ಸಾರಾಂಶ
ಸಂವಿಧಾನ ಜಾಗೃತಿ ಜಾಥಾ ರಾಜ್ಯಾದ್ಯಂತ ಏಕಕಾಲದಲ್ಲಿ ಜ.26ರಿಂದ ಫೆ.23ರ ವರೆಗೆ ಪ್ರತಿಯೊಂದು ಜಿಲ್ಲೆಯಲ್ಲಿ ಸಂವಿಧಾನ ಜಾಗೃತಿ ಜಾಥಾ ಹೊರಡಲಿದೆ ಎಂದು ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪೂರ ಹೇಳಿದರು.
ಕನ್ನಡಪ್ರಭ ವಾರ್ತೆ ಯಾದಗಿರಿ
ಸಮಾಜ ಕಲ್ಯಾಣ ಇಲಾಖೆಯಿಂದ ಸಂವಿಧಾನ ದಿನಾಚರಣೆ ಪ್ರಯುಕ್ತ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ ರಾಜ್ಯಾದ್ಯಂತ ಹಮ್ಮಿಕೊಳ್ಳಲು ಕರ್ನಾಟಕ ಸರ್ಕಾರ ನಿರ್ದೇಶಿಸಿದೆ ಎಂದು ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪೂರ ಹೇಳಿದರು.ನಗರದ ಜಿಪಂ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಭಾರತರತ್ನ ಡಾ. ಅಂಬೇಡ್ಕರ್ ತತ್ವ ಸಿದ್ಧಾಂತಗಳನ್ನು ಭಾರತ ಸಂವಿಧಾನ ಪೀಠಿಕೆ, ಅಂಬೇಡ್ಕರ್ ಅವರ ನ್ಯಾಯ, ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಚಿಂತನೆ ವ್ಯಾಪಕ ಪ್ರಚಾರ ಮಾಡಲು ಸಂವಿಧಾನ ಜಾಗೃತಿ ಜಾಥಾ ರಾಜ್ಯಾದ್ಯಂತ ಏಕಕಾಲದಲ್ಲಿ ಜ.26ರಿಂದ ಫೆ.23ರ ವರೆಗೆ ಪ್ರತಿಯೊಂದು ಜಿಲ್ಲೆಯಲ್ಲಿ ಸಂವಿಧಾನ ಜಾಗೃತಿ ಜಾಥಾ ಹೊರಡಲಿದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಪ್ರತಿಯೊಂದು ತಾಲೂಕು, ಗ್ರಾಪಂ ಹಂತದಲ್ಲಿ ಸಂವಿಧಾನದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮ ನಡೆಸಲಾಗುತ್ತದೆ. ಈ ಜಾಥಾ ಜಿಲ್ಲೆಯ ಎಲ್ಲ ತಾಲೂಕು ಗ್ರಾಪಂ ವ್ಯಾಪ್ತಿಯಲ್ಲಿ ತೆರಳುವುದು. ಅಂತಿಮವಾಗಿ ಫೆ.25ರಂದು ಬೆಂಗಳೂರು ಅರಮನೆ ಮೈದಾನದಲ್ಲಿ ನಡೆಯುವ ರಾಷ್ಟ್ರೀಯ ಮಟ್ಟದ ಸಂವಿಧಾನ ಜಾಗೃತಿ ಸಮಾವೇಶದಲ್ಲಿ ಭಾಗವಹಿಸುವುದು ಎಂದು ಹೇಳಿದರು. ತಾಲೂಕು, ಗ್ರಾಪಂ ವ್ಯಾಪ್ತಿಯಲ್ಲಿ ಸುಮಾರು ಒಂದು ತಿಂಗಳುಗಳವರೆಗೆ ಸಂವಿಧಾನ ಜಾಗೃತಿ ಜಾಥಾ ಸಂಚರಿಸುತ್ತಿರುವದರಿಂದ ಯಾದಗಿರಿ ಜಿಲ್ಲೆ ಜನತೆ ಈ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ ಯಶಸ್ವಿಗೊಳಿಸಲು ಮನವಿ ಮಾಡಿದರು.