ಕುಮಾರಸ್ವಾಮಿ ಬೆಂಬಲಿಸಲು ಒಮ್ಮತದ ತೀರ್ಮಾನ

| Published : Mar 31 2024, 02:02 AM IST

ಸಾರಾಂಶ

ಮಂಡ್ಯ ಕ್ಷೇತ್ರಕ್ಕೆ ಕುಮಾರಸ್ವಾಮಿ ಅನಿವಾರ್ಯವಾಗಿದ್ದಾರೆ. ಜೆಡಿಎಸ್ ತನ್ನ ಅಸ್ತಿತ್ವ ಕಳೆದುಕೊಳ್ಳುವ ಹೊತ್ತಿನಲ್ಲಿ ಕುಮಾರಸ್ವಾಮಿ ಆಗಮನ ಮಂಡ್ಯ ಎನ್ ಡಿ ಎ ಮೈತ್ರಿಯಲ್ಲಿ ಹೊಸ ಚೈತನ್ಯ ಬರಲಿದೆ ಎಂದು ಮುಖಂಡರು ಅಭಿಪ್ರಾಯ ವ್ಯಕ್ತಪಡಿಸಿದರು.

ಕನ್ನಡಪ್ರಭ ವಾರ್ತೆ ಮದ್ದೂರು

ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಿರುವ ಮೈತ್ರಿ ಅಭ್ಯರ್ಥಿ ಎಚ್. ಡಿ. ಕುಮಾರಸ್ವಾಮಿ ಅವರನ್ನು ಬೆಂಬಲಿಸಲು ಶನಿವಾರ ನಡೆದ ಮದ್ದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಮುಖಂಡರು, ಕಾರ್ಯಕರ್ತರ ಸಭೆಯಲ್ಲಿ ಒಮ್ಮತದ ತೀರ್ಮಾನ ಕೈಗೊಳ್ಳಲಾಯಿತು.

ಪಟ್ಟಣದ ಮಳವಳ್ಳಿ ರಸ್ತೆಯ ಬಿಜೆಪಿ ಕಚೇರಿಯಲ್ಲಿ ಮನ್ಮುಲ್ ನಿರ್ದೇಶಕ. ಬಿಜೆಪಿ ಮುಖಂಡ ಎಸ್.ಪಿ.ಸ್ವಾಮಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕೇಂದ್ರ ಮತ್ತು ರಾಜ್ಯದ ಬಿಜೆಪಿ ವರಿಷ್ಠರ ನಿರ್ಧಾರಕ್ಕೆ ಬದ್ಧರಾಗಿ ಜೆಡಿಎಸ್ ಮತ್ತು ಮೈತ್ರಿ ಅಭ್ಯರ್ಥಿ ಎಚ್ .ಡಿ. ಕುಮಾರಸ್ವಾಮಿ ಅವರನ್ನು ಮುಖಂಡರು ಮತ್ತು ಕಾರ್ಯಕರ್ತರು ಕೈ ಎತ್ತಿ ಧ್ವನಿಮತದ ಮೂಲಕ ಅಂಗೀಕಾರ ನೀಡಿದರು.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಮಿಷದಿಂದ ಎರಡು ಪಕ್ಷಗಳ ಅಭ್ಯರ್ಥಿಗಳು ಸೋಲಿನ ರುಚಿ ಕಂಡಿದ್ದಾರೆ. ಇಂತಹ ಪರಿಸ್ಥಿತಿ ಲೋಕಸಭಾ ಚುನಾವಣೆಯಲ್ಲಿ ಪುನರಾವರ್ತನೆಯಾಗುವುದು ಬೇಡ ಎಂದು ಸಭೆಯಲ್ಲಿ ಕೆಲವು ಮುಖಂಡರು ಸಲಹೆ ನೀಡಿದರು.

ಮಂಡ್ಯ ಕ್ಷೇತ್ರಕ್ಕೆ ಕುಮಾರಸ್ವಾಮಿ ಅನಿವಾರ್ಯವಾಗಿದ್ದಾರೆ. ಜೆಡಿಎಸ್ ತನ್ನ ಅಸ್ತಿತ್ವ ಕಳೆದುಕೊಳ್ಳುವ ಹೊತ್ತಿನಲ್ಲಿ ಕುಮಾರಸ್ವಾಮಿ ಆಗಮನ ಮಂಡ್ಯ ಎನ್ ಡಿ ಎ ಮೈತ್ರಿಯಲ್ಲಿ ಹೊಸ ಚೈತನ್ಯ ಬರಲಿದೆ ಎಂದು ಮುಖಂಡರು ಅಭಿಪ್ರಾಯ ವ್ಯಕ್ತಪಡಿಸಿದರು.

ರಾಷ್ಟ್ರೀಯ ಮಟ್ಟದಲ್ಲಿ ಒಂದು ಸುಭದ್ರ ಮತ್ತು ಜನಪರವಾದ ಸರ್ಕಾರ ರಚನೆಯಾಗಬೇಕು ಎನ್ನುವ ಒಂದೇ ಉದ್ದೇಶದಿಂದ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡರು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಕೈಜೋಡಿಸುವ ಮೂಲಕ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದ ಅಭ್ಯರ್ಥಿ ಎಚ್.ಡಿ. ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸಲಾಗಿದೆ. ಮದ್ದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಒಗ್ಗಟ್ಟಿನಿಂದ ಮೈತ್ರಿಕೂಟದ ಗೆಲುವಿಗೆ ಶ್ರಮಿಸಬೇಕು ಎಂದು ತೀರ್ಮಾನ ಕೈಗೊಳ್ಳಲಾಯಿತು.

ಮನ್ಮುಲ್ ನಿರ್ದೇಶಕ ಎಸ್.ಪಿ.ಸ್ವಾಮಿ ಮಾತನಾಡಿ, ಕಾಂಗ್ರೆಸ್ ನಾಯಕರ ರೀತಿ ಯಾವುದೇ ಹಗರಣಗಳಲ್ಲಿ ಸಿಲುಕದೇ ಪ್ರಧಾನಿ ನರೇಂದ್ರ ಮೋದಿ ದೇಶದ ಇತಿಹಾಸದ ಪ್ರಕಾರ ತಮ್ಮ 10 ವರ್ಷದ ಆಡಳಿತವನ್ನು ಕಳಂಕ ರಹಿತವಾಗಿ ನಡೆಸಿದ್ದಾರೆ ಎಂದರು.

ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಎನ್ ಡಿ ಎ ಅಭ್ಯರ್ಥಿಯನ್ನು ಬೆಂಬಲಿಸಿ ಮೂಲಕ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಿ ದೇಶದ ಅಭಿವೃದ್ಧಿಗೆ ಶ್ರಮಿಸಬೇಕಾಗಿದೆ ಎಂದು ಹೇಳಿದರು.

ಸಭೆಯಲ್ಲಿ ಬಿಜೆಪಿ ಯುವ ಘಟಕದ ಜಿಲ್ಲಾಧ್ಯಕ್ಷ ಹಾಗಲಹಳ್ಳಿ ರಘು, ಜಿಲ್ಲಾ ಉಪಾಧ್ಯಕ್ಷ ಎಂ.ಸತೀಶ, ಮಂಡಲ ಅಧ್ಯಕ್ಷ ಸಿ.ಕೆ.ಸತೀಶ್, ಮಹಿಳಾ ಘಟಕದ ಅಧ್ಯಕ್ಷ ಶ್ವೇತಾ ಅಶೋಕ್, ಮುಖಂಡರಾದ ಎಂ.ಸಿ.ಸಿದ್ದು, ಜಿ.ಸಿ.ಮಹೇಂದ್ರ, ಜಿಪಂ ಮಾಜಿ ಸದಸ್ಯರಾದ ಬೋರಯ್ಯ, ಮನು ಕುಮಾರ್, ಲಲಿತಮ್ಮ ಸಿದ್ದರಾಜು, ಕೆಂಪಬೋರಯ್ಯ, ಡಾಬಾ ಕಿಟ್ಟಿ, ಮೋಹನ್ ಮತ್ತಿತರರು ಪಾಲ್ಗೊಂಡಿದ್ದರು.