ಕೇಂದ್ರದ ಬೆಲೆಯೇರಿಕೆ ನೀತಿ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ

| Published : Apr 11 2025, 12:33 AM IST

ಕೇಂದ್ರದ ಬೆಲೆಯೇರಿಕೆ ನೀತಿ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ
Share this Article
  • FB
  • TW
  • Linkdin
  • Email

ಸಾರಾಂಶ

ಬೆಲೆ ಏರಿಕೆಯನ್ನು ಖಂಡಿಸಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಅಮಿತ್‌ಶಾ ರವರ ಪ್ರತಿಕೃತಿಯನ್ನು ದಹಿಸಲಾಯಿತು.

ಕನ್ನಡಪ್ರಭ ವಾರ್ತೆ ಕನಕಪುರ

ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್, ಕಬ್ಬಿಣ, ಸೀಮೆಂಟ್ ಸೇರಿದಂತೆ ಶ್ರೀಸಾಮಾನ್ಯರು ಬಳಸುವ ದಿನನಿತ್ಯ ಬಳಕೆಯ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿರುವುದನ್ನು ಖಂಡಿಸಿ ತಾಲೂಕು ಯುವ ಕಾಂಗ್ರೆಸ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ನಗರದ ಮುಖ್ಯ ರಸ್ತೆಯಲ್ಲಿ ಮೆರವಣಿಗೆ ನಡೆಸಿ ಕೇಂದ್ರ ಸರ್ಕಾರದ ಬೆಲೆ ಏರಿಕೆ ವಿರುದ್ಧ ಘೋಷಣೆ ಕೂಗಿ ಚನ್ನಬಸಪ್ಪ ವೃತ್ತದಲ್ಲಿ ಸಮಾವೇಶಗೊಂಡ ಕಾರ್ಯಕರ್ತರನ್ನು ಉದ್ದೇಶಿಸಿ ರಾಜ್ಯ ಯುವ ಕಾಂಗ್ರೆಸ್ ಮಾಜಿ ಪ್ರಧಾನ ಕಾರ್ಯದರ್ಶಿ ಅನಿಲ್‌ ಕುಮಾರ್ ಮಾತನಾಡಿ, ಕೇಂದ್ರದ ಬೆಲೆ ಏರಿಕೆ ನೀತಿಯನ್ನು ಖಂಡಿಸಿ, ದೇಶದ ಕುಗ್ರಾಮಗಳಲ್ಲಿನ ಬಡವರಿಗಾಗಿ ಉಜ್ವಲ ಯೋಜನೆಯ ಗ್ಯಾಸ್ ದರಗಳನ್ನು ಏರಿಸುವುದರೊಂದಿಗೆ ಅವರ ಬದುಕಿಗೆ ಬರೆ ಎಳೆದಿದೆ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಬಡವರು ಮತ್ತು ಮಧ್ಯಮ ವರ್ಗದವರು ಬಳಸುವ ಕಬ್ಬಿಣ ಹಾಗೂ ಸೀಮೆಂಟ್ ಬೆಲೆ ಏರಿಕೆ ಮಾಡಿದ್ದಾರೆ

ಎಂದು ಆರೋಪಿಸಿದರು.

ರಾಜ್ಯದ ಬಿಜೆಪಿ ಮುಖಂಡರು ತಮ್ಮ ಕೇಂದ್ರದ ವ್ಯೆಪಲ್ಯಗಳನ್ನು ಮುಚ್ಚಿಡಲು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುತ್ತಿರುವುದಾಗಿ ಅಪಹಾಸ್ಯ ಮಾಡಿದರು, ಕೇಂದ್ರ ಸರ್ಕಾರ ಗ್ಯಾಸ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಹಿಂಪಡೆಯದಿದ್ದರೆ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಜನವಿರೋಧಿ ಆಡಳಿತದ ವಿರುದ್ಧ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದಾಗಿ ಎಚ್ಚರಿಕೆ ನೀಡಿದರು.

ತಾಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ಸಿದ್ದೇಗೌಡ (ದೀಪು) ಮಾತನಾಡಿ, ಕೇಂದ್ರ ಸರ್ಕಾರದ ಬೆಲೆ ಏರಿಕೆಗಳನ್ನು ಮರೆಮಾಚಿ ರಾಜ್ಯ ಸರ್ಕಾರದ ಮೇಲೆ ಜನರಲ್ಲಿ ತಪ್ಪು ಕಲ್ಪನೆ ಮೂಡಿಸಲು ರಾಜ್ಯ ಬಿಜೆಪಿ ನಾಯಕರು ಯತ್ನಿಸುತ್ತಿದ್ದಾರೆ, ಬಡವರು ಹಾಗೂ ಮಧ್ಯಮ ವರ್ಗದವರು ದಿನನಿತ್ಯ ಬಳಸುವ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಿಂದ ಬಿಜೆಪಿಗರ ಬಣ್ಣ ಬಯಲಾಗಿದೆ, ರಾಜ್ಯ ಸರ್ಕಾರ ಬಡವರ ಪರ ಕಾರ್ಯಕ್ರಮಗಳನ್ನು ಜಾರಿಗೆ ತಂದಿರುವುದನ್ನು ಸಹಿಸದ ಬಿಜೆಪಿ ವಿರುದ್ಧ ಮುಂದಿನ ದಿನಗಳಲ್ಲಿ ಅವರ ಕೇಂದ್ರ ಸರ್ಕಾರದ ಜನವಿರೋಧಿ ಆಡಳಿತದ ವಿರುದ್ಧ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

ಈ ವೇಳೆ ಬೆಲೆ ಏರಿಕೆಯನ್ನು ಖಂಡಿಸಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಅಮಿತ್‌ಶಾ ರವರ ಪ್ರತಿಕೃತಿಯನ್ನು ದಹಿಸಲಾಯಿತು.

ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಕೆ.ಎನ್ ನಾಗೇಶ್, ಜಿಲ್ಲಾ ಮಾಜಿ ಉಪಾಧ್ಯಕ್ಷ ನಾಜೀರ್ ಅಲಿ ಖಾನ್, ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ರಿಜ್ವಾನ್, ಕನಕಪುರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಶಿವಕುಮಾರ್, ಸಾತನೂರು ಯುವ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ರುದ್ರೇಶ್, ಯುವ ಕಾಂಗ್ರೆಸ್ ಮುಖಂಡರಾದ ಎಂ.ವಿನೋದ್, ಚಂದ್ರು, ಮಂಜು, ಮುತ್ತುರಾಜ್, ಕಿರಣ್, ಅರ್ಜುನ್, ಚೇತನ್, ಸಲೀಂ ಮಲ್ಲಿಕ್, ಸಾಕೀಬ್ ಸೇರಿದಂತೆ ಪಕ್ಷದ ಹಲವು ಮುಖಂಡರು,ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.