ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ರಾಜಕೀಯ ದ್ವೇಷದಿಂದ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ಹಾಗೂ ವಿವಿಧ ಘಟಕಗಳ ವತಿಯಿಂದ ಸೋಮವಾರ ಕೊಪ್ಪಳ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.
ಕೊಪ್ಪಳ: ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ರಾಜಕೀಯ ದ್ವೇಷದಿಂದ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ಹಾಗೂ ವಿವಿಧ ಘಟಕಗಳ ವತಿಯಿಂದ ಸೋಮವಾರ ಕೊಪ್ಪಳ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.
ನಗರದ ಪ್ರವಾಸಿ ಮಂದಿರದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಅಶೋಕ ವೃತ್ತದ ವರೆಗೆ ಸಾಗಿತು. ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ, ರಾಹುಲ್ ಗಾಂಧಿ ವಿರುದ್ಧ ದಾಖಲಿಸಿರುವ ಎಫ್‌ಐಆರ್‌ನ್ನು ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿದರು.ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜ್ಯೋತಿ ಎಂ. ಗೊಂಡಬಾಳ ಮಾತನಾಡಿ, ಬಿಜೆಪಿ ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಅದನ್ನು ಪ್ರಶ್ನಿಸುವ ರಾಹುಲ್ ಗಾಂಧಿ ಅವರ ಧ್ವನಿ ಅಡಗಿಸಲು ಸುಳ್ಳು ಪ್ರಕರಣಗಳನ್ನು ದಾಖಲಿಸುವ ತಂತ್ರ ಅನುಸರಿಸುತ್ತಿದೆ ಎಂದು ಆರೋಪಿಸಿದರು. ರಾಹುಲ್ ಗಾಂಧಿ ಅವರು ಜನರ ಪರವಾಗಿ ಧ್ವನಿ ಎತ್ತುತ್ತಿದ್ದು, ಇಂತಹ ಬೆದರಿಕೆ ಹಾಗೂ ಪ್ರಕರಣಗಳಿಗೆ ಎಂದಿಗೂ ಜಗ್ಗುವುದಿಲ್ಲ. ಪ್ರಕರಣವನ್ನು ತಕ್ಷಣ ಹಿಂಪಡೆಯಬೇಕು ಎಂದು ಆಗ್ರಹಿಸಿದರು.
ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೃಷ್ಣ ಇಟ್ಟಂಗಿ ಮಾತನಾಡಿ, ಬಿಜೆಪಿ ಸರ್ಕಾರ ಅಧಿಕಾರ ಹಾಗೂ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡು ಪ್ರತಿಪಕ್ಷ ನಾಯಕರನ್ನು ಮೌನಗೊಳಿಸಲು ಯತ್ನಿಸುತ್ತಿದೆ ಎಂದು ದೂರಿದರು. ಸರ್ಕಾರದ ಭ್ರಷ್ಟಾಚಾರ ಹಾಗೂ ಜನವಿರೋಧಿ ನೀತಿಗಳನ್ನು ಪ್ರಶ್ನಿಸುವುದು ಪ್ರತಿಪಕ್ಷದ ಹಕ್ಕು. ಎಫ್‌ಐಆರ್ ಮೂಲಕ ರಾಹುಲ್ ಗಾಂಧಿ ಅವರ ಧ್ವನಿ ಅಡಗಿಸಲು ಸಾಧ್ಯವಿಲ್ಲ. ಪ್ರಕರಣ ಹಿಂಪಡೆಯದಿದ್ದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.ಪ್ರತಿಭಟನೆಯಲ್ಲಿ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾಟನ್ ಪಾಷಾ, ಎಸ್‌ಸಿ ಘಟಕದ ಅಧ್ಯಕ್ಷ ಗಾಳೆಪ್ಪ ಪೂಜಾರ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಮಂಜುನಾಥ ಜಿ. ಗೊಂಡಬಾಳ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಕ್ಬರ್ ಪಾಷಾ, ಮುಖಂಡರಾದ ಮುತ್ತುರಾಜ ಕುಷ್ಟಗಿ, ಮಾನ್ವಿ ಪಾಷಾ, ಮಲ್ಲು ಪೂಜಾರ, ಸಲೀಂ ಅಳವಂಡಿ, ಅಜ್ಜಪ್ಪಸ್ವಾಮಿ, ಶರಣಪ್ಪ ಚಂದನಕಟ್ಟಿ, ಗಂಗಮ್ಮ ಚಿಕೇನಕೊಪ್ಪ, ಚನ್ನಮ್ಮ, ಸೈಯದ್ ನಾಸಿರುದ್ದೀನ್, ಸಲೀಂ ಗೊಂಡಬಾಳ ಸೇರಿದಂತೆ ಕಾಂಗ್ರೆಸ್ ಮುಖಂಡರು, ಪದಾಧಿಕಾರಿಗಳು, ಯುವ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ನೂರಾರು ಬೆಂಬಲಿಗರು ಭಾಗವಹಿಸಿದ್ದರು.