ಸಾರಾಂಶ
ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ಖಂಡಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಬುಧವಾರ ಮಧ್ಯಾಹ್ನ 12 ಗಂಟೆಗೆ ನಗರದ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಕಲ್ಯಾಣ ಕರ್ನಾಟಕ ವಿಭಾಗೀಯ ಮಟ್ಟದ ಪ್ರತಿಭಟನಾ ಸಮಾವೇಶ ಆಯೋಜಿಸಲಾಗಿದೆ.
ಕನ್ನಡಪ್ರಭ ವಾರ್ತೆ ರಾಯಚೂರು
ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ಖಂಡಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಬುಧವಾರ ಮಧ್ಯಾಹ್ನ 12 ಗಂಟೆಗೆ ನಗರದ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಕಲ್ಯಾಣ ಕರ್ನಾಟಕ ವಿಭಾಗೀಯ ಮಟ್ಟದ ಪ್ರತಿಭಟನಾ ಸಮಾವೇಶ ಆಯೋಜಿಸಲಾಗಿದೆ.‘ಸಂವಿಧಾನ ಬಚಾವೋ ಅಭಿಯಾನ’ದ ಈ ಬೃಹತ್ ಪ್ರತಿಭಟನಾ ಸಮಾವೇಶವನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಉದ್ಘಾಟಿಸಲಿದ್ದಾರೆ. ಪಕ್ಷದ ಕರ್ನಾಟಕ ರಾಜ್ಯ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೇವಾಲಾ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಗೋಪಿನಾಥ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಸೇರಿದಂತೆ ಕಲ್ಯಾಣ ಕರ್ನಾಟಕ ಭಾಗದ ಆರು ಜಿಲ್ಲೆಗಳ ಉಸ್ತುವಾರಿ ಸಚಿವರು, ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಮತ್ತಿತರ ನಾಯಕರು ಪಾಲ್ಗೊಳ್ಳಲಿದ್ದಾರೆ. ಸಮಾವೇಶದಲ್ಲಿ ಸುಮಾರು 25 ಸಾವಿರ ಜನರು ಭಾಗವಹಿಸುವ ನಿರೀಕ್ಷೆಯಿದೆ.
ಸಮಾವೇಶದ ಹಿನ್ನೆಲೆಯಲ್ಲಿ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಬೃಹತ್ ವೇದಿಕೆಯನ್ನು ಸಿದ್ಧಪಡಿಸಲಾಗಿದೆ. ನಗರದ ಪ್ರಮುಖ ರಸ್ತೆ, ವೃತ್ತಗಳಲ್ಲಿ ಕಾಂಗ್ರೆಸ್ ನ ಬಾವುಟ, ಬಟ್ಟಿಂಗ್ಸ್, ಬ್ಯಾನರ್, ಹೋಲ್ಡಿಂಗ್ಸ್ ಹಾಗೂ ಫ್ಲೆಕ್ಸ್‌ಗಳು ರಾರಾಜಿಸುತ್ತಿವೆ. ಸಮಾವೇಶ ಹಿನ್ನೆಲೆಯಲ್ಲಿ ಎಲ್ಲೆಡೆ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ.