ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ತಪ್ಪಿತಸ್ಥರು ಎಷ್ಟೇ ಪ್ರಭಾವಿಗಳಾಗಿದ್ದರೂ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಈಗಾಗಲೇ ಭರವಸೆ ನೀಡಿದ್ದಾರೆ. ಸಿಬಿಐ ತನಿಖೆ ನಡೆಯುತ್ತಿದ್ದು, ತಪ್ಪಿತಸ್ಥರಿಗೆ ಶಿಕ್ಷೆಯಾಗಲಿದೆ ಎಂದು ಶಾಸಕ ಸಿ.ಸಿ. ಪಾಟೀಲ ತಿಳಿಸಿದರು.
ಗದಗ: ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆ ನಡೆಯುತ್ತಿರುವ ಸಂದರ್ಭದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯನ್ನು ಕಾಂಗ್ರೆಸ್ ರಾಜಕೀಯ ಉದ್ದೇಶಕ್ಕೆ ದುರುಪಯೋಗ ಮಾಡಿಕೊಂಡಿದ್ದು, ದೇಶದ್ರೋಹಿ ಶಕ್ತಿಗಳಿಗೆ ಪರೋಕ್ಷವಾಗಿ ಬೆಂಬಲ ನೀಡಿದೆ ಎಂದು ಮಾಜಿ ಸಚಿವ, ನರಗುಂದ ಶಾಸಕ ಸಿ.ಸಿ. ಪಾಟೀಲ ಆರೋಪಿಸಿದರು.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ತಪ್ಪಿತಸ್ಥರು ಎಷ್ಟೇ ಪ್ರಭಾವಿಗಳಾಗಿದ್ದರೂ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಈಗಾಗಲೇ ಭರವಸೆ ನೀಡಿದ್ದಾರೆ. ಸಿಬಿಐ ತನಿಖೆ ನಡೆಯುತ್ತಿದ್ದು, ತಪ್ಪಿತಸ್ಥರಿಗೆ ಶಿಕ್ಷೆಯಾಗಲಿದೆ.ದೆಹಲಿ ಪ್ರತಿಭಟನೆಯಲ್ಲಿ ನಿಜವಾದ ನೀಟ್ ವಿದ್ಯಾರ್ಥಿಗಳಿಗಿಂತ ಹೊರಗಿನ ವ್ಯಕ್ತಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಪ್ರತಿಭಟನೆಯ ವೇಳೆ ಹಿಂಸಾಚಾರ, ಕಲ್ಲು ತೂರಾಟ ಹಾಗೂ ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ ನಡೆದಿರುವುದು ಖಂಡನೀಯ. ಇದು ವಿದ್ಯಾರ್ಥಿಗಳ ಶಾಂತಿಯುತ ಹೋರಾಟದ ಸ್ವರೂಪವಾಗಿರದೇ, ದೇಶದಲ್ಲಿ ಅರಾಜಕತೆ ಸೃಷ್ಟಿಸುವ ಪ್ರಯತ್ನವಾಗಿದೆ ಎಂದರು.
ಲೋಕಸಭೆ ಆವರಣದತ್ತ ನುಗ್ಗಲು ಯತ್ನಿಸುವುದು, ಭದ್ರತಾ ಸಿಬ್ಬಂದಿ ಮೇಲೆ ದಾಳಿ ನಡೆಸುವುದು ಹಾಗೂ ಪ್ರಚೋದನಕಾರಿ ಘೋಷಣೆಗಳನ್ನು ಕೂಗುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ವಿರುದ್ಧವಾಗಿದೆ. ಈ ಘಟನೆಗಳ ಕುರಿತು ಸಮಗ್ರ ತನಿಖೆ ನಡೆಸಿ, ದೇಶದ್ರೋಹಿ ಕೃತ್ಯ ಸಾಬೀತಾದರೆ ಅದಕ್ಕೆ ಬೆಂಬಲ ನೀಡಿದವರು ರಾಜಕೀಯ ಹೊಣೆ ಹೊತ್ತು ಉತ್ತರಿಸಬೇಕು ಎಂದರು.ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಖಂಡನೀಯವಾದರೂ, ಅದರ ಹೆಸರಿನಲ್ಲಿ ಹಿಂಸಾಚಾರ, ರಾಷ್ಟ್ರವಿರೋಧಿ ಘೋಷಣೆಗಳು ಹಾಗೂ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಉಂಟುಮಾಡುವುದನ್ನು ಯಾವುದೇ ಕಾರಣಕ್ಕೂ ಸಮರ್ಥಿಸಲಾಗುವುದಿಲ್ಲ. ವಿದ್ಯಾರ್ಥಿಗಳ ನ್ಯಾಯಸಮ್ಮತ ಬೇಡಿಕೆಗಳನ್ನು ರಾಜಕೀಯ ಲಾಭಕ್ಕಾಗಿ ಕಾಂಗ್ರೆಸ್ ಬಳಸಿಕೊಳ್ಳುತ್ತಿದೆ.
ಈ ಸಂದರ್ಭದಲ್ಲಿ ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಕೇಂದ್ರ ಸರ್ಕಾರದ ಸಾಧನೆಗಳನ್ನು ಉಲ್ಲೇಖಿಸಿದ ಅವರು, 2014ರ ಮೊದಲು ದೇಶದಲ್ಲಿ 51348 ಎಂಬಿಬಿಎಸ್ ಸೀಟುಗಳಿದ್ದರೆ, ಈಗ ಅವು 1 ಲಕ್ಷಕ್ಕೂ ಹೆಚ್ಚು ಸಂಖ್ಯೆಗೆ ಏರಿಕೆಯಾಗಿದೆ. ವೈದ್ಯಕೀಯ ಕಾಲೇಜುಗಳ ಸಂಖ್ಯೆಯೂ ಗಣನೀಯವಾಗಿ ಹೆಚ್ಚಾಗಿದ್ದು, ಉನ್ನತ ವೈದ್ಯಕೀಯ ಶಿಕ್ಷಣಕ್ಕೆ ಕೇಂದ್ರ ಸರ್ಕಾರ ಹೆಚ್ಚಿನ ಆದ್ಯತೆ ನೀಡಿದೆ.ನೀಟ್ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವುದರಿಂದ ಕ್ರಮ ಕೈಗೊಳ್ಳಬೇಕೆಂಬುದು ಬಿಜೆಪಿ ನಿಲುವು. ಆದರೆ, ವಿದ್ಯಾರ್ಥಿಗಳ ಭಾವನೆಗಳನ್ನು ಕೆರಳಿಸಿ ದೇಶದಲ್ಲಿ ಅಶಾಂತಿ ಸೃಷ್ಟಿಸುವ ಯಾವುದೇ ಪ್ರಯತ್ನವನ್ನು ಜನರು ಒಪ್ಪುವುದಿಲ್ಲ ಎಂದರು.
ವಿಧಾನಪರಿಷತ್ ಸದಸ್ಯ ಎಸ್.ವಿ. ಸಂಕನೂರ ಮಾತನಾಡಿ, ಸೋನಮ್ ವಾಂಗ್ಚುಕ್ ಅವರು ಚೀನಾ ಮತ್ತು ಪಾಕಿಸ್ತಾನದ ಏಜೆಂಟರಾಗಿದ್ದು, ಅವರ ಶಿಕ್ಷಣ ಸಂಸ್ಥೆಗಳಿಗೆ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ ಕಟ್ಟುನಿಟ್ಟಿನ ನಿಯಮ ಪಾಲಿಸಿಸುವಂತೆ ಸೂಚಿಸುವಂತೆ ಹೇಳಿದ್ದೇ ಇಂದು ಅವರು ಹೋರಾಟಕ್ಕೆ ಮುಖ್ಯ ಕಾರಣವಾಗಿದೆ. ಮೋದಿ ಅವರನ್ನು ಚುನಾವಣೆಯಲ್ಲಿ ಎದುರಿಸಲು ಆಗದೇ ಇರುವವರು ಅವರ ಹೆಸರಿಗೆ ಮಸಿ ಬಳಿಯಲು ಈ ಪ್ರಯತ್ನ ಮಾಡಿದ್ದಾರೆ ಎಂದರು.ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಜು ಕುರುಡಗಿ, ಮಾಜಿ ಅಧ್ಯಕ್ಷ ಎಂ.ಎಸ್. ಕರಿಗೌಡ್ರ, ರವಿ ದಂಡೀನ, ಶಶಿಧರ ದಿಂಡೂರ, ನಗರಸಭೆಯ ಮಾಜಿ ಅಧ್ಯಕ್ಷ ಉಷಾ ದಾಸರ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಲಿಂಗರಾಜ ಪಾಟೀಲ, ಎಂ.ಎಂ. ಹಿರೇಮಠ ಮುಂತಾದವರು ಇದ್ದರು.