ಕನ್ನಡಪ್ರಭ ವಾರ್ತೆ ಬೆಳಗಾವಿ
ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆಯೇ ಬೆಳಗಾವಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರು ಅದ್ಧೂರಿ ವಿಜಯೋತ್ಸವ ಆಚರಿಸಿದರು.ಕಾಂಗ್ರೆಸ್ ಯುವ ಮುಖಂಡ ಮೃಣಾಲ್ ಹೆಬ್ಬಾಳಕರ್ ನೇತೃತ್ವದಲ್ಲಿ ಸಂಭ್ರಮಾಚರಣೆ ನಡೆಯಿತು. ಡಿ.ಕೆ. ಶಿವಕುಮಾರ್ ಅಧಿಕಾರದ ಚುಕ್ಕಾಣಿ ಹಿಡಿದಿರುವುದು ಬೆಳಗಾವಿ ಕಾಂಗ್ರೆಸ್ ಪಾಳಯದಲ್ಲಿ ಹೊಸ ಉತ್ಸಾಹ ಮೂಡಿಸಿದ್ದು, ಕಾರ್ಯಕರ್ತರು ಈ ಐತಿಹಾಸಿಕ ಕ್ಷಣವನ್ನು ವಿಶೇಷವಾಗಿ ಸಂಭ್ರಮಿಸಿದರು. ನಗರದ ಕಾಂಗ್ರೆಸ್ ಭವನದ ಆವರಣದಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭದ ನೇರಪ್ರಸಾರವನ್ನು ವೀಕ್ಷಿಸಲು ಭಾರಿ ಸಂಖ್ಯೆಯಲ್ಲಿ ಕಾರ್ಯಕರ್ತರು, ಅಭಿಮಾನಿಗಳು ಸೇರಿದ್ದರು.
ನೇರಪ್ರಸಾರದ ವೇಳೆ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಕ್ಷಣಕ್ಕೆ ಕಾರ್ಯಕರ್ತರು ಘೋಷಣೆಗಳನ್ನು ಕೂಗಿ ಹರ್ಷೋದ್ಗಾರ ವ್ಯಕ್ತಪಡಿಸಿದರು. ಡಿಕೆಶಿ ಜಿಂದಾಬಾದ್, ಕಾಂಗ್ರೆಸ್ ಪಕ್ಷಕ್ಕೆ ಜಯ ಎಂಬ ಘೋಷಣೆಗಳು ಮೊಳಗಿದವು. ಬಳಿಕ ರಾಣಿ ಚನ್ನಮ್ಮ ವೃತ್ತಕ್ಕೆ ತೆರಳಿದ ಕಾರ್ಯಕರ್ತರು ವಿಜಯೋತ್ಸವ ನಡೆಸಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು. ಸಿಹಿ ಹಂಚಿ ಪರಸ್ಪರ ಶುಭಾಶಯ ಕೋರಿದ ಅವರು, ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ರಾಜ್ಯ ಮತ್ತಷ್ಟು ಅಭಿವೃದ್ಧಿಯತ್ತ ಸಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಹಲವರು ನೃತ್ಯ ಮಾಡಿ ಸಂತಸ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್, ಡಿ.ಕೆ.ಶಿವಕುಮಾರ್ ಅವರ ನಾಯಕತ್ವದಲ್ಲಿ ರಾಜ್ಯದಲ್ಲಿ ಜನಪರ ಆಡಳಿತ ಮತ್ತಷ್ಟು ಬಲಗೊಳ್ಳಲಿದ್ದು, ಅಭಿವೃದ್ಧಿ ಮತ್ತು ಸಾಮಾಜಿಕ ನ್ಯಾಯಕ್ಕೆ ಹೊಸ ದಿಕ್ಕು ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.