ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆಯ ಪ್ರಯುಕ್ತ ಕಾಂಗ್ರೆಸ್ ಹಿರಿಯ ಮುಖಂಡರಾದ ಬೆಳಗಾನಹಳ್ಳಿ ಮುನಿವೆಂಕಟಪ್ಪ, ವೆಂಕಟಪತಿಯಪ್ಪ, ಖಯ್ಯೂಂರನ್ನು ಸನ್ಮಾನಿಸಲಾಯಿತು

ಕನ್ನಡಪ್ರಭ ವಾರ್ತೆ ಕೋಲಾರ

ನಗರ- ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಜಿಲ್ಲಾ ಕಾಂಗ್ರೆಸ್ ಕಚೇರಿಯ ಮುಂಭಾಗ ೧೪೧ನೇ ವರ್ಷದ ಕಾಂಗ್ರೆಸ್ ಪಕ್ಷದ ಸಂಸ್ಥಾಪನಾ ದಿನದ ಅಂಗವಾಗಿ ಶಾಸಕ ಕೊತ್ತೂರು ಮಂಜುನಾಥ್ ಧ್ವಜಾರೋಹಣ ನೆರವೇರಿಸಿದರು. ನಂತರ ಮಾತನಾಡಿದ ಶಾಸಕರು, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷವು ರಚನೆಗೊಂಡು ೧೪೧ ವರ್ಷಗಳಾಗಿದ್ದು, ಕಾಂಗ್ರೆಸ್ಸಿಗರಾದ ನಮಗೆ ಹೆಮ್ಮೆಯ ವಿಚಾರವಾಗಿದೆ. ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಡುವಲ್ಲಿ ಕಾಂಗ್ರೆಸ್ ಪ್ರಮುಖ ಪಾತ್ರ ವಹಿಸಿದೆ ಎಂದರು.

ಸ್ವಾತಂತ್ರ್ಯದ ಬಳಿಕವೂ ಆಧುನಿಕ ಭಾರತವನ್ನು ಕಟ್ಟುವಲ್ಲಿ ಸಾಕಷ್ಟು ಶ್ರಮ ವಹಿಸಿದೆ. ಇವತ್ತಿನ ಟಿವಿ, ಇಂಟರ್ನೆಟ್, ಕಾರು ಸೇರಿದಂತೆ ಪ್ರತಿಷ್ಠಿತ ಕಂಪನಿಗಳನ್ನು ಕೊಡುಗೆಯಾಗಿ ನೀಡಿ ಉದ್ಯೋಗವನ್ನು ನೀಡಿದ್ದಾರೆ. ಮುಂದಿನ ಪೀಳಿಗೆಗೆ ದಾರಿ ಮಾಡಿಕೊಟ್ಟಿದ್ದಾರೆ ಎಂದು ತಿಳಿಸಿದರು.

ಕಾಂಗ್ರೆಸ್ ಪಕ್ಷದಲ್ಲಿ ಯಾರಿದ್ದಾರೋ ಅವರೆಲ್ಲರೂ ನಾಯಕರೆ, ಇಲ್ಲಿ ಯಾರೂ ಸಾಮಾನ್ಯರಲ್ಲ, ಹಿಂದೆ ಬಜೆಟ್ ನಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ಮೆಡಿಕಲ್ ಕಾಲೇಜು ಪ್ರಾರಂಭಿಸಲು ಅನುದಾನ ಬಿಡುಗಡೆ ಮಾಡಲಾಯಿತು. ಕೆಲವು ಆರೋಪಗಳು ಬಂದ ಹಿನ್ನೆಲೆ ಸರ್ಕಾರವೇ ಮೆಡಿಕಲ್ ಕಾಲೇಜು ಪ್ರಾರಂಭ ಮಾಡುತ್ತದೆ ಜೊತೆಗೆ ರಿಂಗ್ ರೋಡ್ ನಿರ್ಮಾಣಕ್ಕೆ ೨.೮೫ ಕೋಟಿ ರು. ವೆಚ್ಚದಲ್ಲಿ ಡಿಪಿಆರ್ ಸಿದ್ಧಪಡಿಸಲು ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ವಿವರಿಸಿದರು.

ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ ಮಾತನಾಡಿ, ಕಾಂಗ್ರೆಸ್ ಸರ್ಕಾರದ ಎರಡುವರೆ ವರ್ಷಗಳಲ್ಲಿ ಸುಮಾರು ೧೫೦೦ ಕೋಟಿ ಅನುದಾನ ಕೋಲಾರ ವಿಧಾನಸಭಾ ಕ್ಷೇತ್ರಕ್ಕೆ ಬಂದಿದೆ. ವಿರೋಧಿಗಳ ಟೀಕೆಗೆ ಉತ್ತರ ಕೊಡಲು ದಾಖಲೆಗಳು ಸಮೇತ ಸಿದ್ಧ, ಜಿಲ್ಲೆಯ ಅಭಿವೃದ್ಧಿಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್, ಉಸ್ತುವಾರಿ ಸಚಿವ ಬೈರತಿ ಸುರೇಶ್ ಸೇರಿದಂತೆ ಜನಪ್ರತಿನಿಧಿಗಳ ಬೆಂಬಲವಿದೆ ಎಂದು ವಿವರಿಸಿದರು.

ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆಯ ಪ್ರಯುಕ್ತ ಕಾಂಗ್ರೆಸ್ ಹಿರಿಯ ಮುಖಂಡರಾದ ಬೆಳಗಾನಹಳ್ಳಿ ಮುನಿವೆಂಕಟಪ್ಪ, ವೆಂಕಟಪತಿಯಪ್ಪ, ಖಯ್ಯೂಂರನ್ನು ಸನ್ಮಾನಿಸಲಾಯಿತು

ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ವೈ.ಶಿವಕುಮಾರ್, ನಗರಸಭೆ ಮಾಜಿ ಅಧ್ಯಕ್ಷೆ ಲಕ್ಷ್ಮೀದೇವಮ್ಮ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಅಫ್ಸರ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಖಾಜಿಕಲ್ಲಹಳ್ಳಿ ಮುನಿರಾಜು, ಕುಡಾ ಅಧ್ಯಕ್ಷ ಮಹಮ್ಮದ್ ಹನೀಫ್, ಕೋಮುಲ್ ನಿರ್ದೇಶಕ ಷಂಷೀರ್, ಎಸ್ಸಿ ಘಟಕ ಜಿಲ್ಲಾ ಅಧ್ಯಕ್ಷ ಕೆ.ಜಯದೇವ್, ಎಸ್ಟಿ ಘಟಕದ ಅಧ್ಯಕ್ಷ ಅಂಬರೀಷ್, ಸೇವಾದಳದ ಅಧ್ಯಕ್ಷ ಹರಿಕುಮಾರ್, ಮುಖಂಡರಾದ ಪೆಮ್ಮಶೆಟ್ಟಿಹಳ್ಳಿ ಸುರೇಶ್, ಖಾದ್ರಿಪುರ ಬಾಬು, ವೀರೇಂದ್ರ ಪಾಟೀಲ್,ಚಂದ್ರಮೌಳಿ ರಾಜಕುಮಾರ್, ನದೀಂ ನಾರಾಯಣಸ್ವಾಮಿ ಇದ್ದರು.