ಸಾರಾಂಶ
ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಶಾಸಕ ಪುಟ್ಟರಂಗಶೆಟ್ಟಿ ಮನವಿ
ಕನ್ನಡಪ್ರಭ ವಾರ್ತೆ ಚಾಮರಾಜನಗರಮುಡಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿವೇಶನ ಪಡೆದಿದ್ದಾರೆ ಎಂಬ ಬಿಜೆಪಿ ಆರೋಪದ ಬಗ್ಗೆ ಜನರಿಗೆ ಸತ್ಯಾಂಶ ತಿಳಿಸಲು ಆ.೯ರಂದು ಮೈಸೂರಿನಲ್ಲಿ ಕಾಂಗ್ರೆಸ್ ಬೃಹತ್ ಜನಾಂದೋಲನ ಸಮಾವೇಶ ನಡೆಯಲಿದ್ದು, ಅಂದು ಜಿಲ್ಲೆಯ ಪಕ್ಷದ ಕಾರ್ಯಕರ್ತರು, ಮುಖಂಡರು, ಚುನಾಯಿತ ಜನಪ್ರತಿನಿಧಿಗಳು, ವಿವಿಧ ಘಟಕಗಳ ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಶಾಸಕ ಸಿ.ಪುಟ್ಟರಂಗಶೆಟ್ಟಿ ಮನವಿ ಮಾಡಿದರು.ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಮೈಸೂರು ಜನಾಂದೋಲನ ಸಮಾವೇಶ ಕುರಿತು ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಿರುವ ಬೃಹತ್ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಸಚಿವ ಸಂಪುಟದ ಸಚಿವರು ಭಾಗವಹಿಸುವರು.
ಬಿಜೆಪಿ ಆರೋಪಿಸಿರುವ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಮಾವೇಶದಲ್ಲಿ ಸಿದ್ದರಾಮಯ್ಯ ಅವರು ಎಳೆಎಳೆಯಾಗಿ ಜನರ ಮುಂದೆ ಸತ್ಯಾಂಶ ಬಿಚ್ಚಿಡಲಿದ್ದಾರೆ. ಬಸವರಾಜ ಬೊಮ್ಮಾಯಿ ಅವರ ಸರ್ಕಾರದ ಅವಧಿಯಲ್ಲೇ ಸಿದ್ದರಾಮಯ್ಯ ಅವರಿಗೆ ಮುಡಾದಲ್ಲಿ ೫೦;೫೦ ಅನುಪಾತದಲ್ಲಿ ಮೂರುವರೆ ಎಕರೆ ಜಮೀನು ನೀಡಲಾಗಿದೆ. ಹೀಗಿದ್ದರೂ ಬಿಜೆಪಿಯವರು ಇದನ್ನೇ ನೆಪವಾಗಿಟ್ಟುಕೊಂಡು ಪಾದಯಾತ್ರೆಗೆ ಮುಂದಾಗಿರುವುದು ಸರಿಯಲ್ಲ. ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸುವ ಬಿಜೆಪಿಯವರ ಪ್ರಯತ್ನ ಫಲಿಸುವುದಿಲ್ಲ ಎಂದರು.ಅ.೧೦ರಂದು ಆಲೂರಿನಲ್ಲಿ ನಡೆಯುವ ಬಿ.ರಾಚಯ್ಯ ಸ್ಮಾರಕ ಉದ್ಘಾಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸಲಿದ್ದು, ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು, ಚುನಾಯಿತ ಜನಪ್ರತಿನಿಧಿಗಳು ಭಾಗವಹಿಸಬೇಕು ಎಂದರು.ಜಿಲ್ಲಾ ಕಾಂಗ್ರೆಸ್ ಸಮಿತಿ ಜಿಲ್ಲಾಧ್ಯಕ್ಷ ಪಿ.ಮರಿಸ್ವಾಮಿ ಮಾತನಾಡಿ, ಬಿಜೆಪಿಯವರು ಮುಡಾ ಮುಂದಿಟ್ಟುಕೊಂಡು, ಸಿದ್ದರಾಮಯ್ಯ ಅವರನ್ನು ಇಕ್ಕಟ್ಟಿಗೆ ಸಿಲುಕಿಸುವ ಪ್ರಯತ್ನ ಮಾಡುತ್ತಿದ್ದಾರೆ. ಅವರಿಂದ ಇದು ಅಸಾಧ್ಯ. ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿಯವರಿಗೆ ತಕ್ಕ ಉತ್ತರ ನೀಡಲಿದ್ದಾರೆ ಎಂದರು.ಉಪಮುಖ್ಯಮಂತ್ರಿ ಡಿಕೆಶಿ ಅವರ ನೇತೃತ್ವದಲ್ಲಿ ಈವರಗೆ ನಡೆದಿರುವ ಕಾಂಗ್ರೆಸ್ ಜನಾಂದೋಲನ ಸಮಾವೇಶಗಳು ಅಭೂತಪೂರ್ವ ಯಶಸ್ಸುಕಂಡಿವೆ. ಆ.೯ರಂದು ಮೈಸೂರಿನಲ್ಲಿ ಜರುಗುವ ಜನಾಂದೋಲನ ಸಮಾವೇಶದಲ್ಲಿ ತಾವು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಈ ಸಮಾವೇಶ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.ಚುಡಾ ಅಧ್ಯಕ್ಷ ಮಹಮದ್ ಅಸ್ಗರ್ (ಮುನ್ನ), ಚಾಮರಾಜನಗರ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎ.ಎಸ್.ಗುರುಸ್ವಾಮಿ ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕ ಅಧ್ಯಕ್ಷೆ ಲತಾಜತ್ತಿ, ರಾಜ್ಯ ಮಹಿಳಾ ಕಾರ್ಯದರ್ಶಿ ಪದ್ಮಪುರುಷೋತ್ತಮ್, ಜಿಲ್ಲಾಪ್ರಧಾನ ಕಾರ್ಯದರ್ಶಿಗಳಾದ ಚಿಕ್ಕಮಹಾದೇವ್, ಆರ್.ಮಹದೇವ್, ಒಬಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಎ.ಮಹದೇವಶೆಟ್ಟಿ, ಎಸ್ಟಿ ಮೋರ್ಚಾ ರಾಜ್ಯಪ್ರಧಾನ ಕಾರ್ಯದರ್ಶಿ ಪು.ಶ್ರೀನಿವಾಸನಾಯಕ, ಜಿಪಂ ಮಾಜಿ ಸದಸ್ಯರು, ನಗರಸಭೆ ಸದಸ್ಯರು, ಮುಖಂಡರು ಹಾಜರಿದ್ದರು.6ಸಿಎಚ್ಎನ್3ಚಾಮರಾಜನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಮೈಸೂರು ಜನಾಂದೋಲನ ಸಮಾವೇಶ ಕುರಿತು ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಶಾಸಕ ಸಿ.ಪುಟ್ಟರಂಗಶೆಟ್ಟಿ ಮಾತನಾಡಿದರು.