ಸಾರಾಂಶ
ಕನ್ನಡಪ್ರಭ ವಾರ್ತೆ ಕುಶಾಲನಗರ
ಕೊಡಗು ಜಿಲ್ಲೆಯಲ್ಲಿ ಇಬ್ಬರು ಕಾಂಗ್ರೆಸ್ ಶಾಸಕರೊಂದಿಗೆ ಕಾಂಗ್ರೆಸ್ ಸಂಸದರು ಕೂಡ ಜೊತೆಯಾದಲ್ಲಿ ಜಿಲ್ಲೆ ಮತ್ತಷ್ಟು ಅಭಿವೃದ್ಧಿ ಹೊಂದಲು ಅನುಕೂಲವಾಗಲಿದೆ ಎಂದು ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಅಭಿಪ್ರಾಯಪಟ್ಟಿದ್ದಾರೆ.ಕುಶಾಲನಗರದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹೆಚ್ಚಿನ ಸಂಖ್ಯೆಯಲ್ಲಿ ಸಂಖ್ಯೆಯಲ್ಲಿ ಕಾಂಗ್ರೆಸ್ ಸೇರ್ಪಡೆಯಾಗುತ್ತಿರುವುದು ಸ್ವಾಗತಾರ್ಹ. ಇದರಿಂದ ಪಕ್ಷ ಮತ್ತಷ್ಟು ಬಲಿಷ್ಠವಾಗಲಿದೆ. ಯಾವುದೇ ಕಾರಣಕ್ಕೂ ಕಾರ್ಯಕರ್ತರು, ಮುಖಂಡರು ಪಕ್ಷದಿಂದ ಹೊರಹೋಗಲು ಅವಕಾಶ ನೀಡುವುದಿಲ್ಲ ಎಂದರು
ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಲು ಎಲ್ಲರೂ ಕಾರ್ಯೋನ್ಮುಖರಾಗಬೇಕಿದೆ. ಜಿಲ್ಲೆಗೆ ರೈಲು ಮಾರ್ಗ ತರುವ ನಿಟ್ಟಿನಲ್ಲಿ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲವು ಅಗತ್ಯವಿದೆ ಎಂದರು.ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಮಾತನಾಡಿ, ಸಮಸ್ಯೆಗಳಿದ್ದಲ್ಲಿ ಪಕ್ಷದೊಳಗಡೆ ಅದನ್ನು ಬಗೆಹರಿಸುವ ಪ್ರಯತ್ನ ಮಾಡಬೇಕಿದೆ. ಮುಕ್ತ ಮನಸ್ಸಿನಿಂದ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಾಗ ಸ್ಥಾನಮಾನಗಳು ಅರಸಿ ಬರಲಿವೆ. ಸರ್ಕಾರದ ಗ್ಯಾರೆಂಟಿ ಯೋಜನೆಗಳ ಬಗ್ಗೆ ಮನೆಮನೆಗೆ ತಿಳಿಸುವ ಮೂಲಕ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತರಲು ಎಲ್ಲರ ಸಹಕಾರ ಅಗತ್ಯ ಎಂದರು.
ಕೊಡಗು-ಮೈಸೂರು ಲೋಕಸಭಾ ಕ್ಷೇತ್ರ ಅಭ್ಯರ್ಥಿ ಲಕ್ಷ್ಮಣ್ ಗೌಡ ಮಾತನಾಡಿ, ಪಕ್ಷಕ್ಕಾಗಿ ದುಡಿದ ಓರ್ವ ಸಾಮಾನ್ಯ ಕಾರ್ಯಕರ್ತನನ್ನು ಗುರುತಿಸಿ ಪಕ್ಷ ಟಿಕೆಟ್ ನೀಡಿದೆ. ಈ ಬಾರಿ ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಒಕ್ಕೂಟದ ಅಧಿಕಾರಕ್ಕೆ ಬರಲಿದ್ದು ಇಡೀ ದೇಶ ಕಾಂಗ್ರೆಸ್ ಮಯವಾಗಲಿದೆ ಎಂದು ಭವಿಷ್ಯ ನುಡಿದರು.ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ.ಶಶಿಧರ್ ಹಾಗೂ ನಗರ ಕಾಂಗ್ರೆಸ್ ಅಧ್ಯಕ್ಷ ಪ್ರಮೋದ್ ಮುತ್ತಪ್ಪ ಮಾತನಾಡಿದರು.
ಈ ಸಂದರ್ಭ ಹಲವು ಮಂದಿ ಯುವಕರು ಕಾಂಗ್ರೆಸ್ ಸೇರ್ಪಡೆಗೊಂಡರು.ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ, ಕೆಪಿಸಿಸಿ ಸದಸ್ಯರಾದ ಮಂಜುನಾಥ್ ಗುಂಡುರಾವ್, ನಟೇಶ್ ಗೌಡ, ವಿವಿಧ ಘಟಕಗಳ ಪದಾಧಿಕಾರಿಗಳಾದ ಶೇಖ್ ಖಲೀಮುಲ್ಲಾ, ಟಿ.ಪಿ.ಹಮೀದ್, ಜೋಸೆಫ್ ವಿಕ್ಟರ್ ಸೋನ್ಸ್, ಶಿವಶಂಕರ್, ಕಿರಣ್ ಕುಮಾರ್, ಎಂ.ಕೆ.ದಿನೇಶ್, ಕೆ.ಕೆ.ಮಂಜುನಾಥ್ ಕುಮಾರ್ ಮತ್ತಿತರರು ಇದ್ದರು.