ಶಾಸಕ ಸತೀಶ್ ಸೈಲ್ ಮಾತನಾಡಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ಆಯೋಗದ ಸಂವಿಧಾನಾತ್ಮಕ ಜವಾಬ್ದಾರಿ ಮತ್ತು ನಿಷ್ಪಕ್ಷಪಾತತೆಯ ತತ್ವಗಳಿಗೆ ವಿರುದ್ಧವಾಗಿ ಬಿಜೆಪಿ ಪರವಾಗಿ ಅನುಕೂಲವಾಗುವ ರೀತಿಯಲ್ಲಿ ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.
ಕಾರವಾರ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆ ಹಾಗೂ ಚುನಾವಣಾ ಆಯೋಗದ ಕಾರ್ಯವೈಖರಿಯನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಕಾರವಾರದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಿ.ಟಿ. ನಾಯ್ಕ ಅವರ ನೇತೃತ್ವದಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿ, ಬಳಿಕ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಿದರು. ಈ ವೇಳೆ ಮಾತನಾಡಿದ ಶಾಸಕ ಸತೀಶ್ ಸೈಲ್, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ಆಯೋಗದ ಸಂವಿಧಾನಾತ್ಮಕ ಜವಾಬ್ದಾರಿ ಮತ್ತು ನಿಷ್ಪಕ್ಷಪಾತತೆಯ ತತ್ವಗಳಿಗೆ ವಿರುದ್ಧವಾಗಿ ಬಿಜೆಪಿ ಪರವಾಗಿ ಅನುಕೂಲವಾಗುವ ರೀತಿಯಲ್ಲಿ ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.ಎಸ್ಐಆರ್ ಮೂಲಕ ಅರ್ಹ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡುವ ಸಾಧ್ಯತೆ ಇದೆ ಎಂದ ಅವರು, ಹೊಸ ಮತದಾರರ ನೋಂದಣಿ ಹಾಗೂ ಮತದಾರರ ವಿವರಗಳ ತಿದ್ದುಪಡಿಗೆ ಸಂಬಂಧಿಸಿದ ಪ್ರಕ್ರಿಯೆಗಳ ಬಗ್ಗೆಯೂ ಆಕ್ಷೇಪ ವ್ಯಕ್ತಪಡಿಸಿದರು.ಬಳಿಕ ಮಾತನಾಡಿದ ಜಿಲ್ಲಾಧ್ಯಕ್ಷ ಜಿ.ಟಿ. ನಾಯ್ಕ, ಭಾರತ ಅತೀ ದೊಡ್ಡ ಪ್ರಜಾಪ್ರಭುತ್ವವನ್ನು ಹೊಂದಿರುವಂತ ರಾಷ್ಟ್ರ. ದೇಶದ ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆ ಉಳಿಬೇಕು ಅಂದರೆ ನಿಷ್ಪಕ್ಷಪಾತವಾದಂತಹ ಚುನಾವಣಾ ಆಯೋಗ ಬೇಕು. ಆದರೆ ಇತ್ತೀಚಿನ ದಿನಗಳಲ್ಲಿ ಮುಖ್ಯ ಚುನಾವಣಾಧಿಕಾರಿ ಜ್ಞಾನೇಶ್ ಕುಮಾರ್, ಏಕಪಕ್ಷೀಯವಾಗಿ ಬಿಜೆಪಿಗೆ ಅನುಕೂಲವಾಗುವ ರೀತಿಯಲ್ಲಿ ತೀರ್ಮಾನವನ್ನು ಕೈಗೊಳ್ಳುತ್ತಿದ್ದಾರೆ. ಅರ್ಹ ಮತದಾರರನ್ನು ಪಟ್ಟಿಯಿಂದ ಬಿಡುವಂತ ಕುತಂತ್ರವನ್ನು ಮಾಡುವ ಮೂಲಕ ಬಿಜೆಪಿಗೆ ಸಹಾಯ ಮಾಡಿ, ಅವರನ್ನು ಗೆಲ್ಲಿಸಬೇಕು ಎನ್ನುವ ದುಷ್ಟ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಇದು ಸಣ್ಣ ಅಪರಾಧವಲ್ಲವಾಗಿದ್ದು, ಅವರ ವಿರುದ್ಧ ನಾವು ಪ್ರತಿಭಟಿಸುವ ಮೂಲಕ ಅವರನ್ನು ಹುದ್ದೆಯಿಂದ ವಜಾ ಮಾಡಿ, ಅವರ ವಿರುದ್ಧ ವಿಚಾರಣೆ ನಡೆಸಿ ಕಾನೂನು ಕ್ರಮ ಜರುಗಿಸುವಂತೆ ರಾಜ್ಯಪಾಲರನ್ನು ಒತ್ತಾಯಿಸುತ್ತಿದ್ದೇವೆ. ಅವರನ್ನು ಕೂಡಲೇ ಬಂಧಿಸಿ ಮತ್ತು ಅವರಿಗೆ ಸಹಕಾರಿಯಾಗಿರುವಂಥ ಭ್ರಷ್ಟ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರ ಮೇಲೂ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಅವರು ಒತ್ತಾಯಿಸಿದರು.ಪ್ರತಿಭಟನೆಯಲ್ಲಿ ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ್ ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕುಗಳ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.