿ, ಅರಣ್ಯ ಇಲಾಖೆ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಕಚೇರಿಗೆ ತೆರಳಿದರು. ಈ ವೇಳೆ ಕಚೇರಿಯೊಳಗೆ ನುಗ್ಗಲು ಯತ್ನಿಸಿದ ಕಾರ್ಯಕರ್ತರನ್ನು ಪೊಲೀಸರು ತಡೆದರು. ಇದರಿಂದ ಆಕ್ರೋಶಗೊಂಡ ಪ್ರತಿಭಟನಾಕಾರರು ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಕಚೇರಿ ಎದುರಿನ ರಸ್ತೆಯಲ್ಲೇ ಧರಣಿ ಕುಳಿತರು.

ತಮ್ಮದೇ ಸರ್ಕಾರದ ಆಡಳಿತದಲ್ಲಿ ನಡೆಯುತ್ತಿರುವ ಕಾರ್ಯಾಚರಣೆಗೆ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರಿಂದಲೇ ವಿರೋಧ ವ್ಯಕ್ತವಾಗಿರುವುದು ಗಮನ ಸೆಳೆಯಿತು. ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರಿಗೆ ಯಾವುದೇ ಮಾಹಿತಿ ನೀಡದೆ ಆನೆಗಳ ಸ್ಥಳಾಂತರ ಕಾರ್ಯಾಚರಣೆ ಆರಂಭಿಸಿರುವುದು ಎಷ್ಟು ಸರಿ ಎಂದು ಅರಣ್ಯ ಇಲಾಖೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಸೋಮವಾರ ನಡೆದ ಸಾರ್ವಜನಿಕ ಸಭೆಯ ಬಳಿಕ ಸದ್ಯಕ್ಕೆ ಆಪರೇಷನ್ ಗಜ ಕಾರ್ಯಾಚರಣೆ ಸ್ಥಗಿತಗೊಂಡಿದ್ದು, ಯಾವುದೇ ಕಾರಣಕ್ಕೂ ಅದನ್ನು ಪುನರಾರಂಭಿಸಬಾರದು ಎಂದು ಒತ್ತಾಯಿಸಿದರು. ಬಳಿಕ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಇಂದು ಮೂಡಿಗೆರೆ ಬಂದ್‌ಗೆ ಕರೆ: ಆಪರೇಷನ್ ಗಜ ಕಾರ್ಯಾಚರಣೆಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಿ, ಸ್ಥಳಾಂತರಕ್ಕೆ ಕರೆತಂದಿರುವ ಆನೆಗಳನ್ನು ಅವುಗಳ ಮೂಲ ನೆಲೆಗೆ ಹಿಮ್ಮೆಟ್ಟಿಸಬೇಕೆಂದು ಒತ್ತಾಯಿಸಿ ಸರ್ವಪಕ್ಷಗಳ ಮುಖಂಡರು ಸಭೆ ನಡೆಸಿದ್ದಾರೆ. ಸಭೆಯಲ್ಲಿ ಬುಧವಾರ ಮೂಡಿಗೆರೆ ಬಂದ್‌ಗೆ ಕರೆ ನೀಡಲು ನಿರ್ಧರಿಸಲಾಗಿದ್ದು, ಆನೆಗಳನ್ನು ಭದ್ರಾ ಅಭಯಾರಣ್ಯಕ್ಕೆ ಸ್ಥಳಾಂತರಿಸುವ ಬದಲು ಅವುಗಳನ್ನು ಮೂಲ ನೆಲೆಗೆ ಮರಳಿಸುವಂತೆ ಆಗ್ರಹಿಸಿದ್ದಾರೆ.