ಸಂವಿಧಾನ ಜಾಗೃತಿ‌ ಜಾಥಾ: ಬೆಳಗಾವಿ ಜಿಲ್ಲೆಗೆ ದ್ವಿತೀಯ ಸ್ಥಾನ

| Published : Apr 01 2024, 12:49 AM IST

ಸಂವಿಧಾನ ಜಾಗೃತಿ‌ ಜಾಥಾ: ಬೆಳಗಾವಿ ಜಿಲ್ಲೆಗೆ ದ್ವಿತೀಯ ಸ್ಥಾನ
Share this Article
  • FB
  • TW
  • Linkdin
  • Email

ಸಾರಾಂಶ

ಬೆಳಗಾವಿ: ಸಂವಿಧಾನದ ಆಶಯ ಹಾಗೂ ಮೌಲ್ಯಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಜಿಲ್ಲೆಯಾದ್ಯಂತ ಆಯೋಜಿಸಲಾಗಿದ್ದ‌ ಸಂವಿಧಾನ‌ ಜಾಗೃತಿ ಜಾಥಾ‌ಗೆ ಬೆಳಗಾವಿ ವಿಭಾಗಮಟ್ಟದಲ್ಲಿ ದ್ವಿತೀಯ ಬಹುಮಾನ ಲಭಿಸಿದೆ.

ಕನ್ನಡಪ್ರಭ ವಾರ್ತೆ ಬೆಳಗಾವಿ

ಸಂವಿಧಾನದ ಆಶಯ ಹಾಗೂ ಮೌಲ್ಯಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಜಿಲ್ಲೆಯಾದ್ಯಂತ ಆಯೋಜಿಸಲಾಗಿದ್ದ‌ ಸಂವಿಧಾನ‌ ಜಾಗೃತಿ ಜಾಥಾ‌ಗೆ ಬೆಳಗಾವಿ ವಿಭಾಗಮಟ್ಟದಲ್ಲಿ ದ್ವಿತೀಯ ಬಹುಮಾನ ಲಭಿಸಿದೆ.

ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಗಣರಾಜ್ಯೋತ್ಸವ ದಿನದಂದು ಜಿಲ್ಲಾ ಕ್ರೀಡಾಂಗಣದಲ್ಲಿ ಸಂವಿಧಾನ‌ ಜಾಗೃತಿ‌ ಜಾಥಾಗೆ ಚಾಲನೆ ನೀಡಿದ್ದರು. ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಪುತ್ಥಳಿ ಒಳಗೊಂಡಂತೆ ಸಂವಿಧಾನದ ಬಗ್ಗೆ ಅರಿವು ಮೂಡಿಸುವ ವಿವಿಧ ಘಟನಾವಳಿಗಳ ಮೇಲೆ ಬೆಳಕು ಚೆಲ್ಲುವ ಎರಡು ಆಕರ್ಷಕ ಸ್ತಬ್ಧಚಿತ್ರಗಳು ಜಿಲ್ಲೆಯಾದ್ಯಂತ ಸಂಚರಿಸಿದ್ದವು. ಗ್ರಾಮ ಪಂಚಾಯಿತಿ, ನಗರ ಸ್ಥಳೀಯ ಸಂಸ್ಥೆಗಳ ವತಿಯಿಂದ ಸಂವಿಧಾನ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಾರ್ವಜನಿಕರು‌ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಕ್ರಿಯವಾಗಿ ಭಾಗವಹಿಸುವಿಕೆಯಿಂದ ಅಭೂತಪೂರ್ವ ಬೆಂಬಲ ವ್ಯಕ್ತವಾಗಿತ್ತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಸಂವಿಧಾನ‌ ಜಾಗೃತಿ ಜಾಥಾ ಹಾಗೂ ಕಾರ್ಯಚಟುವಟಿಕೆಗಳಿಗೆ ವಿಭಾಗ ಮಟ್ಟದಲ್ಲಿ ದ್ವಿತೀಯ ಬಹುಮಾನ‌ದ ಜತೆಗೆ ಒಂದು ಲಕ್ಷ ರೂಪಾಯಿ ನಗದು ನೀಡಿ ಗೌರವಿಸಲಾಗಿದೆ.

ಸರ್ಕಾರ ಕೊಡಮಾಡಿದ ಬಹುಮಾನವನ್ನು ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶನಿವಾರ ನಡೆದ‌ ಸಭೆಯಲ್ಲಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹಾಗೂ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಸ್ವೀಕರಿಸಿದರು.

ಸಂವಿಧಾನ ಜಾಗೃತಿ ಜಾಥಾಗೆ ದ್ವಿತೀಯ ಬಹುಮಾನ ಬಂದಿರುವುದಕ್ಕೆ ಸಂತಸ‌ ವ್ಯಕ್ತಪಡಿಸಿದ ಅವರು, ಜಿಲ್ಲೆಯ ಜನರು ಮತ್ತು ಸಂಘ-ಸಂಸ್ಥೆಗಳ ಸಹಭಾಗಿತ್ವದಿಂದ ಇದು ಸಾಧ್ಯವಾಗಿದೆ ಎಂದು ಹೇಳಿದರು.

ಸಮಾಜ. ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ನವೀನ್ ಶಿಂತ್ರೆ, ಜಾಥಾ ಯಶಸ್ಸಿಗೆ ಕೈಜೋಡಿಸಿದ ಎಲ್ಲ ಇಲಾಖೆಗಳು, ಅಧಿಕಾರಿಗಳು, ದಲಿತಪರ ಸಂಘಟನೆಗಳು ಸೇರಿದಂತೆ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.

ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ಅಪರ ಜಿಲ್ಲಾಧಿಕಾರಿ ವಿಜಯಕುಮಾರ್ ಹೊನಕೇರಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಬಿ. ಬಸರಗಿ, ಮಹಾನಗರ ಪಾಲಿಕೆ ಆಯುಕ್ತ ಪಿ.ಎನ್. ಲೋಕೇಶ್, ದಲಿತ ಸಂಘಟನೆಗಳ ಮುಖಂಡ ಮಲ್ಲೇಶ ಚೌಗಲೆ, ಕರೆಪ್ಪ ಗುಡೆನ್ನವರ, ಕನ್ನಡಪರ ಸಂಘಟನೆಯ ಮುಖಂಡ ಮಹದೇವ ತಳವಾರ ಮತ್ತಿತರರು ಉಪಸ್ಥಿತರಿದ್ದರು.