ಸಾರಾಂಶ
ರಾಜ್ಯ ಪೊಲೀಸ್ ಇಲಾಖೆಯ ಸಿವಿಲ್ ಕಾನ್‌ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಫೆ.25 ರಂದು ಬೆಂಗಳೂರಿನಲ್ಲಿ ಲಿಖಿತ ಪರೀಕ್ಷೆ ನಡೆಯಲಿದೆ.
ಕನ್ನಡಪ್ರಭ ವಾರ್ತೆ ಬೆಂಗಳೂರು
ರಾಜ್ಯ ಪೊಲೀಸ್ ಇಲಾಖೆಯ ಸಿವಿಲ್ ಕಾನ್‌ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಫೆ.25 ರಂದು ಬೆಳಗ್ಗೆ 11 ಗಂಟೆಯಿಂದ 12.30 ವರೆಗೆ ನಗರದ 63 ಪರೀಕ್ಷಾ ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆಯನ್ನು 34,180 ಅಭ್ಯರ್ಥಿಗಳಿಗೆ ನಡೆಸಲಾಗುತ್ತಿದ್ದು, ಲಿಖಿತ ಪರೀಕ್ಷೆಗೆ ಅರ್ಹರಿರುವ ಅಭ್ಯರ್ಥಿಗಳಿಗೆ ಕರೆ ಪತ್ರದ ಬಗ್ಗೆ ಎಸ್‌ಎಂಎಸ್ ಮೂಲಕ ಮಾಹಿತಿ ನೀಡಲಾಗುತ್ತದೆ. ಕರೆ ಪತ್ರಗಳನ್ನು ಡೌನ್ ಲೋಡ್ ಮಾಡಿಕೊಂಡು ನಿಗದಪಡಿಸಿದ ದಿನ ಪರೀಕ್ಷೆಗೆ ಹಾಜರಾಗಬೇಕು ಎಂದು ರಾಜ್ಯ ಪೊಲೀಸ್ ನೇಮಕಾತಿ ವಿಭಾಗದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.ಪೊಲೀಸ್ ನೇಮಕಾತಿ ವಿಭಾಗದಿಂದ ಬೆಂಗಳೂರಿನಲ್ಲಿ ಮಾತ್ರ ಲಿಖಿತ ಪರೀಕ್ಷೆ ನಡೆಯಲಿದ್ದು, ಕಠಿಣ ವಸ್ತ್ರಸಂಹಿತೆ ಜಾರಿ ಮಾಡಲಾಗಿದೆ.
ಅಭ್ಯರ್ಥಿಗಳಿಗೆ ವಸ್ತ್ರ ಸಂಹಿತೆ ಹೀಗಿದೆ: - ಪುರುಷ ಮತ್ತು ತೃತಿಯಲಿಂಗಿ ಪುರುಷ ಅಭ್ಯರ್ಥಿಗಳು ಅರ್ಧ ತೋಳಿನ ಶರ್ಟ್‌ಗಳನ್ನು ಕಡ್ಡಾಯವಾಗಿ ಧರಿಸುವುದು ಹಾಗೂ ಸಾಧ್ಯವಾದಷ್ಟು ಕಾಲರ್ ರಹಿತ ಶರ್ಟ್‌ಗಳನ್ನು ಧರಿಸುವುದು. ಜಿಪ್ ಪಾಕೆಟ್‌ಗಳು, ದೊಡ್ಡ ಬಟನ್‌ಗಳಿರುವ ಶರ್ಟ್‌ಗಳನ್ನು ಧರಿಸುವಂತಿಲ್ಲ. - ಜೀನ್ಸ್ ಪ್ಯಾಂಟ್ ಮತ್ತು ಹೆಚ್ಚಿನ ಜೇಬುಗಳಿರುವ ಪ್ಯಾಂಟ್‌ಗಳಿಗೆ ನಿಷೇಧ - ಪರೀಕ್ಷಾ ಕೇಂದ್ರದೊಳಗೆ ಷೂಗಳನ್ನು ನಿಷೇದಿಸಲಾಗಿದ್ದು, ಅಭ್ಯರ್ಥಿಗಳು ತೆಳುವಾದ ಅಡಿಬಾಗವಿರುವ ಪಾದರಕ್ಷೆಗಳನ್ನು (ಚಪ್ಪಲಿ) ಧರಿಸುವುದು.- ಕುತ್ತಿಗೆ ಸುತ್ತ ಯಾವುದೇ ಲೋಹದ ಆಭರಣಗಳು ಅಥವಾ ಉಂಗುರ ಮತ್ತು ಕಡಗಗಳನ್ನು ಧರಿಸುವಂತಿಲ್ಲ.
ಮಹಿಳೆ ಮತ್ತು ತೃತೀಯ ಲಿಂಗಿ ಮಹಿಳಾ ಅಭ್ಯರ್ಥಿಗಳ ವಸ್ತ್ರಸಂಹಿತೆ:- ವಿಸ್ತಾರವಾದ ಕಸೂತಿ, ಹೂಗಳು, ಬ್ರೂಚ್‌ಗಳು ಅಥವಾ ಬಟನ್ ಹೊಂದಿರುವ ಬಟ್ಟೆಗಳನ್ನು ಧರಿಸುವುದು ನಿಷೇಧಿಸಲಾಗಿದೆ.
- ಪರೀಕ್ಷೆಯ ದಿನದಂದು ಪೂರ್ಣ ತೋಳಿನ ಬಟ್ಟೆಗಳನ್ನು/ಜೀನ್ಸ್ ಪ್ಯಾಂಟ್ ಧರಿಸಬಾರದು. ಅದರ ಬದಲಾಗಿ ಅರ್ಧ ತೋಳಿನ ಬಟ್ಟೆಗಳನ್ನು ಧರಿಸಬೇಕು.- ಎತ್ತರವಾದ ಹಿಮ್ಮಡಿಯ ಶೂಗಳನ್ನು/ಚಪ್ಪಲಿಗಳನ್ನು ಮತ್ತು ದಪ್ಪವಾದ ಅಡಿ ಭಾಗ ಹೊಂದಿರುವ ಶೂಗಳನ್ನಾಗಲಿ/ಚಪ್ಪಲಿಗಳನ್ನಾಗಲಿ ಧರಿಸಬಾರದು.
- ಮಂಗಳಸೂತ್ರ ಮತ್ತು ಕಾಲುಂಗುರ ಹೊರತುಪಡಿಸಿ ಯಾವುದೇ ರೀತಿಯ ಲೋಹದ ಆಭರಣಗಳನ್ನು ಧರಿಸುವುದು ನಿಷೇಧಿಸಿದೆ.