ಕಾನ್‌ಸ್ಟೇಬಲ್‌ ಹರೀಶ್‌ ಸಾವು: ಅಂಗಾಗ ದಾನ ಸಾರ್ಥಕತೆ

| Published : Feb 10 2025, 01:48 AM IST

ಸಾರಾಂಶ

ರಸ್ತೆ ಅಪಘಾತದಲ್ಲಿ ತಲೆಗೆ ಗಂಭೀರ ಸ್ವರೂಪದ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಂಕನಾಡಿ ನಗರ ಪೊಲೀಸ್ ಠಾಣೆ ಕಾನ್‌ಸ್ಟೇಬಲ್ ಹರೀಶ್ ಚಿಕಿತ್ಸೆಗೆ ಸ್ಪಂದಿಸದೆ ಭಾನುವಾರ ಮೃತಪಟ್ಟಿದ್ದಾರೆ. ಹರೀಶ್ ಅವರು ಸಾವಿನಲ್ಲೂ ಅಂಗಾಂಗ ದಾನ ಮಾಡುವ ಮೂಲಕ ಸಾರ್ಥಕತೆ ಮೆರೆದಿದ್ದಾರೆ.

ಕನ್ನಡಪ್ರಭ ವಾರ್ತೆ ಮಂಗಳೂರು

ರಸ್ತೆ ಅಪಘಾತದಲ್ಲಿ ತಲೆಗೆ ಗಂಭೀರ ಸ್ವರೂಪದ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಂಕನಾಡಿ ನಗರ ಪೊಲೀಸ್ ಠಾಣೆ ಕಾನ್‌ಸ್ಟೇಬಲ್ ಹರೀಶ್ ಚಿಕಿತ್ಸೆಗೆ ಸ್ಪಂದಿಸದೆ ಭಾನುವಾರ ಮೃತಪಟ್ಟಿದ್ದಾರೆ. ಅವರು ಮೂಲತಃ ಮೈಸೂರು ಜಿಲ್ಲೆಯ ಕೆ.ಆರ್. ನಗರ ತಾಲೂಕು ಗಾಯನಹಳ್ಳಿ ಗ್ರಾಮದ ನಿವಾಸಿ.ಮಾಣಿ-ಮೈಸೂರು ರಸ್ತೆಯ ಸುಳ್ಯ ತಾಲೂಕಿನ ಅರಂತೋಡು ಬಳಿ ಬುಧವಾರ ಅವರು ಚಲಾಯಿಸುತ್ತಿದ್ದ ಬೈಕ್ ಅಪಘಾತವಾಗಿ ತಲೆಗೆ ಗಂಭೀರ ಸ್ವರೂಪದಲ್ಲಿ ಗಾಯಗೊಂಡಿದ್ದರು. ಬಳಿಕ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು.ಅಂಗಾಂಗ ದಾನ: ಮೆದುಳು ನಿಷ್ಕ್ರಿಯಗೊಂಡಿದ್ದ ಹರೀಶ್ ಅವರ ಅಂಗಾಂಗ ದಾನ ಮಾಡುವ ಬಗ್ಗೆ ಅವರ ಮನೆಯವರು ಇಂಗಿತ ವ್ಯಕ್ತಪಡಿಸಿದರು. ಇದರಿಂದ ಮೂರ್ನಾಲ್ಕು ಮಂದಿಗೆ ಹೊಸ ಬದುಕು ಸಿಗಲಿದೆ. ಹರೀಶ್ ಅವರು ಸಾವಿನಲ್ಲೂ ಅಂಗಾಂಗ ದಾನ ಮಾಡುವ ಮೂಲಕ ಸಾರ್ಥಕತೆ ಮೆರೆದಿದ್ದಾರೆ.ಸೋಮವಾರ ಅಂತಿಮ ದರ್ಶನ: ನಗರ ಪೊಲೀಸ್ ಆಯುಕ್ತರ ಕಚೇರಿ ಆವರಣದಲ್ಲಿ ಫೆ.10ರಂದು ಹರೀಶ್ ಅವರ ಮೃತದೇಹವನ್ನು ಅಂತಿಮ ದರ್ಶನಕ್ಕೆ ಇಡಲಾಗುವುದು. ಪೊಲೀಸ್ ಗೌರವದ ಬಳಿಕ ಅವರ ಹುಟ್ಟೂರಿಗೆ ಕೊಂಡೊಯ್ಯಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಸ್ಕೂಟಿ, ಕಾರು ಡಿಕ್ಕಿ-ಸವಾರ ಸಾವು

ಉಪ್ಪಿನಂಗಡಿ: ಸ್ಕೂಟಿ ಹಾಗೂ ಕಾರಿನ ನಡುವೆ ಡಿಕ್ಕಿ ಸಂಭವಿಸಿ ಗಂಭೀರ ಗಾಯಗೊಂಡಿದ್ದ ಸ್ಕೂಟಿ ಸವಾರ ಆಸ್ಪತ್ರೆಗೆ ಕರೆದೊಯ್ಯುವ ದಾರಿಮಧ್ಯೆ ಮೃತಪಟ್ಟ ಘಟನೆ ಮಂಗಳೂರು -ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ೭೫ರ ಶಿರಾಡಿಯಲ್ಲಿ ಶನಿವಾರ ನಡೆದಿದೆ. ಶಿರಾಡಿ ಗ್ರಾಮದ ಮಿತ್ತನಾಜೆ ಕೊಟ್ಟಾಯಿಲ್ ನಿವಾಸಿ ಕೆ.ಜೆ.ಜಾನ್ (೫೯) ಮೃತರು. ಶಿರಾಡಿ ಪೇಟೆಗೆ ಬಂದಿದ್ದ ಜಾನ್ ಮನೆಗೆ ರಾಷ್ಟ್ರೀಯ ಹೆದ್ದಾರಿ ಮೂಲಕ ಹೋಗುತ್ತಿದ್ದವರು ಶಿರಾಡಿ ಇಂಡಿಯನ್ ಆಯಿಲ್ ಪೆಟ್ರೋಲ್ ಪಂಪ್ ಎದುರು ಯುಟರ್ನ್ ತೆಗೆದುಕೊಳ್ಳುತ್ತಿದ್ದ ವೇಳೆ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ ಕಾರು ಹಿಂದಿನಿಂದ ಡಿಕ್ಕಿಯಾಗಿ ದುರ್ಘಟನೆ ಸಂಭವಿಸಿತು.ಅಪಘಾತದ ಸಂದರ್ಭದಲ್ಲೇ ಮಾಜಿ ಸಂಸದ ನಳಿನ್‌ಕುಮಾರ್ ಕಟೀಲ್ ಅವರು ಬೆಂಗಳೂರಿನಿಂದ ಮಂಗಳೂರಿಗೆ ಅದೇ ದಾರಿಯಲ್ಲಿ ಬರುತ್ತಿದ್ದು ಅವರ ಬೆಂಗಾವಲು ವಾಹನದಲ್ಲಿ ಗಾಯಾಳುವನ್ನು ನೆಲ್ಯಾಡಿ ಅಶ್ವಿನಿ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ನೀಡಲಾಗಿದೆ.

ಮೃತರು ತಂದೆ, ಪತ್ನಿ, ಮೂವರು ಪುತ್ರಿಯರು, ಓರ್ವ ಪುತ್ರನನ್ನು ಅಗಲಿದ್ದಾರೆ. ಉಪ್ಪಿನಂಗಡಿ ಪೊಲೀಸ್ ಠಾಣೆಯಲಿ ಪ್ರಕರಣ ದಾಖಲಾಗಿದೆ.