ಸಾರಾಂಶ
ಹಾವೇರಿ: ಅಗತ್ಯ ವಸ್ತುಗಳ ಬೆಲೆ ಏರಿಕೆ ಹಾಗೂ ಜನವಿರೋಧಿ ನೀತಿ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಮೇ 1ರಂದು ಕಾಂಗ್ರೆಸ್‌ನಿಂದ ಹುಬ್ಬಳ್ಳಿಯಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಜಿಲ್ಲೆಯಿಂದ 10 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದು ವಿಧಾನಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ತಿಳಿಸಿದರು.ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮೇ 1ರಂದು ಮಧ್ಯಾಹ್ನ 3 ಗಂಟೆಗೆ ಹುಬ್ಬಳ್ಳಿಯ ಗಿರಣಿ ಚಾಳ್ ಬಳಿ ಕೇಂದ್ರ ಸರ್ಕಾರದ ಬೆಲೆ ಏರಿಕೆ ಖಂಡಿಸಿ ಸಂವಿಧಾನ ಬಚಾವ್ ರ್ಯಾಲಿ ಹಮ್ಮಿಕೊಳ್ಳಲಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಸೇರಿದಂತೆ ರಾಜ್ಯ ನಾಯಕರು, ಸಚಿವರು, ಶಾಸಕರು ಪಾಲ್ಗೊಳ್ಳಲಿದ್ದಾರೆ. ಕೊಪ್ಪಳ, ಗದಗ, ಹಾವೇರಿ, ಹುಬ್ಬಳ್ಳಿ ಧಾರವಾಡ ಹೀಗೆ ನಾಲ್ಕು ಜಿಲ್ಲೆಗಳ ಕಾರ್ಯಕರ್ತರು, ಮುಖಂಡರು ಭಾಗವಹಿಲಿದ್ದಾರೆ. ಜಿಲ್ಲೆಯಲಿಂದ 10 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.
ಕೇಂದ್ರದ ವಿರುದ್ಧ ಜನಾಕ್ರೋಶ: ಬಿಜೆಪಿಯವರು ರಾಜ್ಯ ಸರ್ಕಾರದ ವಿರುದ್ಧ ಜನಾಕ್ರೋಶ ಯಾತ್ರೆ ಮಾಡಿದ್ದಾರೆ. ಆದರೆ, ನಿಜವಾಗಿ ಕೇಂದ್ರ ಸರ್ಕಾರದ ವಿರುದ್ಧವೇ ಬಿಜೆಪಿಯವರು ಪ್ರತಿಭಟನೆ ಮಾಡಬೇಕಿದೆ. ಕೇಂದ್ರ ಸರ್ಕಾರ ಅಧಿಕಾರಕ್ಕೆ ಬಂದು 12 ವರ್ಷ ಆದರೂ ಬೆಲೆ ಏರಿಕೆ ನಿಯಂತ್ರಣ ಮಾಡಲು ಆಗುತ್ತಿಲ್ಲ. ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ದುಪ್ಪಟ್ಟು ಆಗಿದೆ.ಬಿಜೆಪಿಯವರು ಜನರಿಗೆ ಮೋಸ ಮಾಡಿಕೊಂಡು ಬರುತ್ತಿದ್ದಾರೆ. ರಾಜ್ಯದ ಐವರು ಕೇಂದ್ರದಲ್ಲಿ ಪ್ರಭಾವಿ ಸಚಿವರಿದ್ದಾರೆ. ರಾಜ್ಯಕ್ಕೆ ಬರಬೇಕಾದ ಅನುದಾನ ತರುತ್ತಿಲ್ಲ. ಮೋದಿ ಎದುರು ಇವರು ಮಾತನಾಡುತ್ತಿಲ್ಲ. ಬಿಜೆಪಿ ಸಂಸದರೂ ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ, ತಾರತಮ್ಯದ ಬಗ್ಗೆ ಬಾಯಿ ಬಿಡುತ್ತಿಲ್ಲ. ಇಲ್ಲಿ ಕಾಂಗ್ರೆಸ್ ಸರ್ಕಾರ ಇರುವುದರಿಂದ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ. ಇದನ್ನೆಲ್ಲ ಮುಚ್ಚಿಕೊಳ್ಳಲು ನಮ್ಮ ಮೇಲೆ ಗೂಬೆ ಕೂರಿಸುವ ಪ್ರಯತ್ನವನ್ನು ಬಿಜೆಪಿಯವರು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಬಿಜೆಯ ಜನವಿರೋಧಿ ನೀತಿ ಹಾಗೂ ನಮ್ಮ ಸರ್ಕಾರ ಮಾಡಿರುನ ಜನಪರ ಯೋಜನೆಗಳ ಬಗ್ಗೆ ತಿಳಿಸುವ ಕೆಲಸವನ್ನು ಮಾಡಲಿದ್ದೇವೆ. ಮುಂದಿನ ಒಂದು ವರ್ಷ ಪಕ್ಷದ ಜಿಲ್ಲಾ, ತಾಲೂಕು, ಬ್ಲಾಕ್ ಕಮಿಟಿಗಳಿಗೆ ಹೆಚ್ಚಿನ ಅಧಿಕಾರ ನೀಡಿ ಪಕ್ಷ ಸಂಘಟನೆಗೆ ಒತ್ತು ನೀಡಲು ನಿರ್ಧರಿಸಲಾಗಿದೆ. ಮೇ 21ಕ್ಕೆ ಪಕ್ಷ ಅಧಿಕಾರಕ್ಕೆ ಬಂದು ಎರಡು ವರ್ಷಗಳಾಗುತ್ತಿದ್ದು, ನಮ್ಮ ಸರ್ಕಾರದ ಸಾಧನೆ ತಿಳಿಸಲು ಸಮಾವೇಶ ಆಯೋಜಿಸಲಾಗುತ್ತಿದೆ ಎಂದರು.ಹೆಸ್ಕಾಂ ಅಧ್ಯಕ್ಷ ಅಜೀಮ್‌ಪೀರ್ ಖಾದ್ರಿ, ಜಿಲ್ಲಾಧ್ಯಕ್ಷ ಸಂಜೀವಕುಮಾರ ನೀರಲಗಿ, ಪ್ರಮುಖರಾದ ಎಂ.ಎಂ. ಹಿರೇಮಠ, ಡಾ. ಸಂಜಯ ಡಾಂಗೆ, ನೂರಅಹ್ಮದ್ ಮಾಳಿ, ರಾಮಕೃಷ್ಣ, ಶಂಕರ ಮೆಹರವಾಡೆ, ಸಂಜಯಗಾಂಧಿ ಸಂಜೀವಣ್ಣನವರ, ರಾಘವೇಂದ್ರ ಬಾಸೂರ ಇತರರು ಇದ್ದರು.