ಸಾರಾಂಶ
ಭಯೋತ್ಪಾದಕ ಕೃತ್ಯಗಳನ್ನು ಬೆಂಬಲಿಸುವ ಕಾಂಗ್ರೆಸ್‌ನ ಅಧಿಕಾರದಲ್ಲಿ ಕಾನೂನು ವ್ಯವಸ್ಥೆ ಹದಗೆಟ್ಟಿದೆ ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ವೃಷಬೇಂದ್ರಪ್ಪ ಆರೋಪಿದರು.
ಕನ್ನಡಪ್ರಭ ವಾರ್ತೆ ಚಾಮರಾಜನಗರ
ಭಯೋತ್ಪಾದಕ ಕೃತ್ಯಗಳನ್ನು ಬೆಂಬಲಿಸುವ ಕಾಂಗ್ರೆಸ್‌ನ ಅಧಿಕಾರದಲ್ಲಿ ಕಾನೂನು ವ್ಯವಸ್ಥೆ ಹದಗೆಟ್ಟಿದೆ ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ವೃಷಬೇಂದ್ರಪ್ಪ ಆರೋಪಿದರು.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಆರು ತಿಂಗಳಲ್ಲಿ ಬಾಂಬ್ ಸ್ಪೋಟ, ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ, ಸಿಎಂ, ಡಿಸಿಎಂ ಹಾಗೂ ಸಚಿವರು ಭಯೋತ್ಪಾದನಾ ಕೃತ್ಯವನ್ನು ಬೆಂಬಲಿಸುವ ಹೇಳಿಕೆಗಳು, ರಾಷ್ಟ್ರದ ಭದ್ರತೆ ಮತ್ತು ದೇಶದ ಜನರ ನೆಮ್ಮದಿ ಜೀವನಕ್ಕೆ ತಿಲಾಂಜಲಿ ಇಟ್ಟಿದ್ದಾರೆ. ಇಂಥ ಸರ್ಕಾರದ ವಿರುದ್ದ ಬಿಜೆಪಿ ನಿರಂತರ ಹೋರಾಟ ಮಾಡಲಿದೆ ಎಂದರು.
ಬೆಂಗಳೂರಿನಲ್ಲಿ ಸೈಬರ್ ಅಪರಾಧಗಳ ಸಂಖ್ಯೆ ಹೆಚ್ಚಳವಾಗಿದೆ. ಎನ್‌ಸಿಆರ್‌ಬಿ ವರದಿಯಂತೆ ರಾಜ್ಯದಲ್ಲಿ ಆರ್ಥಿಕ ಆಪರಾಧಗಳ ಸಂಖ್ಯೆ 180742ಕ್ಕೇರಿದೆ. ಮಕ್ಕಳು ಮತ್ತು ಹಿರಿಯ ನಾಗರೀಕರ ಮೇಲಿನ ಅಪರಾಧಗಳಲ್ಲಿ ಕೂಡ ಗಮನಾರ್ಹ ಏರಿಕೆಯಾಗಿದ್ದು, ಕಾಂಗ್ರೆಸ್ ಸರ್ಕಾರವು ಹಿರಿಯ ನಾಗರೀಕರನ್ನು ರಕ್ಷಣೆ ಮಾಡುವಲ್ಲಿ ವಿಫಲವಾಗಿದೆ. ಬೆಳಗಾವಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ ಪ್ರಕರಣ ರಾಜ್ಯದಲ್ಲಿ ಮಹಿಳೆಯರ ಸುರಕ್ಷತೆಯ ಬಗ್ಗೆ ಭೀತಿ ಮೂಡಿಸಿತ್ತು. ಹಾವೇರಿ ಜಿಲ್ಲೆಯಲ್ಲಿ ಮಹಿಳೆಯ ಮೇಲೆ ನಡೆದ ಮತ್ತೊಂದು ಸಾಮೂಹಿಕ ಅತ್ಯಾಚಾರ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೆಳೆಸಿದೆ ಎಂದು ದೂರಿದರು.ವಿಧಾನಸೌಧದಲ್ಲಿಯೇ ರಾಜ್ಯಸಭಾ ಸದಸ್ಯ ನಾಸಿರ್ ಹುಸೇನ್ ಬೆಂಬಲಿಗರು ಪಾಕಿಸ್ತಾನ ಪರ ಘೋಷಣೆ ಕೂಗಿರುವುದು, ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ದಾಳಿ ಪ್ರಕರಣ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ರಾಜ್ಯ ಉಗ್ರರ ಅಡಗುತಾಣವಾಗಿರುವುದಕ್ಕೆ ಸಾಕ್ಷಿಯಾಗಿದೆ ಎಂದರು.ಬಿಜೆಪಿ ಜಿಲ್ಲಾ ವಕ್ತಾರ ಕಾಡಹಳ್ಳಿ ಕುಮಾರ್ ಮಾತನಾಡಿ, ಶ್ಯಾಡೋ ಸಿಎಂ ಡಾ.ಯತೀಂದ್ರ ಕೇಂದ್ರ ಗೃಹ ಸಚಿವ ಅಮಿತಾ ಶಾ ವಿರುದ್ಧ ನೀಡಿರುವ ಹೇಳಿಕೆಯನ್ನು ಬಿಜೆಪಿ ತೀವ್ರವಾಗಿ ಖಂಡಿಸಿದ್ದಾರೆ. ಯತೀಂದ್ರ ಸಿದ್ದರಾಮಯ್ಯ ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಅವರ ಮೇಲೆ ಇದ್ದ ಎಲ್ಲಾ ಪ್ರಕರಣಗಳು ಖುಲಾಸೆಯಾಗಿವೆ. ರಾಜಕೀಯ ದುರುದ್ದೇಶದಿಂದ ನೀಡಿರುವ ದೂರು ಎಂಬುವುದು ಸಾಬೀತಾಗಿದೆ. ಇಂಥ ಪದ ಬಳಕೆ ಮಾಡಿರುವ ಯತೀಂದ್ರ ಕೂಡಲೇ ದೇಶದ ಜನರ ಕ್ಷಮೆಯಾಚನೆ ಮಾಡಬೇಕು ಎಂದು ಒತ್ತಾಯಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಜಿಲ್ಲೆಯ ಬರಪರಿಸ್ಥಿತಿಯನ್ನು ನಿರ್ವಹಿಸುವಲ್ಲಿ ವಿಫಲರಾಗಿದ್ದು, ಉಸ್ತುವಾರಿ ಸಚಿವರಾಗಿ ಒಂದು ಕೆಡಿಪಿ ಮೀಟಿಂಗ್ ಮಾಡದೇ ನೆಪ ಮಾತ್ರಕ್ಕೆ ಸಚಿವರಾಗಿದ್ದು, ಅನ್ನ ಭಾಗ್ಯ ಯೋಜನೆಯ ಅಕ್ಕಿಯನ್ನೇ ಜನರಿಗೆ ನೀಡುತ್ತಿಲ್ಲ. ಅದರ ಬದಲು ಕಾಂಗ್ರೆಸ್ ಸರ್ಕಾರ ಹಣ ನೀಡುತ್ತಿದೆ ಎಂಬ ಪರಿಜ್ಞಾನವು ಇಲ್ಲದೇ ಅನ್ನ ಭಾಗ್ಯದ ಅಕ್ಕಿಗೆ ಅರಿಶಿನ ಬೆರೆಸಿ ಬಿಜೆಪಿಯವರು ಮಂತ್ರಾಕ್ಷತೆ ನೀಡಿದ್ದಾರೆ ಎಂದು ಹೇಳಿಕೆ ನೀಡಿರುವುದು ಕಾಂಗ್ರೆಸ್ ಪಕ್ಷದ ತೃಷ್ಟೀಕರಣ ರಾಜಕಾರಣ ಮಾಡುತ್ತಿದೆ ಎಂಬುವುದಕ್ಕೆ ಸಾಕ್ಷಿಯಾಗಿದೆ ಎಂದರು. ಗೋಷ್ಠಿಯಲ್ಲಿ ಬಿಜೆಪಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಜಿ. ನಾರಾಯಣ ಪ್ರಸಾದ್, ಜಿಲ್ಲಾ ಸಹ ವಕ್ತಾರ ಮಂಜುನಾಥ್, ಮಾಧ್ಯಮ ಪ್ರಮುಖ್ ವಿರೇಂದ್ರ ಇದ್ದರು.