ಚಿಕ್ಕಮಗಳೂರುಕ್ಷೇತ್ರದ ಜನರು ನೀಡಿದ ಆಶೀರ್ವಾದದಿಂದಲೇ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಸಾಧ್ಯವಾಗುತ್ತಿದೆ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.

-ಬೀಕನಹಳ್ಳಿಯಲ್ಲಿ ನಗರ ವಿದ್ಯುತ್ ಸಂಪರ್ಕ ಕಾಮಗಾರಿಗೆ ಚಾಲನೆ

----

ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು

ಕ್ಷೇತ್ರದ ಜನರು ನೀಡಿದ ಆಶೀರ್ವಾದದಿಂದಲೇ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಸಾಧ್ಯವಾಗುತ್ತಿದೆ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.

ಚಿಕ್ಕಮಗಳೂರಿನ ಬೀಕನಹಳ್ಳಿ ಗ್ರಾಮದಲ್ಲಿ ನಗರ ವಿದ್ಯುತ್ ಸಂಪರ್ಕ ಕಲ್ಪಿಸುವ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.

ಸಾಮಾನ್ಯ ರೈತ ಕುಟುಂಬದಲ್ಲಿ ಹುಟ್ಟಿದ ತಮಗೆ ಕ್ಷೇತ್ರದ ಗುರು-ಹಿರಿಯರು, ವಿವಿಧ ಧರ್ಮಗಳ ಮುಖಂಡರು ಹಾಗೂ ಮತದಾರರು ನೀಡಿದ ಆಶೀರ್ವಾದದಿಂದ ಶಾಸಕನಾಗಿ ಸೇವೆ ಸಲ್ಲಿಸುವ ಅವಕಾಶ ದೊರೆತಿದೆ. ಜನರ ಆಶಯದಂತೆ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗುತ್ತಿದೆ ಎಂದರು.

ನಾನು ಮಾಡುತ್ತಿದ್ದೇನೆ ಎಂಬ ಕಾರಣಕ್ಕೆ ಹೇಳಿಕೊಳ್ಳುವುದಿಲ್ಲ. ಜನರು ಆಶೀರ್ವಾದ ಮಾಡಿ ಗೆಲ್ಲಿಸದಿದ್ದರೆ ಈ ಕೆಲಸಗಳನ್ನು ಮಾಡಲು ಸಾಧ್ಯವಾಗುತ್ತಿರಲಿಲ್ಲ. ಅಭಿವೃದ್ಧಿ ಕಾರ್ಯಗಳ ಎಲ್ಲ ಶ್ರೇಯಸ್ಸು ಕ್ಷೇತ್ರದ ಜನರಿಗೆ ಸಲ್ಲಬೇಕು ಎಂದು ಹೇಳಿದರು.

ಗ್ರಾಮಗಳ ಸಮಸ್ಯೆ ಆಲಿಸಿ, ಅವುಗಳಿಗೆ ಪರಿಹಾರ ಕಲ್ಪಿಸುವಲ್ಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳೊಂದಿಗೆ ನಿರಂತರವಾಗಿ ಕಾರ್ಯನಿರ್ವಹಿಸಲಾಗುತ್ತಿದೆ. ಬೀಕನಹಳ್ಳಿ ಸೇರಿ ನಗರದ ಸುತ್ತಮುತ್ತಲಿನ ಗ್ರಾಮಗಳ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು ಎಂದು ಭರವಸೆ ನೀಡಿದರು.

ಚಿಕ್ಕಮಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಚ್.ಎಸ್. ಮಂಜೇಗೌಡ ಮಾತನಾಡಿ ಶಾಸಕ ಎಚ್.ಡಿ. ತಮ್ಮಯ್ಯ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಜನಪರ ನಾಯಕನಾಗಿ ಗುರುತಿಸಿಕೊಂಡಿದ್ದಾರೆ. ಕ್ಷೇತ್ರದ ಅಭಿವೃದ್ಧಿಗೆ ಕೈಜೋಡಿಸಿ ಅಗತ್ಯ ಸಹಕಾರ ನೀಡಲಾಗುವುದು ಎಂದರು.

ಈ ಭಾಗದ ಪ್ರಮುಖ ರಸ್ತೆಗಳ ಅಗಲೀಕರಣ ಹಾಗೂ ಶಾಶ್ವತ ಡಾಂಬರೀಕರಣಕ್ಕೆ ಕ್ರಮ ಕೈಗೊಳ್ಳುವ ಅಗತ್ಯವಿದೆ. ಈ ಕುರಿತು ಶಾಸಕರೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ದೇವಾಲಯ ಸಮಿತಿ ಪದಾಧಿಕಾರಿಗಳು, ಗ್ರಾಪಂ ಮಾಜಿ ಸದಸ್ಯರು, ಮುಖಂಡರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಪೊಟೋ:

ಬೀಕನಹಳ್ಳಿಯಲ್ಲಿ ನಗರ ವಿದ್ಯುತ್ ಸಂಪರ್ಕ ಕಲ್ಪಿಸುವ ಕಾಮಗಾರಿಗೆ ಶಾಸಕ ಎಚ್.ಡಿ. ತಮ್ಮಯ್ಯ ಚಾಲನೆ ನೀಡಿದರು. ಚಿಕ್ಕಮಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಚ್.ಎಸ್. ಮಂಜೇಗೌಡ ಇದ್ದರು.