ಕನ್ನಡಪ್ರಭ ವಾರ್ತೆ ಮಂಡ್ಯ

ದೆಹಲಿಯಲ್ಲಿ ನಡೆಯುತ್ತಿರುವ ಹೋರಾಟದ ಭಾಗವಾಗಿ ಯುವ ಕಾಂಗ್ರೆಸ್ ಹೆಸರಿನಲ್ಲಿ ವಿದ್ಯಾರ್ಥಿಗಳನ್ನು ಕರೆತಂದು ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ಮಾಡಿದ ಶಾಸಕರ ವಿರುದ್ಧ ಬಿಜೆಪಿ ಕಾರ್ಯಕರ್ತರು ಜಿಲ್ಲಾಧಿಕಾರಿಗೆ ದೂರು ಸಲ್ಲಿಸಿದರು.

ಜಿಲ್ಲಾಧಿಕಾರಿ ಕಚೇರಿಗೆ ತೆರಳಿದ ಬಿಜೆಪಿ ಕಾರ್ಯಕರ್ತರು, ಯುವ ಕಾಂಗ್ರೆಸ್ ಹೆಸರಿನಲ್ಲಿ ಕಾರ್ಯಕರ್ತರು ಹೋರಾಟ ಮಾಡಬೇಕೇ ಹೊರತು, ವಿದ್ಯಾರ್ಥಿಗಳನ್ನು ಕರೆತಂದು ಪ್ರತಿಭಟನೆ ಮಾಡಿಸಿರುವುದು ಶಾಸಕರ ಸರಿಯಾದ ಕ್ರಮವಲ್ಲ ಎಂದು ಆರೋಪಿಸಿದ್ದಾರೆ.

ವಿದ್ಯಾರ್ಥಿಗಳ ಬೇಡಿಕೆಗಳಿದ್ದಲ್ಲಿ ವಿದ್ಯಾರ್ಥಿ ಸಂಘಟನೆಗಳೇ ಚಳವಳಿ ಮಾಡುತ್ತಾರೆ. ಆದರೆ, ಶಾಸಕರು ಯುವ ಕಾಂಗ್ರೆಸ್ ಹೆಸರಿನಲ್ಲಿ ವಿದ್ಯಾರ್ಥಿಗಳನ್ನು ರಾಜಕೀಯಕ್ಕೆ ದುರುಪಯೋಗಪಡಿಸಿಕೊಂಡಿದ್ದಾರೆ. ಎನ್‌ಡಿಎ ಸರ್ಕಾರದ ವಿರುದ್ಧ ಪ್ರಚೋದನೆ ನೀಡುತ್ತಿದ್ದಾರೆ ಎಂದು ದೂರಿದರು.

ರಾಜ್ಯಾದ್ಯಂತ ಕಾಂಗ್ರೆಸ್ ಶಾಸಕರು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ದೂರವಾಣಿ ಕರೆ ಮಾಡಿ ಬೃಹತ್ ಹೋರಾಟ ಮಾಡುತ್ತಿದ್ದು, ವಿದ್ಯಾರ್ಥಿಗಳನ್ನು ಕಳುಹಿಸುವಂತೆ ಒತ್ತಡ ಹೇರುತ್ತಿದ್ದಾರೆ. ಇದಕ್ಕೆ ಹಲವಾರು ನಿದರ್ಶನಗಳೂ ಇವೆ ಎಂದು ಆರೋಪಿಸಿದರು.


ಧಾರವಾಡದಲ್ಲಿ ವಿದ್ಯಾರ್ಥಿಗಳು ಉದೋಗಕ್ಕಾಗಿ ಪ್ರತಿಭಟನೆ ಮಾಡಿದಾಗ ಅವರ ಮೇಲೆ ಹಲ್ಲೆ ನಡೆಸಿದ್ದು ಇದೇ ಕಾಂಗ್ರೆಸ್ ಸರ್ಕಾರ. ರೈತರು ಪ್ರತಿಭಟನೆ ನಡೆಸಿದಾಗ ಅವರ ಮೇಲೆ ಲಾಠಿ ಪ್ರಹಾರ ಮಾಡಿದ್ದೂ ಇದೇ ಸರ್ಕಾರ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನೀಟ್ ಪರೀಕ್ಷೆಯಲ್ಲಿ ಅಕ್ರಮ ಮಾಡಿರುವವರನ್ನು ಈಗಾಗಲೇ ಬಂಧಿಸಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಅಂತಹವನ್ನು ಯಾವುದೇ ಕಾರಣಕ್ಕೂ ಬಿಡುವ ಪ್ರಶ್ನೆಯೇ ಇಲ್ಲ ಎಂದು ಪ್ರಧಾನಿ ನರೇಂದ್ರ ಮೋದಿಯವರು ಸ್ಪಷ್ಟಪಡಿಸಿದ್ದಾರೆ. ಆದರೂ ಕಾಂಗ್ರೆಸ್ ಪಕ್ಷ ವಿದ್ಯಾರ್ಥಿಗಳನ್ನು ಮುಂದಿಟ್ಟುಕೊಂಡು ಇಲ್ಲದ ಗೊಂದಲ ಸೃಷ್ಟಿಸಲು ಮುಂದಾಗಿದೆ ಎಂದು ದೂರಿದರು.

ಮುಖಂಡರಾದ ಹೊಸಹಳ್ಳಿ ಶಿವು, ಯಲ್ಲೇಗೌಡ, ನಾಗರಾಜು, ಆನಂದ್, ಶಿವಕುಮಾರ, ವಿನೋಬಾ, ಶಿವಲಿಂಗಯ್ಯ ಸೇರಿದಂತೆ ಇತರರಿದ್ದರು.

ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳು ಪ್ರಾಂಶುಪಾಲರ ವಿರುದ್ಧ ಕ್ರಮಕ್ಕಾಗಿ ದೂರು

ಮಂಡ್ಯ:ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಯುವ ಕಾಂಗ್ರೆಸ್ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ನಗರದ ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಲು ಅವಕಾಶ ಮಾಡಿಕೊಟ್ಟ ಪ್ರಾಂಶುಪಾಲರುಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಶಿಕ್ಷಣ ಇಲಾಖೆ ಆಯುಕ್ತರಿಗೆ ನಗರಸಭೆ ಮಾಜಿ ಸದಸ್ಯ ಶಿವಕುಮಾರ್ ದೂರು ನೀಡಿದ್ದಾರೆ.ಜುಲೈ 22ರಂದು ನಗರದಲ್ಲಿ ಶಾಸಕ ಪಿ.ರವಿಕುಮಾರ್ ನೇತೃತ್ವದಲ್ಲಿ ಯುವ ಕಾಂಗ್ರೆಸ್ ನಡೆಸಿದ ಪ್ರತಿಭಟನೆ ವೇಳೆ ದೇಶದ ಪ್ರಧಾನಿ ಹಾಗೂ ಪೊಲೀಸರ ವಿರುದ್ಧ ಟೀಕೆಗಳನ್ನು ಮಾಡಿ ವಿದ್ಯಾರ್ಥಿಗಳ ಮನಸ್ಸನ್ನು ಹಾಳು ಮಾಡಲಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ನಗರದ ಮಹಿಳಾ ಕಾಲೇಜು, ಎಐಟಿ, ಎಕ್ಸ್ ಮುನ್ಸಿಪಲ್ ಕಾಲೇಜು, ಅಭಿನವ ಬಾರಿ ಪದವಿ ಪೂರ್ವ ಕಾಲೇಜು ಮತ್ತು ಇತರೆ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಲು ಕಾರಣರಾಗಿರುವ ಪ್ರಾಂಶುಪಾಲರುಗಳ ವಿರುದ್ಧ ಕೂಡಲೇ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಆಯುಕ್ತರಿಗೆ ನೀಡಿರುವ ದೂರಿನಲ್ಲಿ ಒತ್ತಾಯಿಸಿದ್ದಾರೆ.