ನೈಋತ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್‌ ಬಂಡಾಯ ಶಮನ

| Published : May 21 2024, 12:48 AM IST / Updated: May 21 2024, 12:44 PM IST

ಸಾರಾಂಶ

ನೈಋತ್ಯ ಶಿಕ್ಷಕರ ಕ್ಷೇತ್ರದಿಂದ ಈ ಬಾರಿ ಟಿಕೆಟ್‌ ನಿರೀಕ್ಷೆಯಲ್ಲಿದ್ದ ಜಿಲ್ಲಾ ಕಾಂಗ್ರೆಸ್ ಸಮಿತಿ ವಕ್ತಾರ ಎಂ.ರಮೇಶ್ ಶೆಟ್ಟಿ ಟಿಕೆಟ್‌ ಕೈ ತಪ್ಪಿದ ಹಿನ್ನೆಲೆ ಅಸಮಾಧಾನಗೊಂಡು ಪಕ್ಷೇತರವಾಗಿ ಸ್ಪರ್ಧಿಸಲು ಸಲ್ಲಿಸಿದ್ದ ನಾಮಪತ್ರ ವಾಪಸ್‌ ಪಡೆದಿದ್ದಾರೆ.

 ಶಿವಮೊಗ್ಗ ;  ನೈಋತ್ಯ ಶಿಕ್ಷಕರ ಕ್ಷೇತ್ರದಿಂದ ಈ ಬಾರಿ ಟಿಕೆಟ್‌ ನಿರೀಕ್ಷೆಯಲ್ಲಿದ್ದ ಜಿಲ್ಲಾ ಕಾಂಗ್ರೆಸ್ ಸಮಿತಿ ವಕ್ತಾರ ಎಂ.ರಮೇಶ್ ಶೆಟ್ಟಿ ಟಿಕೆಟ್‌ ಕೈ ತಪ್ಪಿದ ಹಿನ್ನೆಲೆ ಅಸಮಾಧಾನಗೊಂಡು ಪಕ್ಷೇತರವಾಗಿ ಸ್ಪರ್ಧಿಸಲು ಸಲ್ಲಿಸಿದ್ದ ನಾಮಪತ್ರ ವಾಪಸ್‌ ಪಡೆದಿದ್ದಾರೆ.

ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಸಲಹೆ ಮೇರೆಗೆ ನಾಮಪತ್ರ ಹಿಂದಕ್ಕೆ ಪಡೆದಿದ್ದು, ನೈಋತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಎದ್ದಿದ್ದ ಬಂಡಾಯ ಶಮನಗೊಂಡಿದೆ. ನಾಮಪತ್ರ ವಾಪಸ್‌ಗೆ ಸೋಮವಾರ ಕೊನೆ ದಿನವಾಗಿದ್ದು, ಮೈಸೂರು ಪ್ರಾದೇಶಿಕ ಆಯುಕ್ತರ ಕಚೇರಿಗೆ ತೆರಳಿ ತಾವು ಸಲ್ಲಿಸಿದ್ದ ನಾಮಪತ್ರವನ್ನು ಹಿಂದಕ್ಕೆ ಪಡೆದುಕೊಂಡಿದ್ದಾರೆ.

ಈ ಸಂದರ್ಭದಲ್ಲಿ ಪದವೀಧರ ಕ್ಷೇತ್ರದ ಇನ್ನೊಬ್ಬ ಕಾಂಗ್ರೆಸ್ ನ ಬಂಡಾಯ ಅಭ್ಯರ್ಥಿ ರಂಗಸ್ವಾಮಿ ಕೂಡ ನಾಮಪತ್ರ ಹಿಂದಕ್ಕೆ ಪಡೆದರು. ನಾಮಪತ್ರ ಹಿಂಪಡೆಯುವ ಸಂದರ್ಭದಲ್ಲಿ ರಾಜ್ಯ ಕೆಪಿಸಿಸಿ ಅಸಂಘಟಿತ ಕಾರ್ಮಿಕರ ವಿಭಾಗದ ಮಾಜಿ ಅಧ್ಯಕ್ಷ ಶಾಂತವೀರ್ ನಾಯಕ್ ಜೊತೆಯಲ್ಲಿದ್ದರು.

ನಾಮಪತ್ರ ವಾಪಸ್‌ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ್ ಶೆಟ್ಟಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಚಿವ ಎಸ್. ಮಧು ಬಂಗಾರಪ್ಪನವರ ಸೂಚನೆ ಮೇರೆಗೆ ನಾನು ನಾಮಪತ್ರ ಹಿಂದಕ್ಕೆ ಪಡೆದುಕೊಳ್ಳುತ್ತಿದ್ದೇನೆ ಎಂದು ತಿಳಿಸಿದರು.

ವರಿಷ್ಠರ ಸೂಚನೆ ಮೇರೆಗೆ ನಾಮಪತ್ರ ವಾಪಸ್‌

ಕಳೆದ ಬಾರಿ ಚುನಾವಣೆಯಲ್ಲಿ ಅಲ್ಪ ಮತದಿಂದ ಪರಾಭವಗೊಂಡಿದ್ದೆ. ಸಾವಿರಾರು ಶಿಕ್ಷಕರು ಮತದಾರರ ಪಟ್ಟಿಗೆ ಸೇರಿಸುವ ಕೆಲಸ ಮಾಡಿದ್ದೆ. ನಾನು ಕಾಂಗ್ರೆಸ್ ನ ನಿಷ್ಠಾವಂತ ಕಾರ್ಯಕರ್ತನಂತೆ ಕೆಲಸ ನಿರ್ವಹಿಸಿದ್ದರೂ ನನಗೆ ಟಿಕೆಟ್ ಕೈತಪ್ಪಿದ್ದರಿಂದ ಕೊನೆಯ ಹಂತದಲ್ಲಾದರೂ ಟಿಕೆಟ್ ಸಿಗಬಹುದೆಂಬ ನಿರೀಕ್ಷೆಯಿಂದ ನಾಮಪತ್ರ ಸಲ್ಲಿಸಿದ್ದೆ. ವರಿಷ್ಠರ ಸೂಚನೆ ಮೇರೆಗೆ ಈಗ ನಾಮಪತ್ರ ಹಿಂದಕ್ಕೆ ಪಡೆದು ಪಕ್ಷದ ಅಧಿಕೃತ ಅಭ್ಯರ್ಥಿಗಳಾದ ಪದವೀಧರ ಕ್ಷೇತ್ರದ ಅಭ್ಯರ್ಥಿ ಆಯನೂರು ಮಂಜುನಾಥ್ ಹಾಗೂ ಶಿಕ್ಷಕರ ಕ್ಷೇತ್ರದ ಡಾ.ಕೆ ಮಂಜುನಾಥ್ ರನ್ನು ಗೆಲ್ಲಿಸಲು ಕ್ಷೇತ್ರಾದ್ಯಂತ ಸಂಚರಿಸುವೆ.

ಎಂ. ರಮೇಶ್ ಶೆಟ್ಟಿ, ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿ