ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

| Published : Aug 18 2024, 01:52 AM IST

ಸಾರಾಂಶ

ಚಿಕ್ಕಮಗಳೂರು, ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅವಕಾಶ ನೀಡಿರುವುದನ್ನು ವಿರೋಧಿಸಿ ಶನಿವಾರ ನಗರದ ಹನುಮಂತಪ್ಪ ವೃತ್ತದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿ ರಾಜ್ಯಪಾಲರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ನಗರದ ತಾಲೂಕು ಕಚೇರಿ ಆವರಣದಿಂದ ಪ್ರತಿಭಟನಾ ಮೆರವಣಿಗೆ

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅವಕಾಶ ನೀಡಿರುವುದನ್ನು ವಿರೋಧಿಸಿ ಶನಿವಾರ ನಗರದ ಹನುಮಂತಪ್ಪ ವೃತ್ತದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿ ರಾಜ್ಯಪಾಲರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ನಗರದ ತಾಲೂಕು ಕಚೇರಿ ಆವರಣದಿಂದ ಪ್ರತಿಭಟನಾ ಮೆರವಣಿಗೆಯಲ್ಲಿ ಹನುಮಂತಪ್ಪ ವೃತ್ತಕ್ಕೆ ಆಗಮಿಸಿದ ಪ್ರತಿಭಟನಕಾರರು, ರಾಜ್ಯ ಪಾಲರು, ಬಿಜೆಪಿ ರಾಜ್ಯ ನಾಯಕರು ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಅಸಮಾಧಾನ ವ್ಯಕ್ತಪಡಿಸಿದರು. ಈ ವೇಳೆ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಪಿ.ಮಂಜೇಗೌಡ, ರಾಜ್ಯಪಾಲರು ಕೇಂದ್ರ ಸರ್ಕಾರ ಹಾಗೂ ಬಿಜೆಪಿ ಪಕ್ಷದ ಏಜೆಂಟ್ ರೀರ್ತಿ ವರ್ತಿಸುತ್ತಿದ್ದಾರೆ. ಈ ಹಿಂದೆ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದ ಅವಧಿಯಲ್ಲಿ ಬಿಜೆಪಿ ನಾಯಕರ ಮೇಲೆ ಪ್ರಾಸಿಕ್ಯೂಷನ್‌ಗೆ ಅವಕಾಶ ಕೇಳಿದರೂ ಇದಕ್ಕೆ ಅನುಮತಿ ನೀಡದ ರಾಜ್ಯಪಾಲರು ಇದೀಗ ಸಿಎಂ ಸಿದ್ದರಾಮಯ್ಯ ವಿರುದ್ಧ ಉದ್ದೇಶಪೂರಕವಾಗಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ ಎಂದು ದೂರಿದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಾ.ಡಿ.ಎಲ್.ವಿಜಯಕುಮಾರ್ ಮಾತನಾಡಿ, ಕರ್ನಾಟಕಕ್ಕೆ ಇಂದು ಕರಾಳ ದಿನ. ಅತ್ಯಂತ ಉತ್ತಮ ಸರ್ಕಾರ ಸಹಿಸದ ಹಾಗೂ ಸಿದ್ದರಾಮಯ್ಯ ಅವರ ಪ್ರಖ್ಯಾತಿ ಸಹಿಸದೆ ಅವರ ಮೇಲೆ ಬಿಜೆಪಿ ಸುಳ್ಳು ಆಪಾದನೆ ಹೊರೆಸಿ ಹೋರಾಟ ನಡೆಸುತ್ತಿದೆ. ಇದಕ್ಕೆ ರಾಜ್ಯಪಾಲರೂ ಸಾಥ್ ನೀಡಿದ್ದಾರೆ. ಹೀಗಾಗಿ ಇಂದು ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರೇಖಾ ಹುಲಿಯಪ್ಪ ಗೌಡ ಮಾತನಾಡಿ, ಮೂಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪಾತ್ರ ಇಲ್ಲದಿದ್ದರೂ ಅವರನ್ನು ಸಿಲುಕಿಸುವ ಕೆಲಸ ಬಿಜೆಪಿ ಮಾಡುತ್ತಿದೆ. ಸಿಎಂ ಕುಟುಂಬದಿಂದ ಪಡೆದ ಜಾಗಕ್ಕೆ ಪ್ರತಿಯಾಗಿ ಬಿಜೆಪಿ ಅಧಿಕಾರದಲ್ಲಿರುವಾಗಲೇ ಅರ್ಧದಷ್ಟು ನಿವೇಶನ ನೀಡಲಾಗಿದೆ. ಹೀಗಿರುವಾಗ ನಿವೇಶನ ನೀಡಿದವರ ವಿರುದ್ಧವೂ ತನಿಖೆಯಾಗಬೇಕು ಎಂದು ಆಗ್ರಹಿಸಿದರು.

ಕೆಪಿಸಿಸಿ ವಕ್ತಾರ ಎಚ್.ಎಚ್.ದೇವರಾಜ್ ಮಾತನಾಡಿ, ಸಂವಿಧಾನ, ಪ್ರಜಾಪ್ರಭುತ್ವ ವಿರೋಧಿ ರಾಜ್ಯಪಾಲರನ್ನು ಕೇಂದ್ರ ಸರ್ಕಾರ ಕೂಡಲೇ ವಾಪಸ್ ಕರೆಸಿಕೊಳ್ಳಬೇಕು. ರಾಜ್ಯದ ವಿರೋಧಿಯಾಗಿರುವ ಅವರಿಗೆ ರಾಜ್ಯದ ನೀರು, ವಿದ್ಯುತ್ ಶಕ್ತಿ ಸೇರಿದಂತೆ ಏನನ್ನೂ ನೀಡಬಾರದು ಎಂದು ಒತ್ತಾಯಿಸಿದರು.

ಸಿಎಂ ಸಿದ್ದರಾಮಯ್ಯ ಅವರಿಗೆ ಎಲ್ಲರ ಬೆಂಬಲವಿದೆ. ಹೀಗಾಗಿ ಅವರನ್ನು ಸುಲಭವಾಗಿ ಯಾರೂ ಮುಟ್ಟಲು ಸಾಧ್ಯವಿಲ್ಲ. ಸಿಎಂ ರಾಜೀನಾಮೆ ಕೇಳಲು ಬಿಜೆಪಿಗೆ ಏನು ನೈತಿಕತೆಯಿದೆ. ಬಿಜೆಪಿ ನಾಯಕರ ಮೇಲಿನ ಆಪಾದನೆಗಳಪಟ್ಟಿ ಮಾಡಿದರೆ ಬಹುತೇಕ ಎಲ್ಲ ಬಿಜೆಪಿ ನಾಯಕರು ಜೈಲಿ ನಲ್ಲಿರಬೇಕಾಗುತ್ತದೆ ಎಂದು ಟೀಕಿಸಿದರು.

ಪ್ರತಿಭಟನೆಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.ಪಿ.ಅಂಶುಮಂತ್, ಸಿಡಿಎ ಅಧ್ಯಕ್ಷ ನಯಾಜ್, ಪ್ರಮುಖರಾದ ಬಿ.ಎಚ್.ಹರೀಶ್, ರವೀಶ್ ಬಸಪ್ಪ, ತನೋಜ್ ನಾಯ್ಡು, ಶಿವಾನಂದಸ್ವಾಮಿ ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು. 17 ಕೆಸಿಕೆಎಂ 8

ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ರಾಜ್ಯಪಾಲರ ನಡೆಯನ್ನು ಖಂಡಿಸಿ ಚಿಕ್ಕಮಗಳೂರಿನ ಹನುಮಂತಪ್ಪ ವೃತ್ತದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಶನಿವಾರ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದರು.