ಶಿಡ್ಲಘಟ್ಟ ರೇಷ್ಮೆ ಮಾರುಕಟ್ಟೆ ನಿರ್ಮಾಣಕ್ಕೆ ಸಮ್ಮತಿ

| Published : Sep 10 2024, 01:40 AM IST

ಶಿಡ್ಲಘಟ್ಟ ರೇಷ್ಮೆ ಮಾರುಕಟ್ಟೆ ನಿರ್ಮಾಣಕ್ಕೆ ಸಮ್ಮತಿ
Share this Article
  • FB
  • TW
  • Linkdin
  • Email

ಸಾರಾಂಶ

ಭವಿಷ್ಯದ ಮತ್ತು ದೂರ ದೃಷ್ಟಿಯಿಂದ ಮತ್ತಷ್ಟು ಸೌಲಭ್ಯಗಳೊಂದಿಗೆ ಬೃಹತ್ ಹೈಟೆಕ್ ರೇಷ್ಮೆ ಮಾರುಕಟ್ಟೆ ನಿರ್ಮಿಸಲು 200 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿ ಹೊಸ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿತ್ತು.

ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ

ಜಿಲ್ಲೆಯ ಶಿಡ್ಲಘಟ್ಟದಲ್ಲಿ 200 ಕೋಟಿ ರು.ಗಳ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಅತ್ಯಾಧುನಿಕ ಸೌಕರ್ಯಗಳ ಸುಸಜ್ಜಿತ ಹೈಟೆಕ್ ರೇಷ್ಮೆ ಮಾರುಕಟ್ಟೆಗೆ ಆರ್ಥಿಕ ಇಲಾಖೆ ಒಪ್ಪಿಗೆ ನೀಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ತಿಳಿಸಿದರು.

ಸೋಮವಾರ ತಾಲೂಕಿನ ನಂದಿ ಕ್ರಾಸ್‌ನ ಯಲುವಳ್ಳಿ ಗ್ರಾಮದ ಬಳಿ ಇರುವ ತೋಟಗಾರಿಕೆ ಇಲಾಖೆಯ ಜಾಗದಲ್ಲಿ ಹೂ ಮಾರುಕಟ್ಟೆ ನಿರ್ಮಿಸಲು ನೀಡಿರುವ 20 ಎಕರೆ ಜಮೀನನ್ನು ಪರಿಶೀಲಿಸಿ ರೈತರೊಂದಿಗೆ ಸಂವಾದ ನಡೆಸಿ ಮಾತನಾಡಿದರು.

ಎರಡು ಹಂತದಲ್ಲಿ ನಿರ್ಮಾಣ

ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಮೊದಲ ಬಜೆಟ್ ನಲ್ಲಿ ಜಿಲ್ಲೆಯ ಶಿಡ್ಲಘಟ್ಟದಲ್ಲಿ 75 ಕೋಟಿ ರುಪಾಯಿ ವೆಚ್ಚದಲ್ಲಿ ಎರಡು ಹಂತಗಳಲ್ಲಿ ಹೈಟೆಕ್ ರೇಷ್ಮೆ ಮಾರುಕಟ್ಟೆ ನಿರ್ಮಿಸಲು ಘೋಷಣೆ ಮಾಡಲಾಗಿತ್ತು. ಆದರೆ, ಭವಿಷ್ಯದ ಮತ್ತು ದೂರ ದೃಷ್ಟಿಯಿಂದ ಮತ್ತಷ್ಟು ಸೌಲಭ್ಯಗಳೊಂದಿಗೆ ಬೃಹತ್ ಹೈಟೆಕ್ ರೇಷ್ಮೆ ಮಾರುಕಟ್ಟೆ ನಿರ್ಮಿಸಲು 200 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿ ಹೊಸ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿತ್ತು ಎಂದು ಹೇಳಿದರು.

ಈ ಪ್ರಸ್ತಾವಕ್ಕೆ ಸರ್ಕಾರ ಒಪ್ಪಿಗೆ ನೀಡಿದ್ದು, 75 ಕೋಟಿ ರುಪಾಯಿಗಳನ್ನು ನಬಾರ್ಡ್ ನೆರವಿನಿಂದ ಹಾಗೂ 125 ಕೋಟಿ ರುಪಾಯಿಗಳನ್ನು ಸರ್ಕಾರದಿಂದ ಭರಿಸಲು ತೀರ್ಮಾನಿಸಲಾಗಿದೆ‌. ಇದಕ್ಕೆ ಆರ್ಥಿಕ ಇಲಾಖೆಯೂ ಒಪ್ಪಿಗೆ ನೀಡಿದೆ. 200 ಕೋಟಿ ರೂಪಾಯಿ ವೆಚ್ಚದಲ್ಲಿ ಎರಡು ಹಂತಗಳಲ್ಲಿ ಕಾಮಗಾರಿ ಪೂರ್ಣಗೊಂಡು ಜಿಲ್ಲೆಯ ರೇಷ್ಮೆ ಬೆಳೆಗಾರರು ಮತ್ತು ವ್ಯಾಪಾರಸ್ಥರಿಗೆ ಅನುಕೂಲವಾಗಲಿದೆ ಎಂದರು.

ಮೂರು ವರ್ಷದಲ್ಲಿ ನಿರ್ಮಾಣ

ರೇಷ್ಮೆ ಮಾರುಕಟ್ಟೆ ನಿರ್ಮಾಣ ಕಾಮಗಾರಿ ಮೂರು ವರ್ಷಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಹೇಳಿದ ಸಚಿವರು, ಬಳಿಕ ಹೂ ಮಾರುಕಟ್ಟೆಗೆ ಸಂಬಂಧಿಸಿದಂತೆ ಜಿಲ್ಲೆಯ ಹೂ ಬೆಳೆಗಾರರು ಮತ್ತು ವ್ಯಾಪಾರಿಗಳೊಂದಿಗೆ ಸಂವಾದ ನಡೆಸಿ ಅಭಿಪ್ರಾಯ ಸಂಗ್ರಹಿಸಿದರು.

ಈ ಸಂದರ್ಭದಲ್ಲಿ ಶಾಸಕ ಪ್ರದೀಪ್ ಈಶ್ವರ್, ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಾಶ್.ಜಿ.ಟಿ.ನಿಟ್ಟಾಲಿ, ಉಪವಿಭಾಗಾಧಿಕಾರಿ ಡಿ.ಎಚ್. ಅಶ್ವಿನ್, ತಹಸೀಲ್ದಾರ್ ಅನಿಲ್, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕಿ ಗಾಯಿತ್ರಿ,ಕಾಂಗ್ರೆಸ್ ಮುಖಂಡ ಅಡ್ಡಗಲ್ ಶ್ರೀಧರ್,ಹೂ ಬೆಳೆಗಾರರು, ರೈತರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.