ವಿದ್ಯಾರ್ಥಿಗಳ ನ್ಯಾಯಸಮ್ಮತ ಹೋರಾಟದ ಮೇಲೆ ನಡೆದಿರುವ ದಾಳಿ ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧ ಕೃತ್ಯವಾಗಿದ್ದು, ಅದನ್ನು ಸಮರ್ಥಿಸಲು ಸಾಧ್ಯವಿಲ್ಲ ಎಂದು ಸಮಾಜ ಸೇವಕ ಹಾಗೂ ಕಾಂಗ್ರೆಸ್ ಮುಖಂಡ ಅಶೋಕ್ ಪೂಜಾರಿ ಬೀಜಾಡಿ ತೀವ್ರವಾಗಿ ಖಂಡಿಸಿದ್ದಾರೆ.

ಕುಂದಾಪುರ: ವಿದ್ಯಾರ್ಥಿಗಳ ನ್ಯಾಯಸಮ್ಮತ ಹೋರಾಟದ ಮೇಲೆ ನಡೆದಿರುವ ದಾಳಿ ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧ ಕೃತ್ಯವಾಗಿದ್ದು, ಅದನ್ನು ಸಮರ್ಥಿಸಲು ಸಾಧ್ಯವಿಲ್ಲ ಎಂದು ಸಮಾಜ ಸೇವಕ ಹಾಗೂ ಕಾಂಗ್ರೆಸ್ ಮುಖಂಡ ಅಶೋಕ್ ಪೂಜಾರಿ ಬೀಜಾಡಿ ತೀವ್ರವಾಗಿ ಖಂಡಿಸಿದ್ದಾರೆ.ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಆಟವಾಡುವುದು ಹಾಗೂ ಅವರ ನ್ಯಾಯಯುತ ಹೋರಾಟ ದಮನಿಸುವುದು ಖಂಡನೀಯ. ದೇಶದ ಭವಿಷ್ಯವಾಗಿರುವ ವಿದ್ಯಾರ್ಥಿಗಳ ಹಕ್ಕುಗಳನ್ನು ರಕ್ಷಿಸುವುದು ಪ್ರತಿಯೊಬ್ಬರ ಜವಾಬ್ದಾರಿ. ತಮ್ಮ ಶೈಕ್ಷಣಿಕ ಹಕ್ಕುಗಳು ಮತ್ತು ಪಾರದರ್ಶಕತೆಯ ಬೇಡಿಕೆಗಾಗಿ ಹೋರಾಡುವುದು ಅವರ ಸಂವಿಧಾನಬದ್ಧ ಹಕ್ಕು. ಆ ಧ್ವನಿಯನ್ನು ಆಲಿಸಿ ನ್ಯಾಯ ಒದಗಿಸುವ ಬದಲು, ಅವರ ಮೇಲೆ ದೌರ್ಜನ್ಯ ಎಸಗಿರುವುದು ಪ್ರಜಾಪ್ರಭುತ್ವದ ಆತ್ಮಕ್ಕೇ ಧಕ್ಕೆ ತಂದಂತಾಗಿದೆ ಎಂದು ಹೇಳಿದ್ದಾರೆ.

ದಾಳಿಗೆ ಕಾರಣರಾದವರ ವಿರುದ್ಧ ತಕ್ಷಣವೇ ಕಾನೂನು ಕ್ರಮ ಕೈಗೊಳ್ಳಬೇಕು. ಅಧಿಕಾರದ ಬಲದಿಂದ ವಿದ್ಯಾರ್ಥಿಗಳ ಧ್ವನಿಯನ್ನು ಮೌನಗೊಳಿಸಲು ಸಾಧ್ಯವಿಲ್ಲ. ಬಂಧನ ಅಥವಾ ಬೆದರಿಕೆಯ ಮೂಲಕ ನ್ಯಾಯಯುತ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನವನ್ನು ಸರ್ಕಾರ ಕೈಬಿಡಬೇಕು. ವಿದ್ಯಾರ್ಥಿಗಳ ಬೇಡಿಕೆಗಳಿಗೆ ಸ್ಪಂದಿಸಿ, ಅವರ ಶೈಕ್ಷಣಿಕ ಭವಿಷ್ಯವನ್ನು ರಕ್ಷಿಸುವತ್ತ ಆಡಳಿತ ಗಮನಹರಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.