ಕೋಮು ಶಕ್ತಿಗಳು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ವೇದಿಕೆಯನ್ನು ಶುದ್ಧೀಕರಣ ಮಾಡಿದ್ದಾರೆ. ಈ ಮೂಲಕ ತಮ್ಮ ಮನಸ್ಥಿತಿಯನ್ನು ತೋರಿಸಿಕೊಟ್ಟಿದ್ದಾರೆ.

ಹುಬ್ಬಳ್ಳಿ:

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ವೇದಿಕೆ ಶುದ್ಧೀಕರಣ ಮಾಡಿರುವುದನ್ನು ಖಂಡಿಸಿ ಹು-ಧಾ ಮಹಾನಗರ ಜಿಲ್ಲಾ ಕಾಂಗ್ರೆಸ್‌ ಪ್ರಚಾರ ಸಮಿತಿ ಪದಾಧಿಕಾರಿಗಳು ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.

ಇಲ್ಲಿಯ ಸ್ಟೇಷನ್‌ ರಸ್ತೆಯ ಡಾ. ಬಿ.ಆರ್‌. ಅಂಬೇಡ್ಕರ್‌ ವೃತ್ತದಲ್ಲಿ ಸಮಾವೇಶಗೊಂಡ ಪ್ರತಿಭಟನಾಕಾರರು, ಕೇಂದ್ರ ಸರ್ಕಾರ ಹಾಗೂ ಹಿಂದೂ ಸಂಘಟನೆಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಪ್ರಚಾರ ಸಮಿತಿ ಅಧ್ಯಕ್ಷ ಮೋಹನ ಹಿರೇಮನಿ ಮಾತನಾಡಿ, ಕೋಮು ಶಕ್ತಿಗಳು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ವೇದಿಕೆಯನ್ನು ಶುದ್ಧೀಕರಣ ಮಾಡಿದ್ದಾರೆ. ಈ ಮೂಲಕ ತಮ್ಮ ಮನಸ್ಥಿತಿಯನ್ನು ತೋರಿಸಿಕೊಟ್ಟಿದ್ದಾರೆ ಎಂದು ವ್ಯಂಗ್ಯವಾಡಿದರು.

ಈ ಕುರಿತು ಧ್ವನಿ ಎತ್ತಿದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ವಿರುದ್ಧ ದುರುದ್ದೇಶ ಪೂರಿತವಾಗಿ ಪ್ರಕರಣ ದಾಖಲಿಸಿರುವುದು ಹಾಗೂ ಸಚಿವ ಸತೀಶ ಜಾರಕಿಹೊಳಿ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿರುವುದು ಖಂಡನೀಯ ಎಂದು ಹರಿಹಾಯ್ದರು.

ಪ್ರಮುಖರಾದ ಗಂಗಾಧರ ದೊಡವಾಡ, ಗಣೇಶ ದೊಡ್ಡಮನಿ, ಮಾರುತಿ ಬಾರಕೇರ, ಸಂತೋಷ ಜಕ್ಕಪ್ಪನವರ, ದಶರಥ ವಾಲಿ, ಮೋಹನ ಗೌಡರ, ಶಿವಾನಂದ ಮುತ್ತಣ್ಣವರ, ಪುಷ್ಪಾ ಅರಳಿಕಟ್ಟಿ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.