ಸಾರಾಂಶ
ಕನ್ನಡಪ್ರಭ ವಾರ್ತೆ ಮಡಿಕೇರಿ
ಕೇಂದ್ರ ಸರ್ಕಾರದ ವಕ್ಫ್ ಕಾಯ್ದೆ ತಿದ್ದುಪಡಿ ವಿರೋಧಿಸಿ ಹಾಗೂ ಬೆಲೆ ಏರಿಕೆ ಖಂಡಿಸಿ ಕೊಡಗು ಜಿಲ್ಲಾ ಕಾಂಗ್ರೆಸ್ ಹಾಗೂ ಕೊಡಗು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕ ವತಿಯಿಂದ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.ನಗರದ ಜಾಮಿಯ ಮಸೀದಿಯಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು, ವಕ್ಫ್ ತಿದ್ದುಪಡಿ ಮಸೂದೆ ಹಿಂಪಡೆಯುವಂತೆ ಒತ್ತಾಯ ಮಾಡಿ, ಕೇಂದ್ರ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ನಗರದ ಗಾಂಧಿ ಮೈದಾನದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಮಾತನಾಡಿ, ಕರ್ನಾಟಕದಲ್ಲಿ ಕಾಂಗ್ರೆಸ್‌ನವರು ಕೆಮ್ಮಿದರೂ, ಉಸಿರಾಡಿದರೂ ಸುದ್ದಿಯಾಗುತ್ತದೆ. ಮುಸ್ಲಿಮರ ವಿರುದ್ಧ ಮಾತನಾಡದೆ, ಮುಸ್ಲಿಂರ ವಿಚಾರದಲ್ಲಿ ರಕ್ತಪಾತ ಹರಿಸಿದರೆ ದೇಶದ ಯಾವುದೇ ರಾಜ್ಯದಲ್ಲೂ ಅಧಿಕಾರಕ್ಕೆ ಬರಲ್ಲ ಎಂಬುದು ಬಿಜೆಪಿಯವರಿಗೆ ಗೊತ್ತಿದೆ. ಮುಂದೆ ಕ್ರೈಸ್ತರ ವಿರುದ್ಧವೂ ಷಡ್ಯಂತ್ರ ರೂಪಿಸುತ್ತಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಬೀಳಿಸಬೇಕು ಎಂಬುದು ಬಿಜೆಪಿ ಹುನ್ನಾರವಾಗಿದೆ. ಆದ್ದರಿಂದ ಮುಸ್ಲಿಮರ ವಿರುದ್ಧ ಇಲ್ಲಸಲ್ಲದ ಕಾನೂನು ಜಾರಿಗೆ ತರಲಾಗುತ್ತಿದೆ ಎಂದು ಟೀಕಿಸಿದರು.ಶಾಸಕ ಡಾ.ಮಂತರ್ ಗೌಡ ಮಾತನಾಡಿ ವಕ್ಫ್ ಕಾಯ್ದೆಗೆ ಸಂಬಂಧಿಸಿದಂತೆ ಕಾನೂನು ರೀತಿಯ ಹೋರಾಟ ಮಾಡಬೇಕು ಎಂದ ಅವರು, ಜಿಲ್ಲೆಯಲ್ಲಿ ಯಾವುದೇ ಜಾತಿ ಧರ್ಮದ ಭೇದವಿಲ್ಲದೆ ಎಲ್ಲಾ ಸಮುದಾಯದ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದು ಹೇಳಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ಮಾತನಾಡಿ ಎಲ್ಲಾ ದೇಶಗಳಲ್ಲಿಯೂ ವಕ್ಫ್ ಕಾಯ್ದೆ ಇದೆ. ಆದರೆ, ಕೇಂದ್ರ ಸರ್ಕಾರ ಸರ್ವಾಧಿಕಾರಿಯಾಗಿ ತರಾತುರಿಯಲ್ಲಿ ಜಾರಿಗೆ ತಂದಿದೆ. ಇದನ್ನು ಖಂಡಿಸಿ ಪ್ರತಿಭಟನೆ ಮಾಡಲಾಗಿದ್ದು, ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗುವುದು. ನ್ಯಾಯ ಒದಗಿಸುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡಬೇಕು ಎಂದು ಮನವಿ ಮಾಡಿದರು.ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಪಿ.ಎ.ಹನೀಫ್ ಮಾತನಾಡಿ, ದೇಶದಲ್ಲೇ ಅತೀದೊಡ್ಡ ಅಲ್ಪಸಂಖ್ಯಾತ ಸಮುದಾಯದ ವಿರುದ್ಧ ಕೇಂದ್ರ ಸರ್ಕಾರ ಸಂವಿಧಾನ ವಿರೋಧಿ ನೀತಿಯನ್ನು ಜಾರಿಗೆ ತಂದಿದೆ. ಆದರೆ, ವಕ್ಫ್ ಕಾಯ್ದೆ ಬಗ್ಗೆ ಸುಪ್ರಿಂ ಕೋರ್ಟ್ ತಡೆ ನೀಡಿದೆ ಎಂದ ಅವರು, ನಮ್ಮ ಹೋರಾಟ ನ್ಯಾಯಾಲಯದ ವಿರುದ್ಧ ಅಲ್ಲ. ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧವಾಗಿದೆ ಎಂದು ಹೇಳಿದರು.
ಅಲ್ಪಸಂಖ್ಯಾತರಿಗಾಗಿ ಕಾಂಗ್ರೆಸ್ ಉತ್ತಮ ಯೋಜನೆಗಳನ್ನು ಜಾರಿಗೆ ತಂದಿದೆ. ಆದರೆ, ಬಿಜೆಪಿ ನಮ್ಮ ವಿರುದ್ಧವಾಗಿ ಕಾಯ್ದೆ ಜಾರಿಗೆ ತಂದಿದೆ. ಮುಂದಿನ ದಿನಗಳಲ್ಲಿ ಅಲ್ಪಸಂಖ್ಯಾತರು ಕಾಂಗ್ರೆಸ್‌ನನ್ನು ಬೆಂಬಲಿಸಲಿದೆ ಎಂದರು.ಪ್ರತಿಭಟನೆಯಲ್ಲಿ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ.ಶಶಿಧರ್, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎ.ಇಸ್ಮಾಯಿಲ್, ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ವಿರಾಜಪೇಟೆ ತಾಲೂಕು ಅಕ್ರಮ-ಸಕ್ರಮ ಸಮಿತಿ ಅಧ್ಯಕ್ಷ ಆರ್.ಕೆ.ಅಬ್ದುಲ್ ಸಲಾಂ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಅಬ್ದುಲ್ ರೆಹಮಾನ್, ಕೊಡಗು ಕಾಂಗ್ರೆಸ್ ಮುಖಂಡ ಟಿ.ಪಿ.ರಮೇಶ್, ಯುವ ಕಾಂಗ್ರೆಸ್ ಅಧ್ಯಕ್ಷ ಜಮ್ಮಡ ಸೋಮಣ್ಣ, ಕೆಪಿಸಿಸಿ ಸದಸ್ಯ ಕೆ.ಎ.ಯಾಕುಬ್, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಸುರಯ್ಯ ಅಬ್ರಾರ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.