ಇಲ್ಲಿನ ಪಟ್ಟಣ ಪಂಚಾಯತಿ ಸಭಾಂಗಣದಲ್ಲಿ ಗುರುವಾರ ಸಂವಿಧಾನ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಸೋಮವಾರಪೇಟೆ : ಇಲ್ಲಿನ ಪಟ್ಟಣ ಪಂಚಾಯತಿ ಸಭಾಂಗಣದಲ್ಲಿ ಗುರುವಾರ ಸಂವಿಧಾನ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎಂ.ಪಿ. ಮಹೇಶ್ ಕುಮಾರ್ ಅವರು ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಸಂವಿಧಾನ ಪೀಠಿಕೆಯನ್ನು ಓದಿದರು. ಇದೇ ಸಂದರ್ಭ ದಿನದ ಮಹತ್ವ ಕುರಿತು ಮಾತನಾಡಿ, ಭಾರತದ ಸಂವಿಧಾನವನ್ನು ಅಂಗೀಕರಿಸಿದ ನೆನಪಿಗಾಗಿ ಪ್ರತಿ ವರ್ಷ ನವೆಂಬರ್ 26 ರಂದು ಸಂವಿಧಾನ ದಿನಾಚರಣೆ (ಸಂವಿಧಾನ ದಿವಸ) ಆಚರಿಸಲಾಗುತ್ತಿದೆ. ಸಂವಿಧಾನ ರಚನೆಯಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಅವರು ಪ್ರಮುಖ ಪಾತ್ರ ವಹಿಸಿದ್ದರು. ಸಂವಿಧಾನದ ಮೌಲ್ಯಗಳು ಮತ್ತು ಮೂಲಭೂತ ಹಕ್ಕು-ಕರ್ತವ್ಯಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಈ ದಿನವನ್ನು ಸಂವಿಧಾನ ದಿವಸವಾಗಿ ಆಚರಿಸಲಾಗುತ್ತಿದೆ ಎಂದರು.

ಎಲ್ಲ ಸಿಬ್ಬಂದಿ ಸಂವಿಧಾನ ಪೀಠಿಕೆ ವಾಚಿಸಿ ಪ್ರತಿಜ್ಞೆ ವಿಧಿ ಸ್ವೀಕರಿಸಿದರು. ಈ ಸಂದರ್ಭ ಕಂದಾಯ ನಿರೀಕ್ಷಕ ಎಚ್.ಎ. ಜೀವನ್‌ಕುಮಾರ್, ಸಿಬ್ಬಂದಿ ಅರುಣ್ ಕುಮಾರ್, ವನಿತಾ, ರೈನಾ, ಹರ್ಷಿತಾ, ಆದಿಲ್ ಮತ್ತು ಇತರರು ಭಾಗವಹಿಸಿದ್ದರು.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ: ಪಟ್ಟಣದ ಬಾಣವಾರ ರಸ್ತೆಯಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಮುಖ್ಯಾಧಿಕಾರಿ ಮಹೇಶ್ ಕುಮಾರ್ ಪುಷ್ಪಹಾರ ಅರ್ಪಿಸಿ ಗೌರವ ನಮನ ಸಲ್ಲಿಸಿದರು. ಈ ಸಂದರ್ಭ ಸಿಬ್ಬಂದಿ ಇದ್ದರು.